ಬೆಂಗಳೂರು: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ದಾಖಲಾಗಿರುವ ನಾಲ್ಕನೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ(ನ22) ವಜಾಗೊಳಿಸಿದೆ.
ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಆರೋಪದಡಿ ನಾಲ್ಕನೇ ಪ್ರಕರಣವನ್ನು ಜೂನ್ 12 ರಂದು ಬೆಂಗಳೂರಿನ ಸಿಐಡಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿತ್ತು.
ಪ್ರಜ್ವಲ್ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ, ಐಟಿ ಕಾಯಿದೆಯ ಗೌಪ್ಯತೆಯ ಉಲ್ಲಂಘನೆಗಾಗಿ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣದ ದೂರುದಾರೆ ಮಹಿಳೆಗೆ ವಿಡಿಯೋ ಕಾಲ್ ಮೂಲಕ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ.
ಪ್ರಕರಣದಲ್ಲಿ ಆರೋಪಪಟ್ಟಿ ಸಲ್ಲಿಕೆಯಾಗಿರುವ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹಿಂಪಡೆಯಲು ಪ್ರಜ್ವಲ್ ಪರ ವಕೀಲರು ಬಯಸಿದ್ದರು, ಆದರೆ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಅರ್ಜಿಯನ್ನು ಹಿಂಪಡೆಯಲು ಅವಕಾಶ ನೀಡದೆ ಮನವಿಯನ್ನು ವಜಾಗೊಳಿಸಿದರು.
ರೇವಣ್ಣ ಪ್ರಸ್ತುತ ಇಲ್ಲಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ಅವರ ವಿರುದ್ಧದ ನಾಲ್ಕು ಪ್ರತ್ಯೇಕ ಪ್ರಕರಣಗಳ ತನಿಖೆಗೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲಾಗಿದೆ.