Advertisement

Karnataka Govt.; ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಮೀಸಲು ನೀಡಲು ಮಸೂದೆ

01:33 AM Jul 17, 2024 | Team Udayavani |

ಬೆಂಗಳೂರು: ದಶಕಗಳ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ ಕನ್ನಡಿಗರಿಗೆ ರಾಜ್ಯ ಸರಕಾರ ಸಿಹಿ ಸುದ್ದಿ ನೀಡಿದೆ. ಸ್ಥಳೀಯ ಖಾಸಗಿ ವಲಯಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ನೀಡುವ ಮಸೂದೆಯನ್ನು ವಿಧಾನ ಮಂಡಲದಲ್ಲಿ ಮಂಡಿಸಲು ಸಂಪುಟ ಸಭೆ ಒಪ್ಪಿಗೆ ನೀಡಿದೆ.

Advertisement

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಮಹತ್ವದ ಮಸೂದೆ ಮಂಡನೆಗೆ ಒಪ್ಪಿಗೆ ದೊರೆತಿದೆ. ಕರ್ನಾಟಕ ರಾಜ್ಯ ಕೈಗಾರಿಕೆಗಳು, ಕಾರ್ಖಾನೆಗಳು ಮತ್ತು ಇತರ ಸಂಸ್ಥೆಗಳಲ್ಲಿ ಸ್ಥಳೀಯ ಅಭ್ಯರ್ಥಿಗಳ ಉದ್ಯೋಗ ಕರಡು ಮಸೂದೆ, 2024ರ ಪ್ರಕಾರ, ವ್ಯವಸ್ಥಾಪಕ (ಮ್ಯಾನೇಜ್‌ಮೆಂಟ್‌) ಹುದ್ದೆಗಳು ಶೇ. 50 ಹಾಗೂ ವ್ಯವಸ್ಥಾಪಕೇತರ (ನಾನ್‌ ಮ್ಯಾನೇಜ್‌ಮೆಂಟ್‌) ಹುದ್ದೆಗಳಿಗೆ ಶೇ.75ರಷ್ಟನ್ನು ಸ್ಥಳೀಯರಿಗೆ ಮೀಸಲಿಡಬೇಕು. ಈಗ ಇದಕ್ಕೆ ರಾಜ್ಯ ಸಚಿವ ಸಂಪುಟದಲ್ಲಿ ಒಪ್ಪಿಗೆ ದೊರಕಿದ್ದು, ಅಧಿವೇಶನದಲ್ಲಿ ಮಂಡಿಸುವುದೊಂದೇ ಬಾಕಿ ಇದೆ.

ಉಲ್ಲಂಘಿಸಿದರೆ ದಂಡ
ಸ್ಥಳೀಯರಿಗೆ ಉದ್ಯೋಗ ನೀಡದಿದ್ದರೆ ಅಂತಹ ಸಂಸ್ಥೆಗಳಿಗೆ ದಂಡ ವಿಧಿಸುವ ಅಂಶವನ್ನೂ ಮಸೂದೆಯಲ್ಲಿ ಸೇರಿಸಲಾಗಿದೆ. ಕನಿಷ್ಠ 10 ಸಾವಿರ ರೂ.ಗಳಿಂದ 25 ಸಾವಿರ ರೂ. ವರೆಗೂ ದಂಡ ವಿಸ್ತರಣೆ ಮಾಡಲು ಅವಕಾಶ ನೀಡಲಾಗುತ್ತದೆ. ಅನಂತರವೂ ಉದ್ಯೋಗ ನೀಡದೇ ಹೋದರೆ ದಿನಕ್ಕೆ 100 ರೂ. ದಂಡ ವಿಧಿಸಲಾಗುತ್ತದೆ.

ಸಿ, ಡಿ ದರ್ಜೆಗೆ ಶೇ. 100 ಉದ್ಯೋಗ
ರಾಜ್ಯದ ಎಲ್ಲ ಖಾಸಗಿ ಕೈಗಾರಿಕೆಗಳಲ್ಲಿ “ಸಿ ಮತ್ತು ಡಿ’ ದರ್ಜೆಯ ಹುದ್ದೆಗಳಿಗೆ 100ಕ್ಕೆ 100ರಷ್ಟು ಕನ್ನಡಿಗರ ನೇಮಕಾತಿಯನ್ನು ಕಡ್ಡಾಯಗೊಳಿಸುವ ಮಸೂದೆಗೆ ಮಂಗಳವಾರ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ. ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ನಮ್ಮ ಸರಕಾರದ ಆಶಯ.

ನಮ್ಮದು ಕನ್ನಡಪರವಾದ ಸರಕಾರ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಹೇಳಿದ್ದಾರೆ.

