Advertisement
ರಾಜ್ಯದ 62 ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು 6ನೇ ತರಗತಿಯಿಂದ 12ನೇ ತರಗತಿಯವರೆಗೆ Integrated ಶಾಲೆಗಳನ್ನಾಗಿ ಉನ್ನತೀಕರಿಸಲಾಗುವುದು. ಇದರಿಂದ 13,000 ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದ್ದು, ಈ ಯೋಜನೆಗೆ ಪ್ರಸಕ್ತ ಸಾಲಿನಲ್ಲಿ 30 ಕೋಟಿ ರೂ.ಗಳನ್ನು ಒದಗಿಸಲಾಗುವುದು. ಇದಲ್ಲದೇ, 50 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ವಿದ್ಯಾರ್ಥಿಗಳ ದಾಖಲಾತಿಯನ್ನು ದ್ವಿಗುಣಗೊಳಿಸುವ ಮೂಲಕ ಹೆಚ್ಚುವರಿಯಾಗಿ 12,500 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲು 23 ಕೋಟಿ ರೂ.ಗಳನ್ನು ಒದಗಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಹೊಸದಾಗಿ 10 ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು ಎಂದರು
Related Articles
Advertisement
ರಾಮನಗರ, ಬೆಳಗಾವಿ, ದಾವಣಗೆರೆ, ಕಲಬುರಗಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಲ್ಪಸಂಖ್ಯಾತ ಯುವಜನರಿಗೆ ಕೌಶಲ್ಯ ತರಬೇತಿಯನ್ನು ನಾಲ್ಕು ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು. ಅಲ್ಪಸಂಖ್ಯಾತರ ಪದವಿ ಪೂರ್ವ ವಸತಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಥಮ ವರ್ಷದಿಂದಲೇ NEET, JEE, CET ಹಾಗೂ ಇತರೆ ಪ್ರವೇಶ ಪರೀಕ್ಷೆಗಳ ತಯಾರಿಗಾಗಿ ಪ್ರತಿಷ್ಠಿತ ಸಂಸ್ಥೆಗಳಿಂದ ಎರಡು ವರ್ಷಗಳ ತರಬೇತಿಯನ್ನು ನೀಡಲು ಎಂಟು ಕೋಟಿ ರೂ.ಗಳ ಅನುದಾನ ನೀಡಲಾಗುವುದು.
ಬೆಂಗಳೂರು ನಗರದಲ್ಲಿ ನಿರ್ಮಿಸಿರುವ ಹಜ಼್ ಭವನದಲ್ಲಿ ಅಲ್ಪಸಂಖ್ಯಾತರ ಯುವ ಜನರಿಗೆ 10 ತಿಂಗಳ ವಸತಿಸಹಿತ IAS/KAS ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಳನ್ನು ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಪ್ರಾರಂಭಿಸಲಾಗುವುದು.
ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿಶ್ವದಲ್ಲಿ 250 ರೊಳಗೆ University Ranking ಹೊಂದಿರುವ ಪ್ರತಿಷ್ಠಿತ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ವ್ಯಾಸಂಗ ಮಾಡಲು ಅನುಕೂಲವಾಗುವಂತೆ ಶೂನ್ಯ ಬಡ್ಡಿ ದರದಲ್ಲಿ ಪ್ರತಿ ವಿದ್ಯಾರ್ಥಿಗೆ 20 ಲಕ್ಷ ರೂ. ಸಾಲ ಸೌಲಭ್ಯ ಒದಗಿಸಲಾಗುವುದು.ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ 10,000 ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಅವಕಾಶವನ್ನು ಕಲ್ಪಿಸುವ ಸಲುವಾಗಿ ಇವರುಗಳಿಗೆ ಬ್ಯಾಂಕ್‌ಗಳಿಂದ ಪಡೆಯುವ ಸಾಲ ಮೊತ್ತದ ಶೇ. 20 ರಷ್ಟು ಅಥವಾ ಗರಿಷ್ಠ ಒಂದು ಲಕ್ಷ ರೂ.ವರೆಗೆ ಸಹಾಯಧನವನ್ನು ನೀಡಲಾಗುವುದು.
