ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ನಿರಂತರ ಮಳೆ ಸುರಿಯುತ್ತಿರುವುದರಿಂದ ಆಗಿರುವ ಅನಾಹುತ ಪರಿಶೀಲನೆ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದಿನಿಂದ ಮೂರು ದಿನ ಕರಾವಳಿ ಜಿಲ್ಲೆಗಳ ಪ್ರವಾಸ ಕೈಗೊಳ್ಳಲಿದ್ದಾರೆ.
ಮಂಗಳವಾರ ಬೆಳಿಗ್ಗೆ ಮೈಸೂರಿಗೆ ತೆರಳಿ ಅಲ್ಲಿಂದ ಕೊಡಗು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಪ್ರವಾಹ ಪೀಡಿದ ಪ್ರದೇಶಗಳ ಪರಿಶೀಲನೆ ನಡೆಸಲಿದ್ದಾರೆ. ಬುಧವಾರ ಬೆಳಿಗ್ಗೆ ಉತ್ತರ ಕನ್ನಡ ಜಿಲ್ಲೆಗೆ ತೆರಳಲಿದ್ದು ಅಲ್ಲಿನ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿ ಬುಧವಾರ ಸಂಜೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅತಿವೃಷ್ಟಿ ಯಿಂದ ಹಾನಿಗೊಳಗಾದ ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಲೆನಾಡು, ಕೊಡಗು, ಕರಾವಳಿ ಹಾಗೂ ಉತ್ತರ ಕನ್ನಡ ಭಾಗದಲ್ಲಿಕಳೆದ 10 ದಿನಗಳಿಂದ ವ್ಯಾಪಕವಾಗಿ ಮಳೆಯಾಗುತ್ತಿದೆ. ಈಗಾಗಲೇ ಸಂಬಂಧಿಸಿದ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೊ ಸಂವಾದ ಹಾಗೂ ನೆರವಾಗಿಯೂ ಮಾತನಾಡಿದ್ದು, ಮಳೆ ತಗ್ಗಿರುವುದರಿಂದ ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿ, ಸ್ಥಿತಿಗತಿಯನ್ನು ಅವಲಂಬಿಸಿ ಪರಿಹಾರಕ್ಕೆ ಸೂಚನೆ ನೀಡಲಾಗುವುದು ಎಂದರು.