ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮ ಹಾಗೂ ಸೋಮವಾರ ಕಾವೇರಿ ನೀರನ್ನು ಮತ್ತೆ ಬಿಡಬೇಕು ಎಂಬ ಸಮತಿ ನಿರ್ಧಾರ ವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆಯಿಂದ ನಗರದಲ್ಲಿ ಕಳೆದ 48 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು ಸೋಮವಾರ ಒಂಟಿ ಕಾಲಿನಲ್ಲಿ ನಿಂತು ಪ್ರತಿಭಟನೆ ನಡೆಸಲಾಯಿತು.
ನಗರದ ಶ್ರೀ ಚಾಮರಾಜೇಶ್ವರ ಉದ್ಯಾನವನದಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿ 948ರಲ್ಲಿ ಒಂಟಿ ಕಾಲಿನಲ್ಲಿ ನಿಂತು ಕೇಂದ್ರ ಮತ್ತು ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ, ಕಾವೇರಿ ನೀರು… ನಿರ್ವಹಣಾ ಮಂಡಳಿ ವಿರುದ್ದ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪ್ರತಿಭಟನೆ ನೇತೃತ್ವ ವಹಿಸಿದ ಚಾ.ರಂ. ಶ್ರೀನಿವಾಸಗೌಡ ಮಾತನಾಡಿ, ತಮಿಳು ನಾಡಿಗೆ ಕಾವೇರಿ ನೀರು ಹರಿಸುತ್ತಿರವುದನ್ನು ಖಂಡಿಸಿ ನಮ್ಮ ಸಂಘಟನೆ ವತಿಯಿಂದ ನಗರದಲ್ಲಿ ಕಳೆದ 48 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು ಇಂದು ಕೂಡ ಸರ್ಕಾರಗಳು, ಕಾವೇರಿ ನೀರು ನಿರ್ವಹಣಾ ಮಂಡಳಿ ಕರ್ನಾಟಕಕ್ಕೆ ಒಂಟಿ ಕಾಲಿನ ಸ್ಥಿತಿ ಮಾಡಿ ಕಾವೇರಿ ನೀರು ವಿಚಾರದಲ್ಲಿ ಕರ್ನಾಟಕ್ಕೆ ಮೋಸ ಮಾಡುತ್ತಿದೆ ಎಂದು ಆರೋಪಿಸಿ ನಾವೆಲ್ಲರೂ ಇಂದು ಒಂಟಿ ಕಾಲಿನಲ್ಲಿ ನಿಂತು ಪ್ರತಿಭಟನೆ ನಡೆಸಲಾಗಿದೆ ಎಂದರು.
ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಕರ್ನಾಟಕ ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು. ಕರ್ನಾಟಕ ಸರ್ಕಾರ ಕೂಡಲೇ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ಶಾ.ಮುರಳಿ, ಪಣ್ಯದಹುಂಡಿ ರಾಜು, ಚಾ.ವೆಂ.ರಾಜ್ ಗೋಪಾಲ್, ಮಹೇಶ್ ಗೌಡ, ತಾಂಡವ ಮೂರ್ತಿ, ಲಿಂಗರಾಜು, ಗು.ಪುರುಷೋತ್ತಮ, ತಾಂಡವಮೂರ್ತಿ, ನಂಜುಂಡಸ್ವಾಮಿ, ರಾಜಪ್ಪ ಭಾಗವಹಿಸಿದ್ದರು.