ನವದೆಹಲಿ: ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಮೇ 13ರಂದು ಪ್ರಕಟವಾಗಿದ್ದು, ಕಾಂಗ್ರೆಸ್ ಪಕ್ಷ ಭರ್ಜರಿ ಜಯಭೇರಿ ಗಳಿಸಿ ಬಹುಮತ ಗಳಿಸಿತ್ತು. ಆದರೆ ಕಳೆದ ನಾಲ್ಕೈದು ದಿನಗಳಿಂದ ರಾಷ್ಟ್ರರಾಜಧಾನಿಯಲ್ಲಿ ಮುಖ್ಯಮಂತ್ರಿ ಹುದ್ದೆ ಆಯ್ಕೆಗಾಗಿ ಬಹಳಷ್ಟು ಹೈಡ್ರಾಮಾ ನಡೆದಿದ್ದು, ಕೊನೆಗೂ ಮುಖ್ಯಮಂತ್ರಿ ಆಯ್ಕೆ ಬಿಕ್ಕಟ್ಟನ್ನು ಬಗೆಹರಿಸುವಲ್ಲಿ ಕಾಂಗ್ರೆಸ್ ಹೈಕಮಾಂಡ್ ಯಶಸ್ಸು ಕಂಡಿದೆ.
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಸಿದ್ದರಾಮಯ್ಯ ಅವರನ್ನು ನೂತನ ಮುಖ್ಯಮಂತ್ರಿಯನ್ನಾಗಿ ಹಾಗೂ ಡಿಕೆ ಶಿವಕುಮಾರ್ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಗುರುವಾರ (ಮೇ 18) ನವದೆಹಲಿಯ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೆವಾಲ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದ್ದಾರೆ.
ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿಯೂ ಮುಂದುವರಿಯಲಿದ್ದಾರೆ. ಮೇ 20ರಂದು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಿಷ್ಟು:
ಹಾಲಿ ಕಾಂಗ್ರೆಸ್ ಸರ್ಕಾರದಲ್ಲಿ ಡಿಕೆ ಶಿವಕುಮಾರ್ ಮಾತ್ರ ಡಿಸಿಎಂ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರಲು ಭಾರತ್ ಜೋಡೋ ಯಾತ್ರೆ ತುಂಬಾ ಸಹಕಾರಿಯಾಗಿದೆ. ಅಷ್ಟೇ ಅಲ್ಲ ರಾಜ್ಯದಲ್ಲಿ ಪಕ್ಷದ ಗೆಲುವಿಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರ ಶ್ರಮವೂ ಇದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ಅವಿರತ ಪ್ರಚಾರ ಕಾರ್ಯವನ್ನು ಅಭಿನಂದಿಸಲೇಬೇಕು. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷದ ಆಸ್ತಿಯಾಗಿದ್ದಾರೆ. ಚುನಾವಣೆಯಲ್ಲಿ ಡಿಕೆ ಶಿವಕುಮಾರ್ ಅವರು ಡೈನಾಮಿಕ್ ಲೀಡರ್ ಆಗಿ ಕಾರ್ಯನಿರ್ವಹಿಸಿದ್ದಾರೆ. ರಾಜ್ಯ ಕಾಂಗ್ರೆಸ್ ನಲ್ಲಿ ಸಮರ್ಥ ನಾಯಕತ್ವವಿದೆ.