Advertisement

Karnataka: ಗೃಹ ಲಕ್ಷ್ಮೀ ಜೂ. 28ರಂದು ತೀರ್ಮಾನ- ಲಕ್ಷ್ಮೀ ಹೆಬ್ಟಾಳ್ಕರ್‌

10:53 PM Jun 23, 2023 | Team Udayavani |

ಬೆಂಗಳೂರು: ಸರಕಾರದ ಮಹತ್ವಾಕಾಂಕ್ಷಿ “ಗೃಹ ಲಕ್ಷ್ಮೀ” ಯೋಜನೆಗೆ ಜೂ. 28ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ರೂಪ ಸಿಗಲಿದ್ದು, ಅಂದು ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿ ಮುಹೂರ್ತ ನಿಗದಿಯಾಗುವ ಸಾಧ್ಯತೆ ಇದೆ.

Advertisement

“ಗೃಹ ಲಕ್ಷ್ಮೀ” ಯೋಜನೆಗೆ ಆಗಸ್ಟ್‌ನಲ್ಲಿ ಚಾಲನೆ ದೊರೆಯಲಿದೆ. ಆದರೆ ಈ ಸಂಬಂಧದ ಅರ್ಜಿ ಸ್ವೀಕಾರ ಪ್ರಕ್ರಿಯೆ ಹೇಗೆ? ಯಾವಾಗಿನಿಂದ ಆರಂಭಿಸಬೇಕು ಮತ್ತಿತರ ವಿಷಯಗಳ ಬಗ್ಗೆ ಬುಧವಾರ (ಜೂ. 28) ರೂಪುರೇಷೆ ಸಿದ್ಧಗೊಳ್ಳಲಿದೆ. ಬಹುತೇಕ ಅದೇ ದಿನ ಅನುಷ್ಠಾನದ ಮುಹೂರ್ತ ಕೂಡ ನಿಗದಿಯಾಗುವ ಸಾಧ್ಯತೆ ಇದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್‌ ತಿಳಿಸಿದರು.

ನಗರದಲ್ಲಿ ಶುಕ್ರವಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವರಾದ ಕೃಷ್ಣ ಬೈರೇಗೌಡ, ಪ್ರಿಯಾಂಕ ಖರ್ಗೆ ಹಾಗೂ ಉನ್ನತ ಅಧಿಕಾರಿಗಳ ಜತೆ ಚರ್ಚಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಲಕ್ಷ್ಮೀ ಯೋಜನೆಗೆ ಪ್ರತ್ಯೇಕ ಆ್ಯಪ್‌ ತಯಾರಾಗಿದೆ. ಅಧಿಕಾರಿಗಳು ಮತ್ತು ಸಚಿವರ ಜತೆ ಸುದೀರ್ಘ‌ ಸಭೆ ನಡೆಸಲಾಗಿದೆ. ಯಾವತ್ತು ಅರ್ಜಿ ಸ್ವೀಕಾರ ಮಾಡಬೇಕು ಎಂದು ನಿರ್ಧರಿಸಬೇಕಿದೆ. ಈ ಕುರಿತು ಮುಖ್ಯಮಂತ್ರಿ ಜತೆ ಚರ್ಚಿಸಿ ಅಂತಿಮಗೊಳಿಸಲಾಗುವುದು ಎಂದರು.

