Advertisement

ರಾಜ್ಯ ಬಜೆಟ್ 2020: ಪ್ರತಿಭಾ ಪುರಸ್ಕಾರ, ಹಿಂದುಳಿದ ವರ್ಗಗಳಿಗೆ ಶಿಕ್ಷಣದಲ್ಲಿ ಆದ್ಯತೆ

09:59 AM Mar 06, 2020 | Hari Prasad |

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ಮಂಡಿಸಿದ ರಾಜ್ಯ ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹಲವಾರು ಹೊಸ ಘೋಷಣೆಗಳನ್ನು ಮಾಡಿದ್ದಾರೆ.

Advertisement

ತನ್ನದೇ ಸರಕಾರವಿದ್ದಾಗ ಜಾರಿಗೆ ತಂದಿದ್ದ ಶಾಲಾ ಮಕ್ಕಳಿಗೆ ಬೈಸಿಕಲ್ ವಿತರಿಸುವ ಯೋಜನೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮುಂದುವರಿಸಲು ನಿರ್ಧರಿಸಲಾಗಿದೆ. ಇನ್ನು ಇಂದಿನ ಆಯ-ವ್ಯಯದಲ್ಲಿ ಮುಖ್ಯಮಂತ್ರಿಯವರು ಶಿಕ್ಷಣ ಕ್ಷೇತ್ರಕ್ಕೆ ನೀಡಿರುವ ಮಹತ್ವದ ಯೋಜನೆ ಮತ್ತು ಕೊಡುಗೆಗಳು ಈ ರೀತಿಯಾಗಿವೆ:

– ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ನಡೆಸಲಾಗುತ್ತಿರುವ ವಸತಿ ಶಾಲೆಗಳಲ್ಲಿ ಕನಿಷ್ಠ ಶೇ. 25ರಷ್ಟು ಸೀಟುಗಳನ್ನು ಆಯಾ ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಲು ಅವಕಾಶ ಕಲ್ಪಿಸುವುದು.

– ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ನಡೆಸಲಾಗುತ್ತಿರುವ ವಸತಿ ಶಾಲೆಗಳನ್ನು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುವಂತೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮೇಲ್ವಿಚಾರಣಾ ಸಮಿತಿಯನ್ನು ರಚಿಸುವುದು.

– ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ/ಯುವತಿಯರಿಗೆ ವಿವಿಧ ಪ್ಯಾರಾ ಮೆಡಿಕಲ್ ಸರ್ಟಿಫಿಕೇಟ್ ಕೋರ್ಸುಗಳೊಂದಿಗೆ ಕೌಶಲಾಭಿವೃದ್ಧಿ ತರಬೇತಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕೌಶಲಾಭಿವೃದ್ಧಿ ಇಲಾಖೆಯ ಸಮನ್ವಯದೊಂದಿಗೆ ನೀಡುವುದು.

Advertisement

– ಪ್ರತೀ ಜಿಲ್ಲೆಯಲ್ಲಿ SSLC ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರೃಮ ಸ್ಥಾನ ಪಡೆದ ಪ.ಜಾತಿ ಮತ್ತು ಪ.ಪಂಗಡದ ವಿದ್ಯಾರ್ಥಿಗಳಿಗೆ 1 ಲಕ್ಷ ರೂಪಾಯಿ ನಗದು ಪ್ರಶಸ್ತಿಯನ್ನು ಸ್ವಾತಂತ್ರ್ಯ ಹೋರಾಟದಲ್ಲಿ ಹುತಾತ್ಮರಾದ ಜಡಗ ಮತ್ತು ಬಾಲ ಅವರ ಹೆಸರಿನಲ್ಲಿ ನೀಡುವ ಉದ್ದೇಶಕ್ಕಾಗಿ 2020-21ನೇ ಸಾಲಿನಲ್ಲಿ 60 ಲಕ್ಷ ರೂಪಾಯಿ ನಿಗದಿ.

– ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಐದು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸುವುದು.

– ಪೂರ್ವ ಪ್ರಾಥಮಿಕ ತರಗತಿಗಳಿಂದ ಪದವಿ ಪೂರ್ವ ಕಾಲೇಜುವರೆಗೆ ಒಂದೇ ಸೂರಿನಡಿ ಶಿಕ್ಷಣ ನೀಡಲು ಪ್ರಾರಂಭಿಸಲಾಗಿರುವ 276 ಕರ್ನಾಟಕ ಪಬ್ಲಿಕ್ ಶಾಲೆಗಳ ಮೂಲಭೂತ ಸೌಕರ್ಯಗಳಿಗಾಗಿ 100 ಕೋಟಿ ರೂ. ಅನುದಾನ.

– ಅತಿವೃಷ್ಟಿಯಿಂದ ತೀವ್ರ ಹಾನಿಗೊಳಗಾಗಿರುವ ಶಾಲೆಗಳ ಪುನರ್ ನಿರ್ಮಾಣಕ್ಕಾಗಿ 26 ಜಿಲ್ಲೆಗಳ 3386 ಸರಕಾರಿ ಶಾಲೆಗಳ 6469 ಶಾಲಾ ಕೊಠಡಿಗಳ ಕಾಮಗಾರಿಯನ್ನು ನಬಾರ್ಡ್ ಸಹಯೋಗದೊಂದಿಗೆ 758 ಕೋಟಿ ರೂಪಾಯಿ ವೆಚ್ಚದಲ್ಲಿ ಮರುನಿರ್ಮಾಣ.

– ಶಾಸಕರಿಂದ ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಮೂರು ಸರಕಾರಿ ಶಾಲೆಗಳನ್ನು ದತ್ತು ತೆಗೆದುಕೊಂಡು ಅಭಿವೃದ್ಧಿಪಡಿಸಲು ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ಕ್ರಮ.

– ಪ್ರತೀ ತಿಂಗಳ ಎರಡು ಶನಿವಾರಗಳನ್ನು ‘ಬ್ಯಾಗ್ ರಹಿತ’ ದಿನವನ್ನಾಗಿ ಪರಿಗಣಿಸಿ ‘ಸಂಭ್ರಮ ಶನಿವಾರ’ ಎಂದು ಆಚರಿಸಲು ಕ್ರಮ.

– ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಚಟುವಟಿಕೆಗಳನ್ನು ಪ್ರೋತ್ಸಾಹಿಸಲು ದಾವಣಗೆರೆ, ಉಡುಪಿ ಮತ್ತು ದೊಡ್ಡಬಳ್ಳಾಪುರದಲ್ಲಿರುವ ಸ್ಕೌಟ್ಸ್ ಮತ್ತು ಗೈಡ್ಸ್ ಕೇಂದ್ರಗಳಿಗೆ ನಾಲ್ಕು ಕೋಟಿ ರೂಪಾಯಿಗಳ ಅನುದಾನ.

– ಶಿಕ್ಷಕರು ತಮ್ಮ ಹಕ್ಕಿನ ಸೌಲಭ್ಯಗಳಿಗಾಗಿ ಕಛೇರಿ ಅಲೆದಾಟವನ್ನು ತಪ್ಪಿಸಲು ‘ಶಿಕ್ಷಕ ಮಿತ್ರ’ ಮೊಬೈಲ್ ಆ್ಯಪ್ ಅಭಿವೃದ್ಧಿ.

– 2020-21ನೇ ಸಾಲಿನಲ್ಲಿ 400 ಸರಕಾರಿ ಉರ್ದು ಶಾಲೆಗಳಲ್ಲಿ ಉರ್ದು ಮಾಧ್ಯಮದೊಂದಿಗೆ ಆಂಗ್ಲ ಮಾಧ್ಯಮ ಪ್ರಾರಂಭ. ಈ ಉದ್ದೇಶಕ್ಕಾಗಿ ಈ ಸಾಲಿನಲ್ಲಿ ಒಂದು ಕೋಟಿ ರೂಪಾಯಿಗಳ ಅನುದಾನ.

– ಬೆಂಗಳೂರಿನಲ್ಲಿರುವ ಐತಿಹಾಸಿಕ ವಿಶ್ವೇಶ್ವರಯ್ಯ ತಾಂತ್ರಿಕ ಕಾಲೇಜನ್ನು ಐ.ಐ.ಟಿ, ಮಾದರಿಯಲ್ಲಿ ಸ್ವಾಯತ್ತಗೊಳಿಸಿ ಅಭಿವೃದ್ಧಿಪಡಿಸಲು 10 ಕೋಟಿ ರೂಪಾಯಿಗಳ ಅನುದಾನ.
– ಏಷ್ಯಾ ಖಂಡದ ದೇಶಗಳ ಶಿಕ್ಷಣ ಸಚಿವರ ಶೈಕ್ಷಣಿಕ ಸಮಾವೇಶ ಮತ್ತು ಬೃಹತ್ ವಸ್ತು ಪ್ರದರ್ಶನವನ್ನು ಖಾಸಗಿ ಸಹಭಾಗಿತ್ವದಲ್ಲಿ ಬೆಂಗಳೂರಿನಲ್ಲಿ ಏರ್ಪಡಿಸುವುದು.

Advertisement

Udayavani is now on Telegram. Click here to join our channel and stay updated with the latest news.

Next