ಮಂಗಳೂರು: ಚುನಾವಣೆ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸುವ ಉದ್ದೇಶದಿಂದ ಮಂಗಳೂರು ನಗರದಲ್ಲಿ ಮಂಗಳವಾರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಅವರ ನೇತೃತ್ವದಲ್ಲಿ ಪಥ ಸಂಚಲನ ನಡೆಯಿತು.
ನೆಹರೂ ಮೈದಾನದಿಂದ ಆರಂಭಗೊಂಡ ಪಥಸಂಚಲನ ಹ್ಯಾಮಿಲ್ಟನ್ ಸರ್ಕಲ್, ರಾವ್ ಆ್ಯಂಡ್ ರಾವ್ ಸರ್ಕಲ್, ಕ್ಲಾಕ್‌ಟವರ್, ಕೆ.ಎಸ್.ರಾವ್ ರಸ್ತೆ ಮೂಲಕ ಮಂಜೇಶ್ವರ ಗೋವಿಂದ ಪೈ ವೃತ್ತದವರೆಗೆ ಸಾಗಿತು.
ಸಿಆರ್‌ಪಿಎಫ್, ಸಿಐಎಸ್‌ಎಫ್, ಸಿಎಆರ್, ಸ್ಥಳೀಯ ಪೊಲೀಸರು ಸೇರಿದಂತೆ 280 ಮಂದಿ ಅಧಿಕಾರಿ, ಸಿಬಂದಿ ಪಾಲ್ಗೊಂಡಿದ್ದರು.
ಎಡಿಜಿಪಿ ಅಲೋಕ್ ಕುಮಾರ್ ಅವರೊಂದಿಗೆ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅಂಶುಕುಮಾರ್ ಮತ್ತಿತರ ಅಧಿಕಾರಿಗಳು ಕೂಡ ಪಥ ಸಂಚಲನದಲ್ಲಿ ಪಾಲ್ಗೊಂಡಿದ್ದರು.
ಅಧಿಕಾರಿಗಳೊಂದಿಗೆ ಸಭೆ
ಪಥಸಂಚಲನಕ್ಕೂ ಮೊದಲು ಎಡಿಜಿಪಿ ಅಲೋಕ್ ಕುಮಾರ್ ಅವರು ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚುನಾವಣಾ ಸಂದರ್ಭದಲ್ಲಿ ಮಾಡಬೇಕಾದ ಹೆಚ್ಚುವರಿ ಭದ್ರತೆ, ಮುಂಜಾಗ್ರತಾ ಕ್ರಮಗಳ ಕುರಿತಂತೆ ಸೂಚನೆಗಳನ್ನು ನೀಡಿದರು.