ಹೊಸದಿಲ್ಲಿ : ಭಾರಿ ಮಳೆ ಅಬ್ಬರಕ್ಕೆ ತತ್ತರಿಸಿ ಹೋಗಿರುವ ಕೇರಳದಲ್ಲಿ ಕಳೆದ ಎರಡು ದಿನಗಳಲ್ಲಿ ಬಲಿಯಾದವರ ಸಂಖ್ಯೆ ಭಾನುವಾರ 21 ಕ್ಕೇರಿದೆ . ಇನ್ನೊಂದೆಡೆ ಪ್ರಧಾನಿ ನರೇಂದ್ರ ಮೋದಿ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಕರೆ ಮಾಡಿ ಪರಿಸ್ಥಿತಿಯ ಬಗ್ಗೆ ಕೇಳಿದ್ದಾರೆ.
ಭಾನುವಾರವೂ ಮಳೆ ಮುಂದುವರಿದಿದ್ದು.ರಾಜ್ಯದ ವಿವಿಧ ಕಡೆಗಳಲ್ಲಿ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು ಭೂಕುಸಿತಗಳು ಸಂಭವಿಸುತ್ತಿವೆ.
ಭೂಸೇನೆ, ವಾಯುಪಡೆ, ಮತ್ತೆ ನೌಕಾ ಪಡೆಯ ಸಿಬ್ಬಂದಿಗಳು ಭರದಿಂದ ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ. ಒಟ್ಟು 105 ಪರಿಹಾರ ಶಿಬಿರಗಳನ್ನು ತೆರೆಯಲಾಗಿದ್ದು, ಇನ್ನೂ ಹೆಚ್ಚಿನ ಕ್ಯಾಂಪ್ ತೆರೆಯಲು ಸರಕಾರ ನಿರ್ಧರಿಸಿದೆ.
ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಕೊಟ್ಟಾಯಂ, ಅಲಪುಳ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ ಮತ್ತು ಕೋಯಿಕ್ಕೋಡ್ ಜಿಲ್ಲೆಗಳಿಗೆ ಇಂದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮುಂದಿನ 24 ಗಂಟೆಗಳಲ್ಲಿ ಕೇರಳದಲ್ಲಿ ಭಾರೀ ಮಳೆಯಾಗುತ್ತದೆ ಮತ್ತು ನಂತರ ಕಡಿಮೆಯಾಗುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭೂಕುಸಿತ ಪೀಡಿತ ಪ್ರದೇಶಗಳಾದ ಕೂಟ್ಟಿಕಲ್, ಕೊಟ್ಟಾಯಂ ದಕ್ಷಿಣ ಭಾಗಗಳಲ್ಲಿ ನೌಕಾ ಪಡೆ ರಕ್ಷಣಾ ಕಾರ್ಯ ನಡೆಸುತ್ತಿದೆ. ಹಲವರನ್ನು ರಕ್ಷಿಸಿ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ.