ನವದೆಹಲಿ: ಕೋವಿಡ್ 19 ಸೋಂಕು ಹಿನ್ನೆಲೆಯಲ್ಲಿ ಕಾಶಿ ವಿಶ್ವನಾಥ ದೇವಾಲಯಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ್ದು, ಇದೀಗ ಮಂಗಳವಾರದಿಂದ(ಜೂನ್ 08) ವಾರಣಾಸಿಯಲ್ಲಿರುವ ಕಾಶಿ ವಿಶ್ವನಾಥ ದೇವಾಲಯ ಭಕ್ತರ ಪ್ರವೇಶಕ್ಕೆ ಅವಕಾಶ ಕಲ್ಲಿಸಿರುವುದಾಗಿ ತಿಳಿಸಿದೆ. ಭಕ್ತರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯವಲ್ಲ, ಆದರೆ ಸಾಮಾಜಿಕ ಅಂತರ ಮತ್ತು ಕೋವಿಡ್ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದೆ.
ಇದನ್ನೂ ಓದಿ:ಬೀದಿ ಬದಿ ವ್ಯಾಪಾರಿಗಳಿಗೆ 2 ಸಾವಿರ ರೂ. ಸಹಾಯಧನ ವರ್ಗಾವಣೆಗೆ ಸಿಎಂ ಚಾಲನೆ
ಏತನ್ಮಧ್ಯೆ ಗರ್ಭಗುಡಿ ಸಮೀಪ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ದೇಶದಲ್ಲಿನ ಪ್ರಮುಖ ಶಿವ ದೇವಾಲಯಗಳಲ್ಲಿ ಒಂದಾಗಿರುವ ಕಾಶಿ ವಿಶ್ವನಾಥ ದೇವಾಲಯಕ್ಕೆ ಭಕ್ತರ ಭೇಟಿಯನ್ನು ಕೋವಿಡ್ ಹಿನ್ನೆಲೆಯಲ್ಲಿ ಏಪ್ರಿಲ್ ನಿಂದ ನಿರ್ಬಂಧ ವಿಧಿಸಲಾಗಿತ್ತು.
ವಾರಣಾಸಿಯಲ್ಲಿ ಕೋವಿಡ್ 19 ಸೋಂಕು ಪ್ರಕರಣ ಇಳಿಕೆಯಾದ ಹಿನ್ನೆಲೆಯಲ್ಲಿ ಸೋಮವಾರದಿಂದ ಲಾಕ್ ಡೌನ್ ನಿರ್ಬಂಧ ಸಡಿಲಗೊಳಿಸಲಾಗಿದೆ. ಕಳೆದ 24ಗಂಟೆಯಲ್ಲಿ ಉತ್ತರಪ್ರದೇಶದಲ್ಲಿ 797 ಕೋವಿಡ್ 19 ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ರಾಜ್ಯದಲ್ಲಿನ ಒಟ್ಟು ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 14,000ಕ್ಕೆ ಇಳಿದಿರುವುದಾಗಿ ವರದಿ ತಿಳಿಸಿದೆ.
ಕಾಶಿ ವಿಶ್ವನಾಥ ಧಾಮ್ ಕಾರಿಡಾರ್ ಯೋಜನೆ ವಿಳಂಬವಾಗಲಿದೆ ಎಂದು ಮೇ ಕೊನೆಯ ವಾರದಲ್ಲಿ ಅಧಿಕಾರಿಗಳು ತಿಳಿಸಿದ್ದರು. ಈ ಯೋಜನೆ ಆಗಸ್ಟ್ ನಲ್ಲಿ ಪೂರ್ಣಗೊಳ್ಳಬೇಕಿದ್ದು, ಕೋವಿಡ್ ಹಿನ್ನೆಲೆಯಲ್ಲಿ ವಿಳಂಬವಾಗಿದ್ದರಿಂದ ನವೆಂಬರ್ ನಲ್ಲಿ ಪೂರ್ಣಗೊಳ್ಳಲಿದೆ ಎಂದು ವರದಿ ವಿವರಿಸಿದೆ.