ಬೆಂಗಳೂರು: ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರನ್ನಾಗಿ ಶಾಂತ ಅವ್ವರೇಹಳ್ಳಿ ತಿಮ್ಮಯ್ಯ ಅವರ ನೇಮಕವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಈ ವಿಚಾರವಾಗಿ ಬಸವನಗುಡಿಯ ಪುಷ್ಪ ಎ.ಗವಡಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತ್ತು.
ಕೆಲ ಕಾಲದ ವಾದ ಆಲಿಸಿದ ನ್ಯಾಯಪೀಠ, ಅರ್ಜಿ ಸಬಂಧ ರಾಜ್ಯ ಸರ್ಕಾರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಮಂಡಳಿಯ ನೂತನ ಅಧ್ಯಕ್ಷರಾದ ಶಾಂತ ಅವ್ವರೇಹಳ್ಳಿ ತಿಮ್ಮಯ್ಯ ಅವರಿಗೆ ನೋಟಿಸ್ ಜಾರಿಗೊಳಿಸಿ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿತು.
ವಿಚಾರಣೆ ವೇಳೆ ವಾದ ಮಂಡಿಸಿದ ವಕೀಲ ಶ್ರೀರಾಮರೆಡ್ಡಿ, ಮಂಡಳಿಗೆ ಹೊಸದಾಗಿ ಅಧ್ಯಕ್ಷರಾಗಿ ನೇಮಕವಾಗಿರುವವರು ಮಾಲಿನ್ಯ ಉಂಟು ಮಾಡುವ ಹಲವು ಕಂಪನಿಗಳ ಸಲಹೆಗಾರರಾಗಿದ್ದರು ಮತ್ತು ಅವರೇ ಸ್ವತಃ ಕಲವು ಕಂಪನಿಗಳ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ನೇಮಕವಾಗುವ ಎರಡು ತಿಂಗಳ ಹಿಂದಷ್ಟೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹಾಗಾಗಿ ವೈಯಕ್ತಿಕ ಹಿತಾಸಕ್ತಿ ಹಿನ್ನೆಲೆಯಲ್ಲಿ ಅವರ ನೇಮಕ ಕಾನೂನು ಬಾಹಿರವಾಗಿದೆ ಎಂದರು.
ಅಲ್ಲದೆ, ಜಲ ಕಾಯ್ದೆ ಸೆಕ್ಷನ್ 6ರ ಪ್ರಕಾರ ಮಾಲಿನ್ಯ ಮಂಡಳಿ ಅಧ್ಯಕ್ಷರಾಗುವವರು ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಮಂಡಳಿಯೊಂದಿಗೆ ಸಂಬಂಧ ಹೊಂದಿರಬಾರದು ಎಂದು ಹೇಳಲಾಗಿದೆ. ಜೊತೆಗೆ ಸುಪ್ರೀಂಕೋರ್ಟ್ ಕೂಡ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗುವವರಿಗೂ ಮಾಲಿನ್ಯವುಂಟು ಮಾಡುವ ಕಂಪನಿಗಳಿಗೂ ಸಂಬಂಧವಿರಬಾರದೆಂದು ಸ್ಪಷ್ಟವಾಗಿ ಹೇಳಲಾಗಿದೆ. ಜೊತೆಗೆ ಸರ್ಕಾರವೇ ರೂಪಿಸಿರುವ ನಿಯಮಗಳನ್ನು ಉಲ್ಲಂ ಸಿ ಈ ನೇಮಕ ಮಾಡಲಾಗಿದೆ. ಆದ್ದರಿಂದ ನೇಮಕವನ್ನು ರದ್ದುಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.