Advertisement

ಶಾಲಾ ಪ್ರಮಾಣ ಪತ್ರ ಇಲ್ಲದಿದ್ದರೆ?
ಕನ್ನಡದಲ್ಲಿ ಮಾಧ್ಯಮಿಕ ಶಾಲಾ ಪ್ರಮಾಣಪತ್ರವಿಲ್ಲದ ಸ್ಥಳೀಯ ಅಭ್ಯರ್ಥಿಗಳು ನಿರ್ದಿಷ್ಟ ಕನ್ನಡ ಪ್ರಾವೀಣ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಇನ್ನು ಅರ್ಹ ಸ್ಥಳೀಯ ಅಭ್ಯರ್ಥಿಗಳು ಲಭ್ಯವಿಲ್ಲದ ಸಂದರ್ಭಗಳಲ್ಲಿ, ಕೈಗಾರಿಕೆಗಳು / ಕಾರ್ಖಾನೆಗಳು / ಸಂಸ್ಥೆಗಳು 3 ವರ್ಷ ಗಳಲ್ಲಿ ಸ್ಥಳೀಯ ಪ್ರತಿಭೆಗಳಿಗೆ ತರಬೇತಿ ನೀಡಲು ಮತ್ತು ತೊಡಗಿಸಿಕೊಳ್ಳಲು ಸರಕಾರಿ ಸಂಸ್ಥೆಗಳೊಂದಿಗೆ ಸಹಕರಿಸಬೇಕಾಗುತ್ತದೆ ಎಂಬುದಾಗಿಯೂ ಮಸೂದೆಯಲ್ಲಿ ಉಲ್ಲೇಖೀಸಲಾಗಿದೆ.

ವಿಧೇಯಕದಲ್ಲೇನಿದೆ?
ಈ ವಿಧೇಯಕದನ್ವಯ ಆಡಳಿತಾತ್ಮಕ ಹುದ್ದೆಗಳಾದ ಸೂಪರ್‌ವೈಸರ್‌, ವ್ಯವಸ್ಥಾಪಕ, ಟೆಕ್ನಿಕಲ್‌, ಆಪರೇಷನಲ್‌, ಆಡಳಿತ ಸೇರಿ ಉನ್ನತ ಹುದ್ದೆಗಳಲ್ಲಿ ಶೇ. 50 ಉದ್ಯೋಗವನ್ನು ಸ್ಥಳೀಯರಿಗೆ ಮೀಸಲಿಡಲಾಗುವುದು. ಇನ್ನು ನಾನ್‌-ಮ್ಯಾನೇಜ್‌ಮೆಂಟ್‌ನಲ್ಲಿ ಕ್ಲರ್ಕ್‌ಗಳು, ಕೌಶಲ, ಕೌಶಲ ರಹಿತ ಹಾಗೂ ಅರೆಕೌಶಲ, ಗುತ್ತಿಗೆ ನೌಕರ ಹಾಗೂ ಐಟಿ ಹುದ್ದೆಗಳಲ್ಲಿ ಶೇ.75ರಷ್ಟನ್ನು ಸ್ಥಳೀಯರಿಗೆ ಮೀಸಲಿಡುವುದು ಕಡ್ಡಾಯವಾಗಲಿದೆ.

ಯಾರು ಅರ್ಹರು?
-ಕರ್ನಾಟಕದಲ್ಲಿಯೇ ಹುಟ್ಟಿದವರು
-ರಾಜ್ಯದಲ್ಲಿ 15 ವರ್ಷಗಳಿಂದ ವಾಸಿಸುತ್ತಿರುವವರು
-ಕನ್ನಡ ಓದಲು, ಬರೆಯಲು, ಮಾತನಾಡಲು ಬರುವವರು
-ನೋಡಲ್‌ ಏಜೆನ್ಸಿ ನಡೆಸುವ ಕನ್ನಡ ಕುರಿತು ಪರೀಕ್ಷೆಯಲ್ಲಿ ಉತ್ತೀರ್ಣರಾದವರು.

ರಾಜ್ಯದ ಎಲ್ಲ ಖಾಸಗಿ ಕೈಗಾರಿಕೆಗಳಲ್ಲಿ “ಸಿ ಮತ್ತು ಡಿ’ ದರ್ಜೆಯ ಹುದ್ದೆಗಳಿಗೆ 100ಕ್ಕೆ 100ರಷ್ಟು ಕನ್ನಡಿಗರ ನೇಮ
ಕಾತಿ ಕಡ್ಡಾಯಗೊಳಿಸಲಾಗುತ್ತದೆ.
– ಸಿದ್ದರಾಮಯ್ಯ, ಮುಖ್ಯಮಂತ್ರಿ

Advertisement

Udayavani is now on Telegram. Click here to join our channel and stay updated with the latest news.

Next