ಕಾರವಾರ: ಕೋವಿಡ್-19 ಎರಡನೇ ಅಲೆ ಮರುಕಳಿಸುವ ಲಕ್ಷಣ ಕಂಡುಬರುತ್ತಿದ್ದು, ಇದರ ತಡೆಗಾಗಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆಗೆ ಜಿಪಂ ಅಧ್ಯಕ್ಷೆ ಜಯಶ್ರೀ ಮೊಗೇರ ಸೂಚಿಸಿದರು.
ನಗರದ ಜಿಪಂ ಸಭಾಭವನದಲ್ಲಿ ಸೋಮವಾರ ನಡೆದ ಜಿಪಂನ ಮಾಸಿಕ ಕೆಡಿಪಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣದಲ್ಲಿದೆ ಎಂಬ ವಿಶ್ವಾಸದಲ್ಲಿ ಪ್ರತಿಯೊಬ್ಬ ನಾಗರಿಕರಿದ್ದಾರೆ. ಆದರೆ ಮಹರಾಷ್ಟ್ರ, ಕೇರಳ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಕೋವಿಡ್-19 ಎರಡನೇ ಅಲೆಯ ಅಬ್ಬರ ಜೋರಾಗಿದೆ. ಹೀಗಾಗಿ ಆರೋಗ್ಯ ತಪಾಸಣೆ, ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಕುರಿತು ಹೆಚ್ಚಿನ ಪ್ರಮಾಣದಲ್ಲಿ ಅರಿವು ಮೂಡಿಸಬೇಕಿದೆ. ಜೊತೆಗೆ ಬೇರೆ ಬೇರೆ ರಾಜ್ಯದಿಂದ ಜಿಲ್ಲೆಗೆ ಆಗಮಿಸುವವರ ಬಗ್ಗೆ ಆರೋಗ್ಯ ಇಲಾಖೆ ನಿಗಾವಹಿಸಬೇಕು. ಜೊತೆಗೆ ಸ್ಥಳೀಯ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಲಸಿಕೆ ವಿತರಣೆಗೆ ಮುಂದಾಗಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಶರದ್ ನಾಯಕ್ ಮಾತನಾಡಿ, ಕೋವಿಡ್-19 ನಿಯಂತ್ರಣಕ್ಕೆ ಕೇಂದ್ರ ಸರಕಾರ ಸೂಕ್ತ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಬೇರೆ ರಾಜ್ಯದಿಂದ ಬಂದವರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಅಲ್ಲದೇ ಜಿಲ್ಲೆಯಲ್ಲಿ ಮಾ. 1ರಿಂದ ಮೂರನೇ ಹಂತದಲ್ಲಿ 60 ವರ್ಷದ ಮೇಲ್ಪಟ್ಟ ಎಲ್ಲ ನಾಗರಿಕರು, 45ರಿಂದ 59 ವರ್ಷದ ವಯೋಮಾನದ ನಾಗರಿಕರಿಗೆ ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಈ ಹಂತದಲ್ಲಿ ಜಿಲ್ಲೆಯ 1.30 ಲಕ್ಷ ಜನರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದ್ದು, ಈವರೆಗೆ 13 ಸಾವಿರ ಜನರಿಗೆ ಲಸಿಕೆ ವಿತರಿಸಲಾಗಿದೆ ಎಂದರು. ಮಾ. 8ರಿಂದ ಜಿಲ್ಲೆಯ ಎಲ್ಲ ನಗರ ಹಾಗೂ ಗ್ರಾಮೀಣ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಕೋವಿಶಿಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆ ಪಡೆದುಕೊಂಡಿದ್ದರಿಂದ ಯಾವುದೇ ಅಡ್ಡ ಪರಿಣಾಮಗಳು ಕಂಡುಬಂದಿಲ್ಲ. ಸಾರ್ವಜನಿಕರು ಹೆಚ್ಚಿನ ಕಾಳಜಿ ವಹಿಸಿ ನಿರ್ಭೀತಿಯಿಂದ ಸಮೀಪದ ಆರೋಗ್ಯ ಕೇಂದ್ರ ಹಾಗೂ ಆಸ್ಪತ್ರೆಗಳಿಗೆ ತೆರಳಿ ಲಸಿಕೆ ಪಡೆದುಕೊಳ್ಳಬಹುದು ಎಂದರು.
ನಾಗರಿಕರು ತಾವಾಗಿಯೇ ಕೋವಿನ್ ತಂತ್ರಾಂಶದಲ್ಲಿ ಹೆಸರು ನೋಂದಣಿ ಮಾಡಿಕೊಂಡು ತಮಗೆ ಅನುಕೂಲವಿರುವ ಲಸಿಕಾ ಕೇಂದ್ರದಲ್ಲಿ ಲಸಿಕೆ ಪಡೆಯಬಹುದು. ಅಲ್ಲದೇ ನೇರವಾಗಿ ಲಸಿಕಾ ಕೇಂದ್ರಕ್ಕೆ ತೆರಳಿ ಹೆಸರು ನೋಂದಾಯಿಸಿಕೊಂಡು ಲಸಿಕೆ ಪಡೆಯಲು ಅವಕಾಶವಿದೆ. ಸ್ವಯಂ ಪ್ರೇರಿತರಾಗಿ ಲಸಿಕೆ ಪಡೆಯುವ ಕುರಿತು ಪ್ರತಿಯೊಬ್ಬರೂ ಜಾಗೃತರಾಗುವ ಅಗತ್ಯವಿದೆ. ಸಾರ್ವಜನಕರು ಲಸಿಕಾ ಕೇಂದ್ರಕ್ಕೆ ಭೇಟಿ ನೀಡುವಾಗ ಆಧಾರ್ ಕಾರ್ಡ್, ವೋಟರ್ ಐಡಿ ಅಥವಾ ಯಾವುದಾದರೊಂದು ಫೋಟೋ ಇರುವ ಐ.ಡಿ ಕಾಡ್ ìನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗಬೇಕು ಎಂದು ಹೇಳಿದರು.
ಇದೇ ವೇಳೆ ಶಿಕ್ಷಣ, ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಸಣ್ಣ ನೀರಾವರಿ, ರಾಷ್ಟ್ರೀಯ ಹೆದ್ದಾರಿ, ಹೆಸ್ಕಾಂ, ಆಯುಷ್ ಇಲಾಖೆ, ಸಮಾಜ ಕಲ್ಯಾಣ, ರೇಷ್ಮೆ, ಸಹಕಾರ, ಖಾಗ್ರಾ, ಪಶುಪಾಲನೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಮಾಸಿಕ ಪ್ರಗತಿಯನ್ನು ಪರಿಶೀಲನೆ ಮಾಡಲಾಯಿತು. ಸಭೆಗೂ ಮುನ್ನ 2019-20ನೇ ಸಾಲಿನ “ಉತ್ತರ ಕನ್ನಡ ಜಿಲ್ಲೆ ಅಂಕಿ ಅಂಶಗಳ ನೋಟ’ ಎಂಬ ಕಿರು ಹೊತ್ತಿಗೆ ಬಿಡುಗಡೆ ಮಾಡಲಾಯಿತು.
ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಸವರಾಜ ದೊಡ್ಮಮನಿ, ಚೈತ್ರಾ ಕೋಠಾರಕರ, ಉಷಾ ನಾಯ್ಕ ಹಾಗೂ ಜಿಪಂನ ಸಿಇಒ ಪ್ರಿಯಾಂಗಾ ಎಂ. ಸೇರಿದಂತೆ ಜಿಲ್ಲೆ ಎಲ್ಲ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು.