ದಾವೋಸ್ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಸೋಮವಾರ ಸ್ವಿಜರ್ಲ್ಯಾಂಡ್ ನ ದಾವೋಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ವಿವಿಧ ಕಂಪನಿ ಗಳೊಂದಿಗೆ ಹೂಡಿಕೆ ಒಪ್ಪಂದಕ್ಕೆ ಸಹಿ ಮಾಡಲಾಗಿದೆ.
ಲುಲು ಗ್ರೂಪ್ ಇಂಟರ್ ನ್ಯಾಷನಲ್ ನ ನಿರ್ದೇಶಕ ಎ.ವಿ.ಅನಂತ ರಾಮನ್ ಅವರೊಂದಿಗೆ ಕರ್ನಾಟಕದಲ್ಲಿ ಹೂಡಿಕೆ ಮಾಡುವ ಕುರಿತು ಒಪ್ಪಂದಕ್ಕೆ ಸಹಿ ಮಾಡಲಾಗಿದೆ.
ರಾಜ್ಯದ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಲುಲು ಗ್ರೂಪ್ ರಾಜ್ಯದಲ್ಲಿ ಸುಮಾರು ಎರಡು ಸಾವಿರ ಕೋಟಿ ರೂ. ಹೂಡಿಕೆ ಮಾಡಲು ಮುಂದಾಗಿದ್ದು, 4 ಶಾಪಿಂಗ್ ಮಾಲ್ ಮತ್ತು ಹೈಪರ್ ಮಾರ್ಕೆಟ್ ಹಾಗೂ ರಫ್ತು ಆಧಾರಿತ ಆಹಾರ ಮಳಿಗೆಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಈ ಮೂಲಕ 10 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.
ರಾಜ್ಯದಲ್ಲಿ ಹಲವಾರು ಪ್ರಮುಖ ಎಲೆಕ್ಟ್ರಾನಿಕ್ ವಾಹನಗಳೊಂದಿಗೆ ಎಲೆಕ್ಟ್ರಾನಿಕ್ ವಾಹನ ಮತ್ತು ಬೆಂಬಲಿತ ಮೂಲಸೌಕರ್ಯಕ್ಕಾಗಿ ಬಲವಾದ ಪರಿಸರ ವ್ಯವಸ್ಥೆಯನ್ನು ಹೊಂದಿದೆ. ಹಿಟಾಚಿ ಎನರ್ಜಿ 200 ಕೋಟಿ ರೂ. ವೆಚ್ಚದಲ್ಲಿ ಇವಿ ಚಾರ್ಜಿಂಗ್ ಮೂಲಸೌಕರ್ಯವನ್ನು ಸ್ಥಾಪಿಸಲು ಮುಂದಾಗಿದೆ ಎಂದು ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ಕರ್ನಾಟಕವು ದೃಢವಾದ ಆಹಾರ ಸಂಸ್ಕರಣಾ ವಲಯಕ್ಕೆ ನೆಲೆಯಾಗಿದೆ ಮತ್ತು ಜುಬಿಲೆಂಟ್ ಗ್ರೂಪ್ ಆಹಾರ ಸಂಸ್ಕರಣಾ ಕೇಂದ್ರಕ್ಕಾಗಿ ರಾಜ್ಯದಲ್ಲಿ 700 ಕೋಟಿ ರೂ.ಹೂಡಿಕೆ ಮಾಡಲಿದೆ. ಇದರಿಂದ ಉದ್ಯೋಗ ಸೃಷ್ಟಿಗೂ ಕಾರಣವಾಗಲಿದೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ : ದಾವೋಸ್ ನಲ್ಲಿ ಸಿಎಂ: ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಭಾಗಿ
ಮುಖ್ಯಮಂತ್ರಿ ಬೊಮ್ಮಾಯಿ ಅವರು ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಹೆಲ್ತ್ಕೇರ್ ಕಂಪನಿ ಸೀಮೆನ್ಸ್ ಹೆಲ್ತಿನಿಯರ್ಸ್ ಸಿಇಒ ಬೆರ್ನ್ಡ್ ಮಾಂಟ್ಯಾಗ್ ಅವರೊಂದಿಗೆ ಮಾತುಕತೆ ನಡೆಸಿದರು.