ಈ ಮಧ್ಯೆ ಸೇವಾಸಿಂಧು ಪೋರ್ಟಲ್‌ ಅಪ್‌ಗ್ರೇಡ್‌ ಮಾಡಿದ್ದರೂ, ಸರ್ವರ್‌ ಓವರ್‌ ಲೋಡ್‌ ಆಗುತ್ತಿದೆ. ಇದರಿಂದ ಸಮಸ್ಯೆ ಆಗುತ್ತಿದೆ. ಇದಕ್ಕೆಲ್ಲ ಆ್ಯಪ್‌ನಲ್ಲಿ ಪರಿಹಾರ ಸಿಗಲಿದೆ ಎಂದ ಅವರು, ಬರುವ ಸಚಿವ ಸಂಪುಟ ಸಭೆಯಲ್ಲಿ ಅಪ್ಲಿಕೇಷನ್‌ ಅನ್ನು ಮುಖ್ಯಮಂತ್ರಿಗಳಿಗೆ ತೋರಿಸಿ, ಅಂತಿಮ ದಿನಾಂಕ ಘೋಷಣೆ ಮಾಡಲಾಗುವುದು. ಕಂದಾಯ ಸಚಿವರು ನಾಡಕಚೇರಿ, ತಹಶೀಲ್ದಾರ್‌ ಕಚೇರಿ ಬಗ್ಗೆ ಗಮನ ಹರಿಸುತ್ತಿದ್ದಾರೆ. ಗ್ರಾಮೀಣಾಭಿವೃದ್ಧಿ ಸಚಿವರ ಅಡಿ ಬಾಪೂಜಿ ಕೇಂದ್ರಗಳು ಬರುತ್ತವೆ. ಹೀಗಾಗಿ ಮೂವರು ಸಚಿವರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಸದ್ಯಕ್ಕೆ ತಡೆ: ಡಿಕೆಶಿ
ತಾಂತ್ರಿಕ ಕಾರಣಗಳ ಹಿನ್ನೆಲೆಯಲ್ಲಿ ಗೃಹಲಕ್ಷ್ಮೀ ಯೋಜನೆ ಜಾರಿಯನ್ನು ನಾನೇ ಸದ್ಯಕ್ಕೆ ತಡೆಹಿಡಿದಿದ್ದೇನೆ. ಇದಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಜತೆಗೂ ಚರ್ಚಿಸಿದ್ದೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

Advertisement

ಸದಾಶಿವನಗರದ ತಮ್ಮ ನಿವಾಸದಲ್ಲಿಂದು ಮಾತನಾಡಿದ ಅವರು, ಗೃಹಜ್ಯೋತಿ ಯೋಜನೆ ಅರ್ಜಿ ವಿಚಾರವಾಗಿ ಸರ್ವರ್‌ ಸಮಸ್ಯೆ ನೋಡುತ್ತಿದ್ದೀರಿ. ಯೋಜನೆಯಲ್ಲಿ ಮನೆಯೊಡತಿಯೇ ಸ್ವಯಂ ಅರ್ಜಿ ಸಲ್ಲಿಸುವಂತೆ ಸರಳೀಕರಣ ಮಾಡಲಾಗುತ್ತಿದೆ. ಆನ್‌ಲೈನ್‌ ಹಾಗೂ ಆಫ್ಲೈನ್‌ ವ್ಯವಸ್ಥೆ ಕಲ್ಪಿಸಲಾಗುವುದು. ಈ ವಿಚಾರವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು ಹಾಗೂ ಅಧಿಕಾರಿಗಳ ಜತೆ ಸಭೆ ನಡೆಸಲಾಗಿದೆ’ ಎಂದರು.

ಗ್ಯಾರಂಟಿ ಯೋಜನೆಗಳಿಗೆ ಆನ್‌ಲೈನ್‌ ಅರ್ಜಿ ಸಲ್ಲಿಕೆಗೆ ಕೆಲವರು 200- 300 ರೂ. ವಸೂಲಿ ಮಾಡುತ್ತಿದ್ದಾರೆ. ಈ ಬಗ್ಗೆ ನಮಗೆ ದೂರು ಬಂದಿದೆ. ಈ ಅರ್ಜಿ ತುಂಬಲು ಏಜೆನ್ಸಿಗಳಾಗಲಿ ಅಥವಾ ಯಾರೇ ಲಂಚ ಪಡೆದರೆ ಅವರ ಪರವಾನಗಿ ರದ್ದಾಗುತ್ತದೆ. ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಎಚ್ಚರಿಕೆ ನೀಡುತ್ತಿದ್ದೇನೆ. ಈ ಯೋಜನೆಗಳಿಗೆ ನೋಂದಣಿ ಮಾಡಿಕೊಳ್ಳಲು ಹೋಗುವವರು ಯಾರಿಗೂ ಲಂಚ ನೀಡುವ ಅಗತ್ಯವಿಲ್ಲ. ಯಾರಾದರೂ ಲಂಚ ಕೇಳಿದರೆ ಟೋಲ್‌ ಫ್ರೀ ಸಂಖ್ಯೆಗೆ ಕರೆ ಮಾಡಿ ದೂರು ನೀಡಬೇಕು’ ಎಂದೂ ಮನವಿ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next