ಬೆಳಗಾವಿ: ಕೋವಿಡ್ ಸೋಂಕು ಹರಡುವಿಕೆ ಭೀತಿ ಹಾಗೂ ಚುನಾವಣೆ ಪ್ರಕ್ರಿಯೆಗಳ ಮಧ್ಯೆಯೂ ವಿಧಾನಮಂಡಲದ ಚಳಿಗಾಲ ಅಧಿವೇಶನದ ಕಾರ್ಯ ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಕೋವಿಡ್ ಮಾರ್ಗಸೂಚಿ ಪಾಲಿಸುವ ಮೂಲಕ ಸಮರ್ಪಕ ವಸತಿ, ಸಾರಿಗೆ ಹಾಗೂ ಊಟೋಪಹಾರ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಸೂಚನೆ ನೀಡಿದರು.
ಜಿಪಂ ಸಭಾಂಗಣದಲ್ಲಿ ಅಧಿವೇಶನ ಹಿನ್ನೆಲೆಯಲ್ಲಿ ಬುಧವಾರ ಗಣ್ಯರು, ಉನ್ನತ ಅಧಿಕಾರಿಗಳು ಮತ್ತು ಹೋಟೆಲ್‌ಗಳ ಸಂಪರ್ಕಾಧಿಕಾರಿಗಳ (ಲೈಸೆನ್ಸ್ ಅಧಿಕಾರಿಗಳ) ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೋವಿಡ್ ಕಾರಣದಿಂದ ಈ ಬಾರಿಯ ಅಧಿವೇಶನ ಸಂದರ್ಭದಲ್ಲಿ ಹೆಚ್ಚಿನ ಜವಾಬ್ದಾರಿ ಇದೆ. ಕೆಲ ರಾಜ್ಯಗಳಲ್ಲಿ ಒಮಿಕ್ರಾನ್ ಪ್ರಕರಣಗಳು ವರದಿಯಾಗುತ್ತಿರುವುದರಿಂದ ಸರ್ಕಾರದ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸುವ ಅಗತ್ಯವಿದೆ ಎಂದರು.
ಸಚಿವರು, ಇಲಾಖೆಯ ಉನ್ನತ ಅಧಿಕಾರಿಗಳು ಬಂದಾಗ ಶಿಷ್ಟಾಚಾರ ಪಾಲಿಸುವುದು ಆಯಾ ಇಲಾಖೆಯ ಸಂಬಂಧಿಸಿದ ಅಧಿಕಾರಿಗಳ ಹೊಣೆಗಾರಿಕೆ. ಆದ್ದರಿಂದ ಯಾವುದೇ ರೀತಿಯ ಲೋಪ ಅಥವಾ ನಿರ್ಲಕ್ಷ ಉಂಟಾಗದಂತೆ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದರು. ವಸತಿ ಹಾಗೂ ಊಟೋಪಹಾರಕ್ಕೆ ಸಂಬಂಧಪಟ್ಟಂತೆ ಅಧಿವೇಶನದ ಮೊದಲ ಎರಡು ದಿನಗಳ ಕಾಲ ಸ್ವಲ್ಪ ಮಟ್ಟಿಗೆ ಅನಾನುಕೂಲ ಎನಿಸಬಹುದು. ಆದರೆ ಅದಕ್ಕೆ ಆಸ್ಪದ ನೀಡದಂತೆ ಸಮಿತಿಯ ಉಸ್ತುವಾರಿ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದರು.
ಪ್ರವಾಸ ಕಾರ್ಯಕ್ರಮ ಪಟ್ಟಿ ಆಧರಿಸಿ ವಸತಿ ಹಾಗೂ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಆದ್ದರಿಂದ ಕಡ್ಡಾಯವಾಗಿ ಪ್ರವಾಸ ಕಾರ್ಯಕ್ರಮ ಪಟ್ಟಿ ಲಭಿಸಿದ ತಕ್ಷಣವೇ ಸೂಕ್ತ ವ್ಯವಸ್ಥೆ ಕಲ್ಪಿಸುವುದು ಆಯಾ ಸಂಪರ್ಕಾಧಿಕಾರಿಗಳ ಹೊಣೆಗಾರಿಕೆ. ಆದ್ದರಿಂದ ಸಮನ್ವಯ ಸಾಧಿಸಿಕೊಂಡು ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚನೆ ನೀಡಿದರು.
ಕೋವಿಡ್ ಸೋಂಕು, ಪರಿಷತ್ ಚುನಾವಣೆ, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಕ್ರಿಯೆ ನಡೆಯುತ್ತಿರುವುದರಿಂದ ಇದೆಲ್ಲದರ ಮಧ್ಯೆಯೂ ಅಧಿವೇಶನ ಕೆಲಸ ಕಾರ್ಯಗಳಿಗೆ ಧಕ್ಕೆಯಾಗದಂತೆ ಚುನಾವಣಾ ಅಧಿಕಾರಿಗಳನ್ನು ನಿಯೋಜಿಸಬೇಕಿದೆ. ಇದನ್ನು ಗಮನದಲ್ಲಿಟ್ಟುಕೊಂಡು ನಾವು ಸೂಕ್ತ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕಿದೆ ಎಂದು ಜಿಲ್ಲಾಧಿಕಾರಿ ವೆಂಕಟೇಶಕುಮಾರ್ ಹೇಳಿದರು. ಹೋಟೆಲ್‌ಗಳಿಗೆ ನಿಯೋಜಿಸಿದ ಸಂಪರ್ಕಾಧಿಕಾರಿಗಳು ಪ್ರತಿ ದಿನ ಎರಡು ಬಾರಿ ಕಡ್ಡಾಯವಾಗಿ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬೇಕು ಎಂದು ಅಧಿವೇಶನದ ವಿಶೇಷ ಅಧಿಕಾರಿ ಡಾ| ಸುರೇಶ್ ಇಟ್ನಾಳ ಸೂಚನೆ ನೀಡಿದರು.
ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ., ಅಪರ ಜಿಲ್ಲಾಧಿಕಾರಿ ಡಾ| ಶಂಕರ ವಣಿಕ್ಯಾಳ, ಮಹಾನಗರ ಪಾಲಿಕೆ ಆಯುಕ್ತ ಡಾ| ರುದ್ರೇಶ್ ಘಾಳಿ, ಉಪ ವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ ಸೇರಿದಂತೆ ಇತರರು ಇದ್ದರು.
ಆಯಾ ಸಂದರ್ಭಕ್ಕೆ ಅನುಗುಣವಾಗಿ ಸರ್ಕಾರ ಪ್ರಕಟಿಸುವ ಮಾರ್ಗಸೂಚಿ ಕಡ್ಡಾಯವಾಗಿ ಪಾಲನೆಯಾಗಬೇಕು. ಈ ನಿಟ್ಟಿನಲ್ಲಿ ಸಂಬಂಧಿಸಿದ ಎಲ್ಲ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಅಧಿವೇಶನದಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಎರಡೂ ಡೋಸ್ ಲಸಿಕೆ ಹಾಕಿಸಿಕೊಂಡಿರಬೇಕು. ಇದಲ್ಲದೇ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಕೂಡ ಹೊಂದಿರಬೇಕು.
ವೆಂಕಟೇಶಕುಮಾರ, ಜಿಲ್ಲಾಧಿಕಾರಿ