Advertisement

Independence Day: ಕರ್ನಾಟಕವನ್ನು ಏಷ್ಯಾದಲ್ಲೇ ಮೊದಲ ಸ್ಥಾನಕ್ಕೆ ಒಯ್ಯುವ ಗುರಿ: ಸಿಎಂ

09:46 AM Aug 15, 2023 | Team Udayavani |

ಬೆಂಗಳೂರು: ಭವಿಷ್ಯದ ತಂತ್ರಜ್ಞಾನ ಹಾಗೂ ಅತ್ಯಾಧುನಿಕ ಉತ್ಪಾದನಾ ವಲಯದಲ್ಲಿ ಸಮಾನ ಹಾಗೂ ಸುಸ್ಥಿರ ಬೆಳವಣಿಗೆಯ ಮೂಲಕ ಕರ್ನಾಟಕವನ್ನು ಏಷ್ಯಾದಲ್ಲೇ ಮೊದಲ ಸ್ಥಾನಕ್ಕೆ ಒಯ್ಯುವ ಗುರಿ ನಮ್ಮದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Advertisement

ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ರಾಜ್ಯದ ಜನತೆಗೆ ಶುಭಾಶಯ ಕೋರಿದ ಮಾತನಾಡಿದ ಅವರು ಸಾವಿರಾರು ಜನರ ತ್ಯಾಗ, ಬಲಿದಾನಗಳ ಫಲವಾಗಿ ಇಂದು ನಾವು ಸ್ವಾತಂತ್ರ್ಯದ ಸವಿಯುಣ್ಣುತ್ತಿದ್ದೇವೆ. ಪ್ರಾಣದ ಹಂಗು ತೊರೆದು ದಾಸ್ಯದ ಸಂಕೋಲೆಯಿಂದ ದೇಶವನ್ನು ಬಿಡುಗಡೆಗೊಳಿಸಲು ಹೋರಾಡಿದ ಎಲ್ಲ ಮಹಾನ್ ಚೇತನಗಳಿಗೂ ಗೌರವ ಪೂರ್ವಕ ನಮನ ಸಲ್ಲಿಸುತ್ತೇನೆ ಎಂದರು.

ಸ್ವತಂತ್ರ ಭಾರತದಲ್ಲಿ ಜೀವಿಸುತ್ತಿರುವ ನಮಗೆ ಸ್ವಾತಂತ್ರ್ಯ ಎಂಬುದು ಎಷ್ಟು ದುಬಾರಿಯಾದ ಸಂಗತಿ ಎಂಬುದು ಅರಿವಿಗೆ ಬರಲೇಬೇಕು. ಇಲ್ಲದಿದ್ದರೆ ನಮ್ಮ ಹಿರಿಯರ ತ್ಯಾಗ ಬಲಿದಾನಗಳಿಗೆ ಅರ್ಥವೇ ಇರುವುದಿಲ್ಲ. ಸ್ವಾತಂತ್ರ್ಯ ಎಂಬುದು ಮನುಷ್ಯರ ಜೀವಕ್ಕಿಂತ ಮಿಗಿಲು ಎಂದು ಸ್ವಾತಂತ್ರ್ಯ ಹೋರಾಟಗಾರರು ಭಾವಿಸಿದ್ದರು. ಆದ್ದರಿಂದಲೇ ಎಲ್ಲ ಮಹನೀಯರು ತಮ್ಮ ಸರ್ವಸ್ವವನ್ನೂ ತ್ಯಾಗ ಮಾಡಿ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿದ್ದರು. ಅವರ ತ್ಯಾಗ ಬಲಿದಾನಗಳನ್ನು ದೇಶವು ಶ್ರದ್ಧಾಪೂರ್ವಕವಾಗಿ ಸ್ಮರಿಸಲೇಬೇಕು ಎಂದರು.

ಶಾಂತಿಯುತ ಸಮಾಜವಿದ್ದರೆ ಮಾತ್ರ ಅಭಿವೃದ್ಧಿ ಸಾಧಿಸಲು ಸಾಧ್ಯ ಎಂದು ನಮ್ಮ ಜನರಿಗೆ ಅರ್ಥವಾಗಿರುವುದರಿಂದ ದುಷ್ಟರ ಆಟಗಳು ಬಹಳ ಕಾಲ ನಡೆಯುವುದಿಲ್ಲ ಎಂಬುದನ್ನು ಕರ್ನಾಟಕದ ಜನರೇ ಸಾಬೀತು ಮಾಡಿದ್ದಾರೆ ಎಂದು ಹೇಳಿದರು.

