ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಪ್ತ, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಸಿಎಸ್ ಪುಟ್ಟರಾಜು ಸೇರಿದಂತೆ ಜೆಡಿಎಸ್ ಹಾಗೂ ಕಾಂಗ್ರೆಸ್ ಮುಖಂಡರ ಮನೆ, ಕಚೇರಿ ಸೇರಿದಂತೆ ಸುಮಾರು 27 ಕಡೆ ಆದಾಯ ತೆರಿಗೆ ಇಲಾಖೆ ಬುಧವಾರ ಬೆಳಗ್ಗೆ ಏಕಕಾಲದಲ್ಲಿ ದಾಳಿ ನಡೆಸಿದೆ. ಇದು ರಾಜಕೀಯ ಪ್ರೇರಿತ ದಾಳಿ ಎಂದು ಕುಮಾರಸ್ವಾಮಿ ಆರೋಪಿಸಿದ್ದು, ಇದಕ್ಕೆ ಐಟಿ ಇಲಾಖೆ ಕೂಡಾ ಸ್ಪಷ್ಟನೆ ನೀಡಿದೆ.
ಐಟಿ ದಾಳಿಯನ್ನು ರಾಜಕೀಯಗೊಳಿಸಬೇಡಿ: ಐಟಿ
ನಾವು ಸಂಸದರು, ಶಾಸಕರನ್ನು ಗುರಿಯಾಗಿರಿಸಕೊಂಡು ಯಾವುದೇ ದಾಳಿ ನಡೆಸಿಲ್ಲ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದೇವೆ. ಐಟಿ ದಾಳಿಯನ್ನು ರಾಜಕೀಯಗೊಳಿಸುವುದು ಸರಿಯಲ್ಲ. ಭದ್ರತೆಯ ದೃಷ್ಟಿಯಲ್ಲಿ ಸಿಆರ್ ಪಿಎಫ್ ಸಿಬ್ಬಂದಿಯನ್ನು ಬಳಸಿಕೊಂಡಿದ್ದೇವೆ ಎಂದು ಆದಾಯ ತೆರಿಗೆ ಇಲಾಖೆ ಬಿಡುಗಡೆ ಮಾಡಿರುವ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.
ಸಿಆರ್ ಪಿಎಫ್ ಸಿಬ್ಬಂದಿಗಳನ್ನು ಬಳಸಿಕೊಳ್ಳುತ್ತಿರುವುದು ಕರ್ನಾಟಕದ ಎಡಿಜಿಪಿಗೂ ಗೊತ್ತು. ಐಟಿ ದಾಳಿ ಹಿಂದೆ ಯಾವುದೇ ರಾಜಕೀಯ ದುರುದ್ದೇಶ ಇಲ್ಲ ಎಂದು ಹೇಳಿದೆ.
ಐಟಿ ದಾಳಿ ಹಿಂದೆ ನನ್ನ ಕೈವಾಡವಿಲ್ಲ: ಸುಮಲತಾ
ಆದಾಯ ತೆರಿಗೆ ಇಲಾಖೆ ದಾಳಿ ಹಿಂದೆ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಕೈವಾಡ ಇದ್ದಿರುವುದಾಗಿ ಜೆಡಿಎಸ್ ಮುಖಂಡರು ಆರೋಪಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಸುಮಲತಾ ಅವರು, ನನಗೂ ಅದಕ್ಕೂ ಸಂಬಂಧವಿಲ್ಲ. ಆದಾಯ ತೆರಿಗೆ ಇಲಾಖೆ ಕೇಂದ್ರ ಸರ್ಕಾರದ್ದು. ನನ್ನ ಹೆಸರನ್ನು ಯಾಕೆ ಎಳೆದು ತರುತ್ತಿದ್ದಾರೆ ಎಂದು ಗೊತ್ತಾಗುತ್ತಿಲ್ಲ. ಒಂದು ವೇಳೆ ನನಗೆ ಆ ಶಕ್ತಿ ಇದೆ ಎಂದು ಅವರು ತಿಳಿದುಕೊಂಡರೆ ಒಳ್ಳೆಯದು ಎಂದು ತಿರುಗೇಟು ನೀಡಿದ್ದರು.