ಕಾಪು: ಕಾಪು ತಾಲೂಕು ರಚನೆಯಾಗಿ 6 ವರ್ಷ ಕಳೆದರೂ ತಾಲೂಕು ಆಸ್ಪತ್ರೆ ರಚನೆ ಮಂಜೂರಾಗದಿರುವುದು, ತಾಲೂಕು ಆರೋಗ್ಯಾಧಿಕಾರಿ ಹುದ್ದೆ ಸೃಜನವಾಗದಿರುವುದು, ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ ಕನಿಷ್ಠ ವೇತನ, ಸೇವಾ ಭದ್ರತೆಯನ್ನು ನೀಡುವುದು, ಖಾಯಂಗೊಳಿಸಲು ಕ್ರಮ ವಹಿಸುವ ಬಗ್ಗೆ ಸರಕಾರದ ನಿಲುವಿನ ಕುರಿತಂತೆ ಸದನದಲ್ಲಿ ಚುಕ್ಕೆ ಗುರುತಿಲ್ಲದ ಪ್ರಶ್ನೆ ಕೇಳುವ ಮೂಲಕ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸರಕಾರದ ಗಮನ ಸೆಳೆದಿದ್ದಾರೆ.
ಆರೋಗ್ಯ ಇಲಾಖೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಹೊಸ ತಾಲೂಕುಗಳಲ್ಲಿ 100 ಹಾಸಿಗೆಗಳ ತಾಲೂಕು ಆಸ್ಪತ್ರೆ ಮತ್ತು ತಾಲೂಕು ಆರೋಗ್ಯಾಧಿಕಾರಿ ಕಚೇರಿ ಸ್ಥಾಪನೆ ಕುರಿತಾದ ಪ್ರಸ್ತಾವನೆ ಸರಕಾರದ ಮುಂದಿದೆ ಎಂದು ಹೇಳಿದ್ದಾರೆ.
ಅತಿಥಿ ಶಿಕ್ಷಕರ ಕುರಿತಾಗಿ ಕೇಳಿದ ಪ್ರಶ್ನೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಉತ್ತರಿಸಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಭೋದಕ ಹುದ್ದೆಗಳಿಗೆ ತಾತ್ಕಾಲಿಕವಾಗಿ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಅಥವಾ ನೇರ ನೇಮಕಾತಿಯಿಂದ / ವರ್ಗಾವಣೆಯಿಂದ ಬೋಧಕ ಹುದ್ದೆಗಳನ್ನು ಭರ್ತಿ ಮಾಡುವವರೆಗೆ ಯಾವುದು ಮೊದಲೋ ಅಲ್ಲಿಯವರೆಗೆ ಗೌರವ ಸಂಭಾವನೆ ಪಾವತಿಸುವ ಆಧಾರದಲ್ಲಿ ಅತಿಥಿ ಶಿಕ್ಷಕಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈ ಹುದ್ದೆಗಳನ್ನು ಭರ್ತಿ ಮಾಡಿದ ಕೂಡಲೇ ಅತಿಥಿ ಶಿಕ್ಷಕರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಲಾಗುವುದು. ಆದ್ದರಿಂದ ಶಿಕ್ಷಕರಿಗೆ ಸೇವಾ ಭದ್ರತೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ.
ಸರಕಾರಿ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ 7,500 ರೂ.ಯಿಂದ 10,000 ರೂ.ವರೆಗೆ ಹಾಗೂ ಸರಕಾರಿ ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ 8,000 ರೂ.ಯಿಂದ 10,500 ರೂ. ಗಳ ಗೌರವ ಸಂಭಾವನೆ ನೀಡಲಾಗುವುದು. ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಅತಿಥಿ ಶಿಕ್ಷಕರಾಗಿ ಸೇವೆ ಸಲ್ಲಿಸಿದವರಿಗೆ ಶೇ. 5ರಷ್ಟು ಕೃಪಾಂಕ ಮೀಸಲಾತಿ ನೀಡಿ ನೇಮಕಾತಿ ಮಾಡಲು ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಅವಕಾಶವಿರುವುದಿಲ್ಲ ಎಂದು ತಿಳಿಸಿದ್ದಾರೆ.