ಬೆಂಗಳೂರು: 29 ನಗರಸಭೆ, 53 ಪುರಸಭೆ, 23 ಪಟ್ಟಣ ಪಂಚಾಯತ್ ಸೇರಿದಂತೆ ಸ್ಥಳೀಯ ಸಂಸ್ಥೆಗೆ ಆಗಸ್ಟ್ 29ರಂದು ಚುನಾವಣೆ ನಡೆಯಲಿದ್ದು, ಸೆಪ್ಟೆಂಬರ್ 1ರಂದು ಮತಎಣಿಕೆ ನಡೆಯಲಿದೆ. ಅಲ್ಲದೇ ಮೊದಲ ಬಾರಿಗೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಇವಿಎಂ ಉಪಯೋಗಿಸಲು ನಿರ್ಧರಿಸಲಾಗಿದೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.
ಗುರುವಾರ ಈ ಬಗ್ಗೆ ಮಾಹಿತಿ ನೀಡಿರುವ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಶ್ರೀನಿವಾಸಾಚಾರಿ,ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಆಗಸ್ಟ್ 10ರಂದು ಅಧಿಸೂಚನೆ ಹೊರಡಿಸಲಾಗುವುದು ಎಂದರು.
105 ಸ್ಥಳೀಯ ಸಂಸ್ಥೆಗಳ ಅವಧಿ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಚುನಾವಣೆ ನಡೆಸಲಾಗುತ್ತಿದೆ. ಶಿವಮೊಗ್ಗ, ತುಮಕೂರು ಮೈಸೂರು ಮಹಾನಗರ ಪಾಲಿಕೆ ಹೊರತುಪಡಿಸಿ ಉಳಿದ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯುತ್ತಿದೆ. ಈ ಮೂರು ಮಹಾನಗರ ಪಾಲಿಕೆಗೆ ಚುನಾವಣೆಗೆ ತಡೆಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಬಗ್ಗೆ ತೀರ್ಪು ಹೊರಬಿದ್ದ ಬಳಿಕ ಚುನಾವಣಾ ದಿನಾಂಕ ಪ್ರಕಟಿಸಲಾಗುವುದು ಎಂದು ವಿವರಿಸಿದ್ದಾರೆ.
ಆಗಸ್ಟ್ 10ರಂದು ಅಧಿಸೂಚನೆ, ಆಗಸ್ಟ್ 17 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ.ಆ.29ಕ್ಕೆ ಚುನಾವಣೆ, ಸೆಪ್ಟೆಂಬರ್ 1ರಂದು ಮತಎಣಿಕೆ ನಡೆಯಲಿದೆ.
ಮೈತ್ರಿ ಹೇಗೆ?
ಸ್ಥಳೀಯ ಸಂಸ್ಥೆ ಚುನಾವಣೆಯ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಕಾಂಗ್ರೆಸ್ ಮತ್ತು ಜೆಡಿಎಸ್ ನಲ್ಲಿ ಮೈತ್ರಿ ಬಗ್ಗೆ ಭಿನ್ನ ಸ್ವರ ಕೇಳಿಬಂದಿದೆ. ಜೆಡಿಎಸ್ ಜೊತೆ ಮೈತ್ರಿಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ ಎನ್ನಲಾಗಿದೆ.
ಏತನ್ಮಧ್ಯೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳದಿದ್ದರೆ, ಲೋಕಸಭಾ ಚುನಾವಣೆಗೆ ತಪ್ಪು ಸಂದೇಶ ರವಾನಿಸಿದಂತಾಗುತ್ತದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲು ಮಾಜಿ ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆನ್ನಲಾಗಿದೆ.