ಗದಗ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ 3ನೇ ಘಟಿಕೋತ್ಸವ ಮಾ. 10ರಂದು ಹಮ್ಮಿಕೊಳ್ಳಲಾಗಿದೆ ಎಂದು ಕುಲಪತಿ ವಿಷ್ಣುಕಾಂತ ಚಟಪಲ್ಲಿ ಹೇಳಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಗಾವಿಯ ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿರುವ ಕೌಶಲ್ಯ ಭವನದ ಸಭಾಂಗಣದಲ್ಲಿ ಘಟಿಕೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದರು.
ರಾಜ್ಯಪಾಲ ಹಾಗೂ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಕುಲಾಧಿಪತಿ ಥಾವರ್ ಚಂದ ಗೆಹ್ಲೋಟ್ ಕಾರ್ಯಕ್ರಮವನ್ನು ಉದ್ಘಾಟಿಸುವರು. ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಡಾ. ಸುಬ್ಬಣ್ಣ ಅಯ್ಯಪ್ಪನ್ ಅವರು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ ಎಂದರು.
ಸಮಾಜ ಸುಧಾರಣೆ ಮತ್ತು ದೀನ ದಲಿತರ ಸಬಲೀಕರಣ ಕ್ಷೇತ್ರದಲ್ಲಿನ ಮಹತ್ವದ ಕೊಡುಗೆಗಾಗಿ ಶಿವಾಜಿ ಕಾಗಣಿಕರ್ ಅವರಿಗೆ ಡಾಕ್ಟರ್ ಆಫ್ ಲೆಟರ್ಸ್ ಹಾಗೂ ಸಾವಯವ ಕೃಷಿ, ಸಾಹಿತ್ಯ ಮತ್ತು ಗ್ರಾಮೀಣಾಭಿವೃದ್ಧಿಗೆ ನೀಡಿದ ಮಹತ್ವದ ಕೊಡುಗೆಗಾಗಿ ಎ.ಪಿ. ಚಂದ್ರಶೇಖರ ಅವರಿಗೆ ಡಾಕ್ಟರ್ ಆಫ್ ಲಿಟರೇಚರ್ ಪದವಿ ನೀಡಿ ಗೌರವಿಸಲಾಗುತ್ತಿದೆ ಎಂದು ಹೇಳಿದರು.
10 ವಿವಿಧ ಸ್ನಾತಕೋತ್ತರ ಕಾರ್ಯಗಳ 182 ವಿದ್ಯಾರ್ಥಿಗಳು ಮತ್ತು ಡಿಪ್ಲೊಮಾ ಕಾರ್ಯಗಳ 10 ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪದವಿ ಪ್ರದಾನ ಮಾಡುವುದರ ಜೊತೆಗೆ ವಿವಿಧ ಸ್ನಾತಕೋತ್ತರ ವಿಭಾಗಗಳಲ್ಲಿ ಅತ್ಯಧಿಕ ಅಂಕ ಗಳಿಸಿದ 10 ಸಾಧಕರಿಗೆ ಚಿನ್ನದ ಪದಕ ನೀಡಿ ಗೌರವಿಸಲಾಗುತ್ತಿದೆ ಎಂದು ಹೇಳಿದರು.