ಬೆಂಗಳೂರು: ಜಾನುವಾರುಗಳ ಸಾಗಾಣೆಗೆ ಸಂಬಂಧಿಸಿದ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020’ರ ಸೆಕ್ಷನ್ 5ರ ಜಾರಿಗೆ ಅನುಮತಿ ನೀಡಿ ಹೈಕೋರ್ಟ್ ಆದೇಶ ನೀಡಿದೆ.
ಆದರೆ, ಈ ಅನುಮತಿಯು ಅರ್ಜಿ ಕುರಿತು ನ್ಯಾಯಾಲಯ ಹೊರಡಿಸುವ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದೂ ಹೈಕೋರ್ಟ್ ಹೇಳಿದೆ. ಇದರಿಂದ ಕಾಯ್ದೆಯ ಜಾರಿಗೆ ಎದುರಾಗಿದ್ದ ತಾಂತ್ರಿಕ ಅಡಚಣೆ ದೂರವಾದಂತಾಗಿದೆ.
ಕಾಯ್ದೆಯ ಸಿಂಧುತ್ವ ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್ ಆರಿಫ್ ಜಮೀಲ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ಈ ಆದೇಶ ನೀಡಿತು. ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ವಾದ ಮಂಡಿಸಿ, ನ್ಯಾಯಾಲಯದ ಆದೇಶದಂತೆ, ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧ ಸಂರಕ್ಷಣಾ ಕಾಯ್ದೆ ಸೆಕ್ಷನ್ 5ರ ಜಾರಿಗೆ ನಿಯಮಗಳನ್ನು ರೂಪಿಸಲಾಗಿದೆ.
ಆದ್ದರಿಂದ ಕಾಯ್ದೆಯ ಸೆಕ್ಷನ್ 5ರ ಜಾರಿಗೆ ಅನುಮತಿ ನೀಡಬೇಕು. ಅದಕ್ಕಾಗಿ ನಿಯಮ ರೂಪಿಸಿ ಅವುಗಳನ್ನು ಜಾರಿಗೆ ತರುವವರೆಗೆ ಯಾವುದೇ ವ್ಯಕ್ತಿಯ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು 2021ರ ಜನವರಿ 20ರಂದು ನೀಡಿದ್ದ ಆದೇಶವನ್ನು ಮಾರ್ಪಡಿಸಬೇಕು ಎಂದು ಕೋರಿದರು.
ಅದಕ್ಕೆ ಅರ್ಜಿದಾರರ ಪರ ವಕೀಲರು ಆಕ್ಷೇಪಿಸಿ, ಕಾಯ್ದೆಯ ಸಿಂಧುತ್ವ ಪ್ರಶ್ನಿಸಿ ಈ ಅರ್ಜಿ ಸಲ್ಲಿಸಲಾಗಿದೆ. ಕಾಯ್ದೆ ಮತ್ತು ನಿಯಮಗಳು ಜಾರಿ ಮಾಡುವುದರಿಂದ ನಿರ್ದಿಷ್ಟ ಸಮುದಾಯಕ್ಕೆ ತೊಂದರೆ ಉಂಟಾಗುವ ಸಾಧ್ಯತೆಯಿದೆ. ಆದ್ದರಿಂದ ಸೆಕ್ಷನ್ 5ರ ಜಾರಿಗೆ ಅನುಮತಿಸಬಾರದು ಎಂದು ಮನವಿ ಮಾಡಿದರು.
ರಾಜ್ಯ ಸರ್ಕಾರದ ಮನವಿ ಮತ್ತು ಅರ್ಜಿದಾರ ಆಕ್ಷೇಪಣೆ ದಾಖಲಿಸಿಕೊಂಡ ನ್ಯಾಯಪೀಠ, ಕರ್ನಾಟಕ ಜಾರುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯ್ದೆ-2020 ಅನ್ನು ಸರ್ಕಾರವು 2021ರ ಫೆ.15ರಂದು ಜಾರಿ ಮಾಡಿದೆ. 2021ರ ಮೇ 24ರಂದು ಅಧಿಸೂಚನೆ ಹೊರಡಿಸಲಾಗಿದೆ. 2021ರ ಮೇ 25ರಂದು ಗೆಜೆಟ್‌ನಲ್ಲಿ ಪ್ರಕಟಿಸಲಾಗಿದೆ. ಇದೀಗ ಕಾಯ್ದೆ ಸೆಕ್ಷನ್ 5 ಮತ್ತದರ ಅಡಿ ನಿಯಮ ರೂಪಿಸಲಾಗಿದ್ದು, ಜಾರಿಗೊಳಿಸಲು ನ್ಯಾಯಾಲಯದ ಅನುಮತಿ ಕೋರಿದೆ. ಆದ್ದರಿಂದ 2021ರ ಜ.20ರಂದು ನ್ಯಾಯಾಲಯ ಹೊರಡಿಸಿರುವ ಆದೇಶವನ್ನು ಮಾರ್ಪಾಡು ಮಾಡಲಾಗುತ್ತಿದ್ದು, ಸೆಕ್ಷನ್ 5ರ ಜಾರಿಗೆ ಅನುಮತಿ ನೀಡಲಾಗುತ್ತಿದೆ. ಆದರೆ, ಇದು ಅರ್ಜಿ ಕುರಿತು ನ್ಯಾಯಾಲಯ ಹೊರಡಿಸುವ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ’ ಎಂದು ನ್ಯಾಯಪೀಠ ಆದೇಶದಲ್ಲಿ ಹೇಳಿದೆ.