Advertisement

ವಿಧಾನಸಭೆ ಚುನಾವಣೆ: ಸಿದ್ದರಾಮಯ್ಯ ಸಾರಥ್ಯ

03:25 AM Jun 01, 2017 | Karthik A |

ಬೆಂಗಳೂರು: ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿಯೇ ಎದುರಿಸಲು ಕಾಂಗ್ರೆಸ್‌ ಹೈಕಮಾಂಡ್‌ ತೀರ್ಮಾನಿಸಿದೆ. ಮುಂದಿನ ಚುನಾ ವಣೆಗೆ ನಾಯಕತ್ವ ಯಾರದ್ದು ಎಂಬ ಪ್ರಶ್ನೆಯೇ ಬಹುಚರ್ಚಿತ ವಿಷಯವಾಗಿತ್ತು. ಇದಕ್ಕೆ  ಕಾಂಗ್ರೆಸ್‌ ಹೈಕಮಾಂಡ್‌ ತೆರೆ ಎಳೆದಿದ್ದು, ಇದೇ ಮೊದಲ ಬಾರಿಗೆ ಲಿಖೀತ ರೂಪದಲ್ಲಿ ಅಧಿಕೃತ ಆದೇಶ ಹೊರಡಿಸಿದೆ.

Advertisement

ಈ ಮೂಲಕ ರಾಜ್ಯ ಕಾಂಗ್ರೆಸ್‌ಗೆ ಸಿದ್ದರಾಮಯ್ಯ ಅವರೇ ನಾಯಕ ಎಂಬ ಸಂದೇಶ ರವಾನೆ ಮಾಡಿದೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜನಾರ್ದನ ದ್ವಿವೇದಿ, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಸೂಚನೆ ಮೇರೆಗೆ 2018ರ ಕರ್ನಾಟಕ ವಿಧಾನಸಭಾ ಚುನಾವಣೆಯ ನೇತೃತ್ವವನ್ನು ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಹಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ಅದಲ್ಲದೆ, ಕೆಪಿಸಿಸಿ ಹಾಲಿ ಅಧ್ಯಕ್ಷ ಡಾ| ಜಿ. ಪರಮೇಶ್ವರ್‌ ಅವರು ಅಧ್ಯಕ್ಷರಾಗಿ ಮುಂದುವರಿಯಲಿದ್ದು, ಅವರು ತತ್‌ಕ್ಷಣದಿಂದ ಗೃಹ ಸಚಿವ ಹುದ್ದೆಗೆ ರಾಜೀನಾಮೆ ನೀಡುವಂತೆ ಸೂಚಿಸಲಾಗಿದೆ. ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಎಸ್‌.ಆರ್‌. ಪಾಟೀಲ್‌ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದ್ದು, ಅವರಿಗೆ ಉತ್ತರ ಕರ್ನಾಟಕದ ಜವಾಬ್ದಾರಿ ನೀಡಲಾಗಿದೆ. ಇನ್ನೊಬ್ಬ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ಗೆ ದಕ್ಷಿಣ ಕರ್ನಾಟಕದ ಉಸ್ತುವಾರಿ ನೀಡಲಾಗಿದೆ.

ರಾಜ್ಯಾಧ್ಯಕ್ಷ ಸ್ಥಾನದ ಪ್ರಮುಖ ಆಕಾಂಕ್ಷಿಯಾಗಿದ್ದ ಇಂಧನ ಸಚಿವ ಡಿ. ಕೆ. ಶಿವಕುಮಾರ್‌ ಅವರನ್ನು 2018ರ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರ ನ್ನಾಗಿ ನೇಮಕ ಮಾಡಲಾಗಿದೆ. ಇನ್ನೋರ್ವ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಕೆ.ಎಚ್‌. ಮುನಿಯಪ್ಪ ಅವರನ್ನು ಸಿಡಬ್ಲ್ಯುಸಿಗೆ ವಿಶೇಷ ಆಹ್ವಾನಿತರನ್ನಾಗಿ ನೇಮಕ ಮಾಡಲಾಗಿದೆ. ಅಲ್ಲದೆ, ಮುಖ್ಯಮಂತ್ರಿ ವಿರುದ್ಧ ಮುನಿಸಿಕೊಂಡಿದ್ದ ಮಾಜಿ ಸಚಿವ ಸತೀಶ್‌ ಜಾರಕಿಹೊಳಿ ಅವರನ್ನು ಎಐಸಿಸಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಕಾಂಗ್ರೆಸ್‌ ಹೈಕಮಾಂಡ್‌ ಎಲ್ಲ ಸಮುದಾಯಗಳ ನಾಯಕರನ್ನು ಸಮಾಧಾನಪಡಿಸುವ ಪ್ರಯತ್ನಕ್ಕೆ ಮುಂದಾಗಿದ್ದು, ಎಲ್ಲರಿಗೂ ಜವಾಬ್ದಾರಿಗಳನ್ನು ನೀಡಿ, ರಾಜ್ಯದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕು ಎಂದು ಚುನಾವಣಾ ರಣತಂತ್ರ ಹೆಣೆದಿದ್ದು, ಈಗಿನಿಂದಿಲೇ ಕಾರ್ಯತಂತ್ರ ರೂಪಿಸುವಂತೆ ರಾಜ್ಯ ನಾಯಕರಿಗೆ ಸೂಚನೆ ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next