ಬೆಂಗಳೂರು:ಬಿಜೆಪಿ ಶಾಸಕ ಪ್ರೀತಂ ಗೌಡ ಮನೆ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಗುರುವಾರವೂ ಬಿಜೆಪಿ ಶಾಸಕರು ಪ್ರತಿಭಟನೆ ನಡೆಸಿದರು, ಈ ಸಂದರ್ಭದಲ್ಲಿ ಗದ್ದಲದ ನಡುವೆಯೂ ಕಲಾಪದಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯ ಹಾಗೂ ಧನವಿನಿಯೋಗ ವಿಧೇಯಕ ಅಂಗೀಕರಿಸಿದೆ.
ಏತನ್ಮಧ್ಯೆ ವಿಧಾನಪರಿಷತ್ ನಲ್ಲೂ ಧನ ವಿನಿಯೋಗ ವಿಧೇಯಕ ಅಂಗೀಕಾರಗೊಂಡಿದೆ. ವಿಧಾನಸಭೆಯಲ್ಲಿ ಸಿಎಂ ಕುಮಾರಸ್ವಾಮಿಯವರು ಧನವಿನಿಯೋಗ ವಿಧೇಯಕ ಮಂಡಿಸಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ಶಾಸಕರು ಬೇಕೆ, ಬೇಕು ನ್ಯಾಯ ಬೇಕು ಎಂದು ಘೋಷಣೆ ಕೂಗಿದರು. ಸ್ಪೀಕರ್ ರಮೇಶ್ ಕುಮಾರ್ ಅವರು ಸುಮ್ಮನಿರುವಂತೆ ಸೂಚಿಸಿದರು.
ಗದ್ದಲದ ನಡುವೆಯೇ ಸ್ಪೀಕರ್ ಅವರು ವಿಧೇಯಕವನ್ನು ಮತಕ್ಕೆ ಹಾಕಿದ್ದು, ಧ್ವನಿಮತದ ಮೂಲಕ ವಿಧೇಯಕವನ್ನು ಅಂಗೀಕರಿಸಿದ ಬಳಿಕ ಕಲಾಪವನ್ನು ಮಧ್ಯಾಹ್ನ 4ಗಂಟೆಗೆ ಮುಂದೂಡಿದ್ದರು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕಳೆದ ಶುಕ್ರವಾರ 2.34 ಲಕ್ಷ ಕೋಟಿ ರೂಪಾಯಿ ಮೊತ್ತದ ಪ್ರಸಕ್ತ ಸಾಲಿನ ಬಜೆಟ್ ಅನ್ನು ಮಂಡಿಸಿದ್ದರು. ಬಜೆಟ್ ಅನುಷ್ಠಾನಕ್ಕೆ ಧನವಿನಿಯೋಗ ವಿಧೇಯಕಕ್ಕೆ ಅನುಮೋದನೆ ಪಡೆಯುವುದು ಮುಖ್ಯವಾಗಿತ್ತು.
ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ:
7 ದಿನಗಳ ಕಾಲ ನಡೆದ ಬಜೆಟ್ ಅಧಿವೇಶನದಲ್ಲಿ ಒಟ್ಟು ಕೇವಲ 15 ಗಂಟೆ 10 ನಿಮಿಷಗಳ ಕಾಲ ಕಾರ್ಯಕಲಾಪ ನಡೆದಿದೆ ಎಂದು ಸ್ಪೀಕರ್ ರಮೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಮಧ್ಯಾಹ್ನ 4ಗಂಟೆಗೆ ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆಯೇ ಬಿಜೆಪಿ ಶಾಸಕರು ಪ್ರತಿಭಟನೆ ಮುಂದುವರಿಸಿದರು. ಈ ವೇಳೆ ಸ್ಪೀಕರ್ ರಮೇಶ್ ಕುಮಾರ್ ಅವರು ಕಲಾಪ ನಡೆಸಲು ಸಹಕರಿಸಿದ ಆಡಳಿತರೂಢ ಕಾಂಗ್ರೆಸ್, ಜೆಡಿಎಸ್ ಶಾಸಕರು, ಪ್ರತಿಪಕ್ಷದ ಬಿಜೆಪಿ ಶಾಸಕರು ಹಾಗೂ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು.