ಬೆಂಗಳೂರು: ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಲಯಾಳಂ ಭಾಷೆ ಗೊತ್ತಿದ್ದರೆ ಮಾತ್ರ ಕೇರಳದಲ್ಲಿ ಸರ್ಕಾರಿ ಉದ್ಯೋಗ ಎಂದು ನೀಡಿರುವ ಹೇಳಿಕೆ ಕಾಸರಗೋಡಿನಲ್ಲಿ ನೆಲೆಸಿರುವ ಕನ್ನಡಿಗರಿಗೆ ಭಾಷಾ ಅಲ್ಪಸಂಖ್ಯಾತರಡಿ ದೊರೆಯುತ್ತಿರುವ ಸೌಲಭ್ಯಗಳಿಗೆ ಧಕ್ಕೆಯನ್ನುಂಟು ಮಾಡುವಂತಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಆಂತಕ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು ಕೇರಳ ಮುಖ್ಯಮಂತ್ರಿಗಳ ಈ ಹೇಳಿಕೆ ಭಾಷಾ ಅಲ್ಪಸಂಖ್ಯಾತ ಪ್ರದೇಶವಾದ ಕಾಸರಗೋಡಿನಲ್ಲಿ ನೆಲೆಸಿರುವ ಕನ್ನಡ ಭಾಷಿಕರಿಗೆ ತಮ್ಮ ಭಾಷೆಯಲ್ಲಿ ಸೌಲಭ್ಯಗಳನ್ನು ಪಡೆದುಕೊಳ್ಳುವುದರಿಂದ ವಂಚಿಸುವ ಪ್ರಯತ್ನವಾಗಿದೆ ಎಂದು ದೂರಿದ್ದಾರೆ.
ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿರುವ ಭಾಷಾ ಅಲ್ಪಸಂಖ್ಯಾತ ಪ್ರದೇಶವಾದ ಕಾಸರಗೋಡಿನಲ್ಲಿ ಮಲೆಯಾಳಂ ಭಾಷೆಯಿಂದ ವಿನಾಯಿತಿ ಇದ್ದು ಅದು ಹಾಗೆಯೇ ಮುಂದುವರಿಯಬೇಕು.ಒಂದು ವೇಳೆ ಕಾಸರಗೋಡಿನ ಕನ್ನಡಗರಿಗೂ ಮಲೆಯಾಳಿ ಭಾಷೆಯನ್ನು ಉದ್ಯೋಗದ ದೃಷ್ಟಿಯಿಂದ ಕಡ್ಡಾಯ ಮಾಡಿದರೆ ಅದು ಭಾಷಾ ಅಲ್ಪಸಂಖ್ಯಾತರಿಗೆ ಸಂವಿಧಾನತ್ಮಕವಾಗಿ ನೀಡಿದ ಹಕ್ಕಿನ ಉಲ್ಲಂಘನೆಯಾಗುತ್ತದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ :ಪ್ರಾಧಿಕಾರದಿಂದ ಮಲತಾಯಿ ಧೋರಣೆ : ನೆಲಕಚ್ಚಿದ ಆನೆಗೊಂದಿ ಪ್ರವಾಸೋದ್ಯಮ
ಭಾಷಾ ಅಲ್ಪಸಂಖ್ಯಾತರಿಗೆ ಇರುವ ಸಂವಿಧಾನಾತ್ಮಕ ರಕ್ಷಣೆಗೆ ಭಂಗ ಬಂದಂತಾಗುತ್ತದೆ.ಈ ನಿಟ್ಟಿನಲ್ಲಿ ಕೇರಳದ ಮುಖ್ಯಮಂತ್ರಿಗಳು ನೀಡಿರುವ ಹೇಳಿಕೆ ಬಗ್ಗೆ ಹಾಗೂ ಕಾಸರಗೋಡಿನಲ್ಲಿ ಇದರ ಅನುಷ್ಠಾನದ ಸಂಬಂಧ ಅಲ್ಲಿನ ಸರ್ಕಾರ ಮತ್ತೊಮ್ಮೆ ಪುನರ್ ಪರಿಶೀಲಿಸಬೇಕೆಂದು ಆಗ್ರಹಿಸಿದ್ದಾರೆ.