Advertisement

ಆಕರ್ಷಕ ಪ್ರವಾಸಿ ತಾಣವಾಗುತ್ತಿರುವ ಕೆಂಪೇಗೌಡರ ಪ್ರತಿಮೆ

04:33 PM Nov 14, 2022 | Team Udayavani |

ಬೆಂಗಳೂರು: ಉದ್ಘಾಟನೆಯಾದ ಬೆನ್ನಲ್ಲೇ ಆಕರ್ಷಕ ಪ್ರವಾಸಿ ತಾಣವಾಗಿ ಬೆಳೆಯುತ್ತಿರುವ ಕೆಂಪೇಗೌಡರ ಕಂಚಿನ ಪ್ರತಿಮೆಯನ್ನು ವೀಕ್ಷಿಸಲು ಹೆಚ್ಚಿನ ಜನರು ಬರುತ್ತಿದ್ದು ಅವರಿಗೆ ಸೂಕ್ತ‌ ಸೌಲಭ್ಯಗಳನ್ನು ಕಲ್ಪಿಸುವ ಸಂಬಂಧ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣಗಳ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷ,  ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಸೋಮವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

Advertisement

ಈ ಸಂದರ್ಭದಲ್ಲಿ ಅಂತಾರರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಅಧಿಕಾರಿಗಳು ಮತ್ತು ಕೆಂಪೇಗೌಡ ಪಾರಂಪರಿಕ ತಾಣಗಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ವಿನಯ್ ದೀಪ್ ಇದ್ದರು.

ಸದ್ಯಕ್ಕೆ 23 ಎಕರೆ ಪ್ರದೇಶದಲ್ಲಿ ನಾಡಪ್ರಭು ಕೆಂಪೇಗೌಡ ಥೀಮ್ ಪಾರ್ಕ್ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ಐಓಸಿ ಪೆಟ್ರೋಲ್ ಬಂಕ್ ಕಡೆಯಿಂದ ಪ್ರವಾಸಿಗರು ಪ್ರತಿಮೆಯನ್ನು ತಲುಪಿ ವೀಕ್ಷಿಸಲು ಅನುಕೂಲ ಮಾಡಿಕೊಡಲು ಸಚಿವರು ಸೂಚಿಸಿದರು.

ಇದರ ಜೊತೆಗೆ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ಗರಿಷ್ಠ 80 ವಾಹನಗಳಿಗೆ ಪಾರ್ಕಿಂಗ್ ಅವಕಾಶ ಕಲ್ಪಿಸಲಾಗುವುದು. ಈ ಅನುಕೂಲವು ಒಂದು ವಾರದಲ್ಲಿ ಸಾರ್ವಜನಿಕರಿಗೆ ಲಭ್ಯವಾಗಲಿದೆ. ಪ್ರತಿಮೆ ವೀಕ್ಷಣೆಗೆ ಬರುವ ಪ್ರವಾಸಿಗರ ವಾಹನಗಳು ಗರಿಷ್ಠ ಅರ್ಧ ಗಂಟೆ ನಿಲ್ಲಿಸಲು ಅವಕಾಶ ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಕಳೆದ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ 108 ಅಡಿ ಎತ್ತರದ ಈ ಕಂಚಿನ ಪ್ರತಿಮೆ ಉದ್ಘಾಟಿಸಿದ ನಂತರ ಮಧ್ಯರಾತ್ರಿ ಒಂದು ಗಂಟೆಯಾದರೂ ಸಹಸ್ರಾರು ಆಸಕ್ತರು ತಂಡೋಪತಂಡವಾಗಿ ಆಗಮಿಸುತ್ತಲೇ ಇದ್ದಾರೆ. ಬಂದವರಿಗೆ ನಿರಾಸೆ ಆಗಬಾರದು ಎನ್ನುವುದು ಸರಕಾರದ ಬಯಕೆಯಾಗಿದೆ. ಪ್ರತಿಮೆಯು ಮತ್ತಷ್ಟು ಆಕರ್ಷಕವಾಗಿ ಕಂಗೊಳಿಸುವಂತೆ ಮಾಡಲು ರಾತ್ರಿ ವೇಳೆ ಬೆಳಕಿನ ಅಲಂಕಾರಕ್ಕೂ ವ್ಯವಸ್ಥೆ ಮಾಡಲಾಗುವುದು ಎಂದು ಅವರು ಹೇಳಿದರು.

Advertisement

ಥೀಮ್ ಪಾರ್ಕ್ ಕಾಮಗಾರಿ ಮುಗಿದ ಮೇಲೆ ಪ್ರತಿಮೆ ವೀಕ್ಷಣೆಗೆ ಮತ್ತಷ್ಟು ವ್ಯವಸ್ಥಿತ ಸೌಲಭ್ಯ ಮಾಡಲಾಗುವುದು. ಅಲ್ಲಿಯವರೆಗೆ ಇದು ತಾತ್ಕಾಲಿಕ ವ್ಯವಸ್ಥೆ ಆಗಿರುತ್ತದೆ. ಪ್ರತಿಮೆ ವೀಕ್ಷಣೆ ಗೆ ಯಾವುದೇ ಶುಲ್ಕ ಇರುವುದಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next