ಹಾವೇರಿ: ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್ ಹಾಗೂ ಬಿಜೆಪಿಗೆ ಪ್ರತಿಷ್ಠೆಯಾಗಿದ್ದು, ಕ್ಷೇತ್ರದಲ್ಲಿ ಎರಡು ಪಕ್ಷಗಳ ತಂತ್ರ, ಪ್ರತಿತಂತ್ರಗಳ ಸದ್ದು ಜೋರಾಗಿದೆ. ಕ್ಷೇತ್ರದಲ್ಲಿ ಚುನಾವಣಾ ಕಣ ಟಿಕೆಟ್ ಘೋಷಣೆಗೂ ಮೊದಲೇ ರಂಗೇರುತ್ತಿದೆ.
Advertisement
ಶಿಗ್ಗಾವಿ ಕ್ಷೇತ್ರ ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದು, ಕ್ಷೇತ್ರದಲ್ಲಿ ಗೆಲುವು ಸಾಧಿ ಸುವ ಮೂಲಕ ಕ್ಷೇತ್ರದಲ್ಲಿ ತಮ್ಮ ಪಕ್ಷದ ಬಲಾಬಲ ಸಾಬೀತುಪಡಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಹೀಗಾಗಿ ಎರಡು ಪಕ್ಷಗಳ ಹೈಕಮಾಂಡ್ ಅಭ್ಯರ್ಥಿ ಆಯ್ಕೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಅಳೆದು ತೂಗಿ ಅಭ್ಯರ್ಥಿ ಘೋಷಣೆಗೆ ಮುಂದಾಗಿದ್ದು ಕುತೂಹಲ ಮೂಡಿಸಿದೆ.
Related Articles
Advertisement
ಮತ್ತೊಂದೆಡೆ ಕಾಂಗ್ರೆಸ್ ಯಾರಿಗೆ ಟಿಕೆಟ್ ನೀಡುತ್ತೋ ಅದನ್ನು ಅವಲೋಕಿಸಿ ಬಿಜೆಪಿ ಟಿಕೆಟ್ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಹೀಗಾಗಿ ಮೊದಲು ಯಾರು ಟಿಕೆಟ್ ಘೋಷಣೆ ಮಾಡ್ತಾರೆ ಎಂಬುದೂ ಕುತೂಹಲಕಾರಿಯಾಗಿದೆ.
ಕಗ್ಗಂಟಾದ ಟಿಕೆಟ್ ಹಂಚಿಕೆ: ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆಯ ಮುಹೂರ್ತ ನಿಗದಿಯಾಗಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದ್ದರೂ ಬಿಜೆಪಿ-ಕಾಂಗ್ರೆಸ್ ಪಕ್ಷಗಳಿಗೆ ಟಿಕೆಟ್ ಹಂಚಿಕೆ ಕಗ್ಗಂಟಾಗಿದೆ. ಬಿಜೆಪಿ ಟಿಕೆಟ್ ಹಂಚಿಕೆ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿಬೆಂಗಳೂರಿನಲ್ಲಿ ರಹಸ್ಯ ಮಾತುಕತೆ ನಡೆಸಿದ್ದಾರೆ. ಈ ವೇಳೆ ಬಿಜೆಪಿ ತೆಕ್ಕೆಯಲ್ಲಿರುವ ಶಿಗ್ಗಾವಿ ಕ್ಷೇತ್ರವನ್ನು ಗೆಲ್ಲುವ ಕುರಿತು ಹೆಚ್ಚು ಚರ್ಚೆ ನಡೆದಿದೆ. ಈ ವೇಳೆ ಭರತ್ ಬೊಮ್ಮಾಯಿಗೆ ಟಿಕೆಟ್ ನೀಡುವ ಕುರಿತು ಮಾತುಕತೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಒಂದು ವೇಳೆ ಭರತ್ ಬೊಮ್ಮಾಯಿಗೆ ಟಿಕೆಟ್ ನೀಡಲು ಹೈಕಮಾಂಡ್ ಒಪ್ಪದಿದ್ದರೆ ಬಸವರಾಜ ಬೊಮ್ಮಾಯಿ ಅವರ ಆಪ್ತ ಚೆನ್ನು ಪಾಟೀಲರಿಗೆ ಟಿಕೆಟ್ ಕೊಡಿಸುವ ಬಗ್ಗೆಯೂ ಗಂಭೀರ ಚಿಂತನೆ ನಡೆದಿದೆ ಎನ್ನಲಾಗಿದ್ದು, ಇನ್ನುಳಿದಂತೆ ಸ್ಥಳೀಯ ಬಿಜೆಪಿ ಮುಖಂಡರಾದ ಶ್ರೀಕಾಂತ ದುಂಡಿಗೌಡ್ರ, ಶೋಭಾ ನಿಸ್ಸಿಮಗೌಡ್ರ, ಶಿವಾನಂದ ಮ್ಯಾಗೇರಿ, ಡಿ.ಎಸ್. ಮಾಳಗಿ ಟಿಕೆಟ್‌ಗಾಗಿ ಲಾಬಿ ನಡೆಸಿದ್ದಾರೆ. ಕಾಂಗ್ರೆಸ್‌ನಲ್ಲಿ ಟಿಕೆಟ್‌ಗೆ ಲಾಬಿ ಜೋರು:
ಕಾಂಗ್ರೆಸ್‌ನಲ್ಲಿ ಸಹ ಟಿಕೆಟ್‌ಗಾಗಿ ಆಕಾಂಕ್ಷಿಗಳ ಲಾಬಿ ಜೋರಾಗಿದ್ದು, ಕಾಂಗ್ರೆಸ್ ಟಿಕೆಟ್ ಹಂಚಿಕೆ ಸಂಬಂಧ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹಾಗೂ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ಟಿಕೆಟ್ ಆಕಾಂಕ್ಷಿಗಳೊಂದಿಗೆ ಬೆಂಗಳೂರಿನಲ್ಲಿ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿ ಆಕಾಂಕ್ಷಿಗಳ ಪಟ್ಟಿ ಸಿದ್ಧಪಡಿಸಿ
ಹೈಕಮಾಂಡ್‌ಗೆ ರವಾನಿಸಲಾಗಿದೆ. ಅ. 23ಕ್ಕೆ ಟಿಕೆಟ್ ಅಂತಿಮಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದ್ದು, ಕೈ ಟಿಕೆಟ್‌ಗಾಗಿ ಮಾಜಿ
ಶಾಸಕ ಅಜ್ಜಂಫೀರ್ ಖಾದ್ರಿ, ಯಾಸೀರ್ ಖಾನ್ ಪಠಾಣ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ, ಕಾಡಾ ಅಧ್ಯಕ್ಷ ಸೋಮಣ್ಣ ಬೇವಿನಮರದ, ಮಾಜಿ ಸಚಿವ ಆರ್.ಶಂಕರ್ ಪ್ರಯತ್ನ ನಡೆಸಿದ್ದಾರೆ. ■ ವೀರೇಶ ಮಡ್ಲೂರ