ಬ್ರಿಟಿಷರು ಭಾರತದ ಸ್ಥಳೀಯ ಉತ್ಪಾದನಾ ವಿಧಾನಗಳ ಕೈ ಬೆರಳುಗಳನ್ನು ಕತ್ತರಿಸಿ ಹಾಕಿ ಮಾರುಕಟ್ಟೆಯ ಮೇಲೆ ಯಜಮಾನಿಕೆಯನ್ನು ಸಾಧಿಸಿದ್ದರು. ಇದರಿಂದಾಗಿ ದೇಶದ ಆರ್ಥಿಕತೆ ಪೂರ್ತಿ ಪಾತಾಳಕ್ಕೆ ಕುಸಿದಿತ್ತು. ಬ್ರಿಟಿಷರು ದೇಶದ ಜನರ ಮೇಲೆ ಸಾಲವನ್ನು, ಕೈಗಳಿಗೆ ನಿರುದ್ಯೋಗವನ್ನು, ಹೊಟ್ಟೆ ತುಂಬ ಹಸಿವನ್ನು ಬಳುವಳಿಯಾಗಿ ಕೊಟ್ಟು ಹೋಗಿದ್ದರು. ಇಂಥ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಚಿಂತನೆಗಳು ಮತ್ತು ಪಂಡಿತ್ ಜವಾಹರಲಾಲ್ ನೆಹರೂ ಅವರ ಕಾರ್ಯಯೋಜನೆಗಳು ದೇಶವನ್ನು ಪಾತಾಳದಿಂದ ಮೇಲೆತ್ತಲು ಸಾಧ್ಯ ಮಾಡಿದವು. ಇವರೆಲ್ಲರ ಕೊಡುಗೆಯಿಂದ ಭಾರತವು ಇಂದು ಜಗತ್ತಿನಲ್ಲಿ ಅತ್ಯಂತ ಪ್ರಬಲ ದೇಶವಾಗಿ ಬೆಳೆದಿದೆ.

Advertisement

ಬೆಲೆ ಏರಿಕೆ, ನಿರುದ್ಯೋಗ, ಜಾತಿ-ಧರ್ಮಗಳ ಕಾರಣಕ್ಕಾಗಿ ತಾರತಮ್ಯ, ಭ್ರಷ್ಟಾಚಾರ ಮುಂತಾದ ಕಾರಣಗಳಿಗಾಗಿ ನಾಡಿನ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರು. ರಾಜ್ಯದ ಅನೇಕ ಜಿಲ್ಲೆಗಳ ಜನರ ತಲಾದಾಯ ಹಿಂದೆ ಆಡಳಿತ ನಡೆಸಿದ್ದ ನಮ್ಮ ಹಿಂದಿನ ಸರ್ಕಾರದ ಅವಧಿಗೆ ಹೋಲಿಸಿದರೆ ಆ ನಂತರದ ಅವಧಿಯಲ್ಲಿ ಏರಿಕೆಯಾಗದೆ ಬಡತನ ಇನ್ನಷ್ಟು ಹೆಚ್ಚುತ್ತಿರುವುದು ನಮ್ಮ ಗಮನಕ್ಕೆ ಬಂದಿತ್ತು. ಇದನ್ನೆಲ್ಲ ಗಂಭೀರವಾಗಿ ಪರಿಗಣಿಸಿದ ನಮ್ಮ ಸರ್ಕಾರ ಜನರ ಆರ್ಥಿಕ, ಸಾಮಾಜಿಕ ಚೈತನ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಸಾರ್ವತ್ರಿಕ ಮೂಲ ಆದಾಯ ಎಂಬ ಹೊಸ ಆರ್ಥಿಕ ಪ್ರಮೇಯವನ್ನು ಅಳವಡಿಸಿಕೊಂಡು ಗ್ಯಾರಂಟಿ ಯೋಜನೆಗಳನ್ನು ರೂಪಿಸಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next