ಬೆಂಗಳೂರು: ಮಂಗಳೂರು ವಿ.ವಿ.ಯ ಸಹಾಯಕ ಪ್ರಾಧ್ಯಾಪಕ ಡಾ| ವೇದವ ಅವರನ್ನು ಅತ್ಯಾಚಾರ ಆರೋಪದಿಂದ ಆರೋಪ ಮುಕ್ತಗೊಳಿಸಿ ಹೈಕೋರ್ಟ್ ಆದೇಶಿಸಿದೆ.
ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಮಂಗಳೂರಿನ ವಿಚಾರಣಾಧೀನ ನ್ಯಾಯಾಲಯದ ಆದೇಶ ರದ್ದುಪಡಿಸುವಂತೆ ಕೋರಿ ಡಾ| ವೇದವ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರು ಇತ್ತೀಚೆಗೆ ಈ ಆದೇಶ ಹೊರಡಿಸಿದ್ದಾರೆ.
ಪ್ರಕರಣದಲ್ಲಿ 2017ರ ಜೂ. 9ರಂದು ವೇದವ ಅವರ ಅರ್ಜಿ ವಜಾ ಮಾಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆದೇಶವನ್ನು ರದ್ದುಪಡಿಸಲಾಗಿದೆ. ಅಲ್ಲದೇ ಬಂಟ್ವಾಳ ಠಾಣೆಯಲ್ಲಿ ಐಪಿಸಿ ಸೆಕ್ಷನ್ 376 ಮತ್ತು 506ರ ಅಡಿ ದಾಖಲಾಗಿರುವ ಪ್ರಕರಣದಿಂದ ಅರ್ಜಿದಾರರನ್ನು ಆರೋಪ ಮುಕ್ತಗೊಳಿಸಲಾಗಿದೆ ಎಂದು ಹೈಕೋರ್ಟ್ ಆದೇಶದಲ್ಲಿ ಹೇಳಿದೆ.
2013ರ ಜೂನ್ 2ರಂದು ವೇದವ ಅವರು ವಿದ್ಯಾರ್ಥಿನಿಯ ಜತೆ ಬಲವಂತವಾಗಿ ದೈಹಿಕ ಸಂಬಂಧ ಬೆಳೆಸಿದ್ದು, 2014ರ ಅಕ್ಟೋಬರ್ 16ರಂದು ಎಫ್ಐಆರ್ ದಾಖಲಿಸಲಾಗಿತ್ತು. ದೂರು ದಾಖಲಿಸಲು ವಿಳಂಬ ಮಾಡಿರುವುದನ್ನು ಪ್ರಶ್ನಿಸಿರುವ ಹೈಕೋರ್ಟ್, ದೂರುದಾರೆ ಮತ್ತು ಅರ್ಜಿದಾರರು ಪರಸ್ಪರ ಸಂಬಂಧದಲ್ಲಿದ್ದರು. ಇಬ್ಬರ ನಡುವಿನ ಸಂಬಂಧ ಹದಗೆಟ್ಟಾಗ ದೂರುದಾರೆ ಪ್ರತೀಕಾರ ತೀರಿಸಿಕೊಳ್ಳುವ ದುರುದ್ದೇಶದಿಂದ ಪ್ರಕರಣ ದಾಖಲಿಸಿದ್ದಾರೆ ಎಂದು ಕಂಡು ಬರುತ್ತದೆ. ಹೀಗಾಗಿ ವೇದವ ಅವರ ವಿರುದ್ಧ ಕಾನೂನು ಪ್ರಕ್ರಿಯೆ ಮುಂದುವರಿಸುವುದು ಕಾನೂನಿನ ದುರ್ಬಳಕೆಯಾಗಲಿದೆ ಎಂದು ತನ್ನ ಆದೇಶದಲ್ಲಿ ವಿವರಿಸಿದೆ.