ʻಸ್ವಾವಲಂಬಿ ಸಾರಥಿʼ ಯೋಜನೆಯಡಿ, ಅಲ್ಪಸಂಖ್ಯಾತ ನಿರುದ್ಯೋಗಿ ಯುವಜನರು ನಾಲ್ಕು ಚಕ್ರಗಳ ವಾಹನ ಖರೀದಿಗೆ ಪಡೆಯುವ ಸಾಲಕ್ಕೆ ಶೇ.50 ರಷ್ಟು, ಗರಿಷ್ಠ 3 ಲಕ್ಷ ರೂ.ಗಳ ಸಹಾಯಧನ ನೀಡುವ ಮೂಲಕ ಸ್ವಯಂ ಉದ್ಯೋಗ ಕೈಗೊಳ್ಳಲು ಪ್ರೋತ್ಸಾಹಿಸಲಾಗುವುದು. ಸರ್ಕಾರದ ಹಿಂದಿನ ಅವಧಿಯಲ್ಲಿ ರಾಜ್ಯಾದ್ಯಂತ ನೂರಾರು ಶಾದಿ ಮಹಲ್ ಮತ್ತು ಸಮುದಾಯ ಭವನಗಳನ್ನು ನಿರ್ಮಿಸಲು ಅನುಮೋದನೆ ನೀಡಲಾಗಿತ್ತು. ಆದರೆ, ನಂತರದ ದಿನಗಳಲ್ಲಿ ಈ ಭವನಗಳನ್ನು ಪೂರ್ಣಗೊಳಿಸಿರುವುದಿಲ್ಲ. ಅಂತಹ 126 ಶಾದಿ ಮಹಲ್ ಮತ್ತು ಸಮುದಾಯ ಭವನಗಳ ನಿರ್ಮಾಣ ಕಾರ್ಯಗಳನ್ನು 54 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸಲಾಗುವುದು.
ಹಿಂದೂಯೇತರ ಧಾರ್ಮಿಕ ಸಂಸ್ಥೆಗಳಿಗೆ ಕರ್ನಾಟಕ ಇನಾಮ್ ರದ್ದಿಯಾತಿ ಅಧಿನಿಯಮದನ್ವಯ ನೀಡಲಾಗುತ್ತಿರುವ ತಸ್ತಿಕ್ ಮೊತ್ತವನ್ನು 48,000 ರೂ.ಗಳಿಂದ 60,000 ರೂ.ಗಳಿಗೆ ಹೆಚ್ಚಿಸಲಾಗುವುದು. ಇದರಿಂದ ತಸ್ತಿಕ್ ಪಡೆಯುತ್ತಿರುವ 868 ಸಂಸ್ಥೆಗಳಿಗೆ ಅನುಕೂಲವಾಗಲಿದೆ. ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಯೋಜನೆ ಮತ್ತು ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿ ಯೋಜನೆಗಳಡಿ ವಿವಿಧ ಕಾರ್ಯಕ್ರಮಗಳನ್ನು ಕೈಗೊಳ್ಳಲು ಪ್ರಸಕ್ತ ಸಾಲಿನಲ್ಲಿ 36೦ ಕೋಟಿ ರೂ.ಗಳನ್ನು ಮೀಸಲಿಡಲಾಗುವುದು.
ಜೈನರ ಪ್ರಮುಖ ಪುಣ್ಯಕ್ಷೇತ್ರಗಳ ಅಭಿವೃದ್ಧಿಗಾಗಿ 25 ಕೋಟಿ ರೂ. ಅನುದಾನವನ್ನು ಒದಗಿಸಲಾಗುವುದು. ನಾಡಿನ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ 100 ಕೋಟಿ ರೂ. ಅನುದಾನ ನೀಡಲಾಗುವುದು.
ರಾಜ್ಯದಲ್ಲಿ 40,000 ಕ್ಕಿಂತಲೂ ಅಧಿಕ ವಕ್ಛ್ ಆಸ್ತಿಗಳಿದ್ದು, ಇವುಗಳ ಸಂರಕ್ಷಣೆ ಮತ್ತು ಅಭಿವೃದ್ದಿಗಾಗಿ 2023-24ನೇ ಸಾಲಿನಲ್ಲಿ 50 ಕೋಟಿ ರೂ. ಒದಗಿಸಲಾಗುವುದು. ಹಲಸೂರಿನಲ್ಲಿರುವ ಗುರುದ್ವಾರದ ಅಭಿವೃದ್ಧಿಗೆ 25 ಕೋಟಿ ರೂ. ಅನುದಾನ ನೀಡಲಾಗಿದೆ. ಅದೇ ಮಾದರಿಯಲ್ಲಿ ಮೈಸೂರು, ಕಲಬುರಗಿ ಮತ್ತು ಹುಬ್ಬಳ್ಳಿಯಲ್ಲಿರುವ ಗುರುದ್ವಾರಗಳ ಅಭಿವೃದ್ಧಿಗೆ ಐದು ಕೋಟಿ ರೂ.ಗಳನ್ನು ಒದಗಿಸಲಾಗುವುದು. ಗುರುದ್ವಾರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಗ್ರಂಥಿಗಳಿಗೆ ಅವರ ದೈನಂದಿನ ಜೀವನ ನಿರ್ವಹಣೆಗೆ ಅನುಕೂಲವಾಗುವಂತೆ ಮಾಸಿಕ ಗೌರವ ಧನ ನೀಡಲಾಗುತ್ತಿದೆ ಎಂದು ಬಜೆಟ್ ನಲ್ಲಿ ಸಿಎಂ ಘೋಷಿಸಿದ್ದಾರೆ.