ಬೆಂಗಳೂರು: ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರಕಾರ ರಚನೆಯಾಗಿ ಆರು ತಿಂಗಳ ಬಳಿಕ ಮೊದಲ ಬಾರಿಗೆ ನಡೆದ ಸಂಪುಟ ಪುನಾರಚನೆಯಲ್ಲಿ ಪ್ರಥಮ ಬಾರಿಗೆ ಶಾಸಕರಾಗಿ ಆಯ್ಕೆಯಾದ ನಾಲ್ವರು ಸೇರಿದಂತೆ ಎಂಟು ಮಂದಿ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಶನಿವಾರ ದೇವರ ಹೆಸರಿನಲ್ಲಿ ಪ್ರಮಾನವಚನ ಸ್ವೀಕರಿಸಿದರು.
ಸಚಿವ ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ರಾಜಭವನದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಸಿಎಸ್ ಶಿವಳ್ಳಿ, ಎಂಟಿಬಿ ನಾಗರಾಜ್, ತುಕಾರಾಂ, ಪಿಟಿ ಪರಮೇಶ್ವರ್ ನಾಯ್ಕ್, ಸತೀಶ್ ಜಾರಕಿಹೊಳಿ, ತಿಮ್ಮಾಪುರ್, ಎಂಬಿ ಪಾಟೀಲ್, ರಹೀಂಖಾನ್ ಅವರಿಗೆ ರಾಜ್ಯಪಾಲ ವಜೂಭಾಯಿ ವಾಲಾ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಪರಮೇಶ್ವರ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.
ರಾಮಲಿಂಗಾರೆಡ್ಡಿ ಬೆಂಬಲಿಗರಿಂದ ಪ್ರತಿಭಟನೆ:
ಕಾಂಗ್ರೆಸ್ ಹಿರಿಯ ಮುಖಂಡ ರಾಮಲಿಂಗಾರೆಡ್ಡಿ ಅವರಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕಾಗಿ ಚಾಲುಕ್ಯ ಸರ್ಕಲ್ ಸಮೀಪ ಬೆಂಬಲಿಗರು ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.