ಬಳ್ಳಾರಿ/ಬೆಂಗಳೂರು: ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಗೆ ಪ್ರತಿಷ್ಠೆಯ ಪ್ರಶ್ನೆಯಾಗಿರುವ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆಗೆ ಮೂರು ಪಕ್ಷಗಳ ಅಭ್ಯರ್ಥಿಗಳ ಹೆಸರು ಅಂತಿಮಗೊಂಡಿದ್ದು, ಕೊನೇ ಗಳಿಗೆಯಲ್ಲಿ ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿಎಸ್ ಉಗ್ರಪ್ಪ ಅವರ ಹೆಸರನ್ನು ಘೋಷಿಸಿದೆ.
ಬಳ್ಳಾರಿಯಲ್ಲಿ ಶಾಸಕ ಬಿ.ನಾಗೇಂದ್ರ ಅವರ ಸಹೋದರ ವೆಂಕಟೇಶ್ ಪ್ರಸಾದ್ ಗೆ ಟಿಕೆಟ್ ಕೊಡಲು ರಾಜ್ಯ ಕಾಂಗ್ರೆಸ್ ನಾಯಕರು ನಿರ್ಧಾರಕ್ಕೆ ಬಂದಿದ್ದರು. ಆದರೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕೊನೆ ಕ್ಷಣದ ಬದಲಾವಣೆ ಎಂಬಂತೆ ಕಾಂಗ್ರೆಸ್ ಹಿರಿಯ ಮುಖಂಡ ವಿಎಸ್ ಉಗ್ರಪ್ಪ ಅವರ ಹೆಸರನ್ನು ಅಂತಿಮಗೊಳಿಸಿ ಘೋಷಿಸಿದೆ.
ನಾಮಪತ್ರ ಸಲ್ಲಿಕೆ:
ನವೆಂಬರ್ 3ರಂದು ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಅಭ್ಯರ್ಥಿಯಾಗಿ ಸೋಮವಾರ ನಾಮಪತ್ರ ಸಲ್ಲಿಸಿದರು. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಸಿಎಸ್ ಪುಟ್ಟರಾಜು, ಸಚಿವರಾದ ಸಾರಾ ಮಹೇಶ್, ಡಿಸಿ ತಮ್ಮಣ್ಣ, ಜಾರ್ಜ್ ಹಾಜರಿದ್ದರು.
ರಾಮನಗರ ತಹಶೀಲ್ದಾರ್ ಕಚೇರಿಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಪತ್ನಿ, ಜೆಡಿಎಸ್ ಪಕ್ಷದ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸಿದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರ ಇಂದು ಭರ್ಜರಿ ರೋಡ್ ಶೋ ನಡೆಸಿದ ಬಳಿಕ ನಾಮಪತ್ರ ಸಲ್ಲಿಸಿದರು.
ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿದ್ದರಾಮಯ್ಯ ಅವರು ತಮ್ಮ ಬೆಂಬಲಿಗರೊಡನೆ ಆಗಮಿಸಿ ನಾಮಪತ್ರ ಸಲ್ಲಿಸಿದರು.