Advertisement

“ಕೆಡಿಪಿ ಸಭೆಗೆ ಸಮರ್ಪಕ ಮಾಹಿತಿ ಒದಗಿಸಿ’

12:16 PM Jan 24, 2017 | Team Udayavani |

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಜ.25) ಪ್ರಾದೇಶಿಕ ಆಯುಕ್ತರ ಕಚೇರಿ ಸಭಾಂ ಗಣದಲ್ಲಿ ನಡೆಯುವ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಗೆ ಜಿಲ್ಲಾಮಟ್ಟದ ಎಲ್ಲಾ ಇಲಾಖೆ ಅಧಿಕಾರಿಗಳು ಸಮರ್ಪಕವಾದ ಮಾಹಿತಿ ಒದಗಿಸಬೇಕು ಎಂದು ಲೋಕೋಪಯೋಗಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್‌.ಸಿ. ಮಹದೇವಪ್ಪ ಹೇಳಿದರು.

Advertisement

ಮುಖ್ಯಮಂತ್ರಿಗಳ ಅಧ್ಯಕ್ಷತೆಯ ಕೆಡಿಪಿ ಸಭೆಯ ಹಿನ್ನೆಲೆಯಲ್ಲಿ ಸೋಮವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಿದ ಅವರು, 3 ತಿಂಗಳಿಗೊಮ್ಮೆ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ ನಡೆಯಬೇಕು. ಮುಖ್ಯಮಂತ್ರಿಗಳು ಮೈಸೂರು ಜಿಲ್ಲೆಯವರೇ ಆಗಿರುವುದರಿಂದ ಅವರೇ ಪ್ರಗತಿ ಪರಿಶೀಲನೆ ನಡೆಸುವರು ಎಂದು ಹೇಳಿದರು.

ಉದ್ಯೋಗ, ಕುಡಿಯುವ ನೀರು, ಮೇವು, ಬರ ನಿರ್ವಹಣೆ, ಗ್ರಾಮೀಣ ಅಭಿವೃದ್ಧಿ ಮುಂತಾದ ವಿಷಯ ಗಳಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಮುಖ್ಯ ಮಂತ್ರಿಗಳು ಪ್ರಮುಖವಾಗಿ ಗಮನ ಹರಿಸುವರು. ಕೃಷಿ ಹಾಗೂ ಕೃಷಿಗೆ ಪೂರಕವಾದ ಇತರ ಇಲಾಖೆಗಳ ಸಮನ್ವಯ ಸಭೆ ನಡೆಸಿ, ಅಂಕಿ ಅಂಶಗಳನ್ನು ಸಮರ್ಪಕ ವಾಗಿ ಸಭೆಗೆ ನೀಡಬೇಕು ಎಂದರು.

ಮುಖ್ಯಮಂತ್ರಿಯವರು 2015ರ ಜನವರಿ 7ರಂದು ನಡೆಸಿದ ಸಭೆಯ ಅನು ಪಾಲನ ವರದಿಗಳು ಹಾಗೂ ವಿವಿಧ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳ ಸಭೆಯಲ್ಲಿ ನೀಡಿದ ಸೂಚನೆಗಳ ಮೇಲೆ ಕೈಗೊಂಡ ಕ್ರಮಗಳ ಬಗ್ಗೆ ವರದಿ ಸಿದ್ಧಪಡಿಸಿಕೊಳ್ಳುವಂತೆ ಅವರು ಸೂಚಿಸಿದರು.

ಕೃಷಿ, ಪಶುಸಂಗೋಪನೆ, ತೋಟಗಾರಿಕೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಗ್ರ ಗಿರಿಜನ ಉಪಯೋಜನೆ ಇಲಾಖೆ, ವಿವಿಧ ನಿಗಮಗಳು, ಆರೋಗ್ಯ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಮುಂತಾದ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

Advertisement

ಸಭೆಯಲ್ಲಿ ಜಿಪಂ ಅಧ್ಯಕ್ಷೆ ನಯೀಮಾ ಸುಲ್ತಾನ, ಜಿಲ್ಲಾಧಿಕಾರಿ ಡಿ. ರಂದೀಪ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣನವರ, ಜಿಪಂ ಸಿಇಒ ಪಿ.ಶಿವಶಂಕರ್‌, ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್‌, ಮುಡಾ ಆಯುಕ್ತ ಡಾ.ಮಹೇಶ್‌, ಮಹಾ ನಗರ ಪಾಲಿಕೆ ಆಯುಕ್ತ ಜಿ.ಜಗದೀಶ್‌ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಮೈಸೂರಿಗೆ ಇಂದು ಮುಖ್ಯಮಂತ್ರಿ
ಮೈಸೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಜನವರಿ 24 ಹಾಗೂ 25ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. 24ರಂದು ಮಧ್ಯಾಹ್ನ 12.05ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಮಂಡ್ಯ ಜಿಲ್ಲೆಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಸ್ತೆ ಮೂಲಕ ಮಂಡ್ಯ ಜಿಲ್ಲೆಗೆ ತೆರಳಲಿದ್ದಾರೆ. ಸಂಜೆ 4.15ಕ್ಕೆ ಸುತ್ತೂರು ಕೃಷಿ ವಿಜಾnನ ಕೇಂದ್ರದ ಸಮೀಪ ನಿರ್ಮಿಸಲಾಗಿರುವ ಲೋಕೋಪಯೋಗಿ ಅತಿಥಿಗೃಹದ ಉದ್ಘಾಟನೆ ನೆರವೇರಿಸಲಿದ್ದಾರೆ.

ನಂತರ ಸುತ್ತೂರು ಶ್ರೀಕ್ಷೇತ್ರದಲ್ಲಿ ಚಾಮರಾಜನಗರ ವಿಭಾಗದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ನೂತನ ಬಸ್‌ ನಿಲ್ದಾಣದ ಶಂಕುಸ್ಥಾಪನೆ ಮತ್ತು ಸುತ್ತೂರು ಶ್ರೀಕ್ಷೇತ್ರದಲ್ಲಿ ಆಯೋಜಿಸಿರುವ ಆದಿ ಜಗದ್ಗುರು ಶ್ರೀಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ ನಂತರ ಸಂಜೆ 6.45ಕ್ಕೆ ರಸ್ತೆ ಮೂಲಕ ಮೈಸೂರಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ.

ಜನವರಿ 25ರಂದು ಬೆಳಗ್ಗೆ 10ಕ್ಕೆ ಮೈಸೂರು ಪ್ರಾದೇಶಿಕ ಆಯುಕ್ತರ ಕಚೇರಿ ಆವರಣದಲ್ಲಿ ಆಯೋಜಿಸಿರುವ ಮೈಸೂರು ಜಿಲ್ಲೆ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ 2016-17ನೇ ಸಾಲಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ ನಂತರ ಸಂಜೆ 6ಕ್ಕೆ ರಸ್ತೆ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next