Advertisement

ನಂದಿನಿ ಪ್ರತಿ ಲೀಟರ್‌ ಹಾಲಿಗೆ 3 ರೂ.ಹೆಚ್ಚಳ

09:36 PM Oct 30, 2022 | Team Udayavani |

ಬೆಳಗಾವಿ: ಶೀಘ್ರದಲ್ಲೇ ನಂದಿನಿ ಹಾಲಿನ ದರ ಪರಿಷ್ಕರಣೆ ಮಾಡಲಾಗುವುದು. ಪ್ರತಿ ಲೀಟರ್‌ ಹಾಲಿಗೆ 3 ರೂ. ಹೆಚ್ಚಳ ಮಾಡಲಾಗುವುದು. ಈ ದರ ಏರಿಕೆಯಿಂದ ರೈತರಿಗೆ ವರದಾನವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

Advertisement

ಭಾನುವಾರ ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ.ದಿಂದ ಚನ್ನಮ್ಮನ ಕಿತ್ತೂರಿನ ಹೂಲಿಕಟ್ಟಿ ಕ್ರಾಸ್‌ನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಹೂಲಿಕಟ್ಟಿ ಶೀಥಲೀಕರಣ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ನಂದಿನಿ ಹಾಲಿನ ದರ ಪರಿಷ್ಕರಣೆ ಹಣ ಸಂಪೂರ್ಣವಾಗಿ ರೈತರಿಗೆ ಸಂದಾಯವಾಗಲಿದೆ. ರಾಜ್ಯದ 16 ಜಿಲ್ಲಾ ಹಾಲು ಒಕ್ಕೂಟಗಳು, ಕೆಎಂಎಫ್ಗೆ ಹಾಲಿನ ದರ ಪರಿಷ್ಕರಿಸುವಂತೆ ಪ್ರಸ್ತಾವನೆ ಸಲ್ಲಿಸಿವೆ. ರೈತರ ಹೈನುಗಾರಿಕೆ ಹಿತದೃಷ್ಟಿಯಿಂದ ಹಾಲಿನ ದರ ಏರಿಕೆ ಮಾಡುವುದು ಅನಿವಾರ್ಯವಾಗಿದೆ. ಹಾಲಿನ ದರ ಪರಿಷ್ಕರಣೆ ಸಂಬಂಧ ಈಗಾಗಲೇ ಸಾಮಾನ್ಯ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

ಹೂಲಿಕಟ್ಟಿ ಶೀಥಲೀಕರಣ ಕೇಂದ್ರಕ್ಕೆ ವೀರರಾಣಿ ಕಿತ್ತೂರು ಚನ್ನಮ್ಮನ ಹೆಸರು ನಾಮಕರಣ ಮಾಡಲಾಗುವುದು ಎಂದು ಭರವಸೆ ನೀಡಿದ ಅವರು, ಹೂಲಿಕಟ್ಟಿ ಶೀಥಲೀಕರಣ ಕೇಂದ್ರದ 30 ಸಾವಿರ ಲೀಟರ್‌ ಹಾಲು ಶೇಖರಣೆ ಸಾಮರ್ಥ್ಯ ಹೊಂದಿದೆ. 5 ಎಕರೆ ಜಾಗೆಯಲ್ಲಿ 10 ಕೋಟಿ ವೆಚ್ಚದಲ್ಲಿ ಈ ಕೇಂದ್ರವನ್ನು ನಿರ್ಮಿಸಲಾಗುವುದು. ಇದಕ್ಕೆ ಕೆಎಂಎಫ್ ಮತ್ತು ಜಿಲ್ಲಾ ಹಾಲು ಒಕ್ಕೂಟದಿಂದ ತಲಾ 5 ಕೋಟಿ ವೆಚ್ಚ ಭರಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ಕೇಂದ್ರದಲ್ಲಿ ಹಾಲು ಶೇಖರಣೆ ಸಾಮರ್ಥ್ಯವನ್ನು 60 ಸಾವಿರ ಲೀಟರ್‌ಗೆ ವಿಸ್ತರಿಸಲಾಗುವುದು. ಹಸು ಮತ್ತು ಎಮ್ಮೆ ಹಾಲನ್ನು ಪ್ರತ್ಯೇಕವಾಗಿ ಸ್ವೀಕರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಉತ್ತರ ಕರ್ನಾಟಕ ಭಾಗದ ರೈತರು ಹೈನುಗಾರಿಕೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಇದರಿಂದ ಆರ್ಥಿಕ ಅಭಿವೃದ್ಧಿ ಸಾಧ್ಯವಾಗುತ್ತದೆ. ರೈತರ ಹಿತಾಸಕ್ತಿಗೆ ಬದ್ಧರಾಗಿ ನಾವು ಕೆಲಸ ಮಾಡುತ್ತಿದ್ದೇವೆ. ರೈತರ ಅಭಿವೃದ್ಧಿಯೇ ನಮ್ಮ ಗುರಿ. 400 ಕೋಟಿ ರೂ.ಅಂದಾಜು ವೆಚ್ಚದಲ್ಲಿ ಬೆಳಗಾವಿಯಲ್ಲಿ ನಂದಿನಿ ಮಿಲ್ಕ್ ಪ್ಲಾಂಟ್‌ ನಿರ್ಮಿಸುವ ಯೋಜನೆಯಿದೆ. ಇದರಿಂದಾಗಿ ಐನೂರು ನಿರುದ್ಯೋಗಿ ಯುವಕರಿಗೆ ಉದ್ಯೋಗ ಸೃಷ್ಟಿಯಾಗಲಿದೆ ಎಂದರು.

Advertisement

ಕಾರ್ಯಕ್ರಮ ಉದ್ಘಾಟಿಸಿದ ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ, ಈ ಭಾಗದಲ್ಲಿ ಹಾಲು ಶೀಥಲೀಕರಣ ಕೇಂದ್ರ ಆರಂಭಿಸುವಂತೆ ಕಳೆದ 25 ವರ್ಷಗಳಿಂದ ಬೇಡಿಕೆ ಇತ್ತು. ಈ ಬೇಡಿಕೆ ಈಡೇರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರನ್ನು ಅಭಿನಂದಿಸಿದರು.

ಕಿತ್ತೂರು ಕಲ್ಮಠದ ರಾಜಗುರು ಸಂಸ್ಥಾನ ಮಡಿವಾಳ ರಾಜಯೋಗಿಂದ್ರ ಸ್ವಾಮೀಜಿ, ನಿಚ್ಚಣಕಿ ಮಡಿವಾಳೇಶ್ವರ ಮಠದ ಪಂಚಾಕ್ಷರಿ ಸ್ವಾಮೀಜಿ, ನಯಾನಗರ ಪುಣ್ಯಾಶ್ರಮದ ಸುಖದೇವಾನಂದ ಸ್ವಾಮೀಜಿ, ಹೂಲಿಕಟ್ಟಿ ಹೊಸಕೇರಿ ಮಠದ ಲಿಂಗಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಒಕ್ಕೂಟ ನಿ.ದ ಅಧ್ಯಕ್ಷ ವಿವೇಕರಾವ್‌ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ. ಸತೀಶ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next