ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ನೂತನ ಸರ್ಕಾರದ ಮೊದಲ ಬಜೆಟ್ ಮಂಡಿಸಿದರು. ಇದೇ ವೇಳೆ ʻವಿದ್ಯಾರ್ಥಿಗಳಿಗಾಗಿ ತೋಟಗಾರಿಕೆʼ ಸೇರಿ ತೋಟಗಾರಿಕೆ ಕ್ಷೇತ್ರಕ್ಕೆ ಹಲವು ಯೋಜನೆಗಳನ್ನು ಘೋಷಿಸಿದರು.
ಪ್ರಮುಖ ಅಂಶಗಳು
1 ರೈತರ ಆದಾಯವನ್ನು ಹೆಚ್ಚಿಸುವುದರಲ್ಲಿ ತೋಟಗಾರಿಕಾ ಬೆಳೆಗಳು ಪ್ರಮುಖ ಪಾತ್ರ ವಹಿಸುತ್ತವೆ. ತೋಟಗಾರಿಕಾ ವಲಯದಲ್ಲಿನ ರಾಜ್ಯದ ಸಾಮರ್ಥ್ಯವನ್ನು ಹೆಚ್ಚಿಸಲು ತೆಂಗು, ಅಡಿಕೆ, ದ್ರಾಕ್ಷಿ, ದಾಳಿಂಬೆ, ಮಾವು ಮತ್ತಿತರ ಹಣ್ಣು, ತರಕಾರಿ, ಹೂವುಗಳು ಸೇರಿದಂತೆ ತೋಟಗಾರಿಕಾ ಬೆಳೆಗಳ ಉತ್ಪಾದನೆ, ಸಂಸ್ಕರಣೆ, ಬ್ರಾಂಡಿಂಗ್ ಮತ್ತು ರಫ್ತಿಗೆ ಹೆಚ್ಚಿನ ಒತ್ತು ನೀಡಲಾಗುವುದು. 2023-24ನೇ ಸಾಲಿನಲ್ಲಿ ಐದು ಕೋಟಿ ರೂ. ವೆಚ್ಚದಲ್ಲಿ ರೋಗ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುವುದು. ತೋಟಗಾರಿಕಾ ಉತ್ಪನ್ನಗಳ ಸಂಸ್ಕರಣೆಗಾಗಿ ಎಂಟು ಶೀತಲ ಘಟಕಗಳನ್ನು ನಿರ್ಮಾಣ ಮಾಡಲಾಗುವುದು.
2 ಅನನ್ಯವಾದ ರುಚಿ ಮತ್ತು ಕಂಪನ್ನು ಹೊಂದಿರುವ ಚಿಕ್ಕಮಗಳೂರು, ಕೊಡಗು ಮತ್ತು ಬಾಬಾ ಬುಡನಗಿರಿಯ ಅರೇಬಿಕಾ ಕಾಫಿ ವೈವಿಧ್ಯಗಳು GI Tag ಹೊಂದಿವೆ. ರಾಜ್ಯದ ಕಾಫಿಯನ್ನು ಇನ್ನಷ್ಟು ಪ್ರಚುರಪಡಿಸಿ ಜನಪ್ರಿಯಗೊಳಿಸಲು ಮತ್ತು ಕಾಫಿ ಎಕೋ ಟೂರಿಸಂ ಅನ್ನು ಉತ್ತೇಜಿಸಲು ಕರ್ನಾಟಕದ ಕಾಫಿಗೆ ಬ್ರಾಂಡಿಂಗ್ ಮಾಡಲು ಕ್ರಮ ವಹಿಸಲಾಗುವುದು.
ಇದನ್ನೂ ಓದಿ:Karnataka Budget: ಡೆಲಿವರಿ ಬಾಯ್ ಗಳ ಸಾಮಾಜಿಕ ಸುರಕ್ಷತೆಯ ಕಾಳಜಿ ವಹಿಸಿದ ಸರಕಾರ
3 ವಿಶೇಷ ಕಂಪು, ರುಚಿ ಮತ್ತು ಸೊಗಡಿನಿಂದ ಜನಮನದಲ್ಲಿ ನೆಲೆಸಿರುವ ಮೈಸೂರು ಮಲ್ಲಿಗೆ, ನಂಜನಗೂಡು ರಸಬಾಳೆ ಹಾಗೂ ಮೈಸೂರು ವೀಳ್ಯದೆಲೆಗಳು GI Tag ಗಳನ್ನು ಪಡೆದಿವೆ. ಇವುಗಳ ಉತ್ಪಾದನೆ, ಸಂಶೋಧನೆ, ಮಾರುಕಟ್ಟೆ ಮತ್ತು ಬ್ರಾಂಡಿಂಗ್ ಉತ್ತೇಜಿಸಲು ನೂತನ ಕಾರ್ಯಕ್ರಮವನ್ನು ರೂಪಿಸಲಾಗುವುದು.
4 ವಾಣಿಜ್ಯ ಹೂವಿನ ರಫ್ತಿನಲ್ಲಿ ಕರ್ನಾಟಕ ಅಗ್ರಸ್ಥಾನ ಹೊಂದುವ ಸಾಮರ್ಥ್ಯ ಹೊಂದಿದ್ದು, ಇವುಗಳ ತಳಿಗಳ ಕೊರತೆ ನಿವಾರಿಸಲು ಅಂತಹ ತಳಿಗಳನ್ನು ಆಮದು ಮಾಡಿಕೊಂಡು ರೈತರಿಗೆ ಕೈಗೆಟಕುವ ದರದಲ್ಲಿ ಒದಗಿಸಲು ಕ್ರಮವಹಿಸಲಾಗುವುದು.
5 ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತೋಟಗಾರಿಕಾ ಕ್ಷೇತ್ರದ ಪ್ರಾಯೋಗಿಕ ಅರಿವು ಮೂಡಿಸಲು ʻವಿದ್ಯಾರ್ಥಿಗಳಿಗಾಗಿ ತೋಟಗಾರಿಕೆʼ ಯೋಜನೆಯನ್ನು ಜಾರಿಗೊಳಿಸಲಾಗುವುದು.