ಚಾಮರಾಜನಗರ: ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಕಟ್ಟಡ ಕಾಮಗಾರಿ ಪ್ರಗತಿಯಲ್ಲಿದೆ. ಇನ್ನು ಮೂರು ತಿಂಗಳ ಅವಧಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಿ ಉದ್ಘಾಟನೆಗೆ ಸಜ್ಜುಗೊಳಿಸಬೇಕು ಎಂದು ನಗರಾಭಿವೃದ್ಧಿ ಪ್ರಾಧಿಕಾರದ (ಚುಡಾ) ಅಧ್ಯಕ್ಷ ಸುಹೇಲ್ ಅಲಿ ಖಾನ್ ಸೂಚಿಸಿದರು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಅವರು, ಎಸ್ಪಿ ಕಚೇರಿ ಹಿಂಭಾದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಸ್ವಂತ ಕಟ್ಟಡ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ನೆಲ ಅಂತಸ್ತು ಕಾಮಗಾರಿ ಪೂರ್ಣವಾಗಿದೆ.
ಕಟ್ಟಡದ ಇನ್ನೂ ಹಲವು ಕಾಮಗಾರಿಗಳು ಬಾಕಿಯಿದ್ದು, ಇನ್ನು ಮೂರು ತಿಂಗಳ ಅವಧಿಯಲ್ಲಿ ನಿಗದಿ ಕಟ್ಟಡವನ್ನು ಪೂರ್ಣ ಮಾಡಬೇಕು. ಮೂರು ತಿಂಗಳ ನಂತರ ನೂತನ ಕಟ್ಟಡ ಉದ್ಘಾಟನೆಯಾಗಬೇಕು. ನೂತನ ಕಚೇರಿಯಲ್ಲಿ ಕೆಲಸ ನಿರ್ವಹಿಸುವಂತಾಗಬೇಕು. ಈ ಬಗ್ಗೆ ತ್ವರಿತ ಗತಿಯಲ್ಲಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಕೇಂದ್ರವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೆಚ್ಚಿನ ಅನುದಾನವನ್ನು ನೀಡಿದೆ. ಪಟ್ಟಣದ ವಿವಿಧ ರಸ್ತೆಗಳ ಅಭಿವೃದ್ಧಿ, ಅಗಲೀಕರಣ ಸೇರಿದಂತೆ ಅನೇಕ ಕಾಮಗಾರಿಗಳನ್ನು ನಡೆಸುತ್ತಿದೆ. ಇದರಿಂದ ನಗರದಲ್ಲಿ ಸುಲಲಿತ ಸಂಚಾರಕ್ಕೆ ಅನುಕೂಲವಾಗಲಿದೆ. ಅಲ್ಲದೇ ಸೌಂದರ್ಯ ಹೆಚ್ಚಲಿದೆ ಎಂದರು.
ಹಾಗೆಯೇ ಪ್ರಾಧಿಕಾರದಿಂದ ಚಾಲ್ತಿಯಲ್ಲಿರುವ ಯೋಜನೆಗಳು ಸಹ ಪ್ರಗತಿಯಲ್ಲಿವೆ. ನಗರವನ್ನು ಅಭಿವೃದ್ಧಿ ಪಡಿಸಿ, ಬಡಾವಣೆಗಳು, ಕೈಗಾರಿಕಾ ಪ್ರದೇಶಗಳನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ಭೂಪರಿವರ್ತನೆಗೆ ಬಂದ ಅರ್ಜಿಗಳನ್ನು ಶೀಘ್ರ ಇತ್ಯರ್ಥ ಗೊಳಿಸಬೇಕು ಎಂದು ಅಧ್ಯಕ್ಷರು ಸೂಚನೆ ನೀಡಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಸುದರ್ಶನಗೌಡ, ಶ್ರೀಕಾಂತ್, ಆಶಾ, ಆಯುಕ್ತ ಲಸುಮಾನಾಯಕ, ಸರ್ಕಲ್ ಇನ್ಸ್‌ಪೆಕ್ಟರ್ ಮಹದೇವಯ್ಯ, ಆರೋಗ್ಯಾಧಿಕಾರಿ ಡಾ.ವಿಶ್ವೇಶ್ವರಯ್ಯ, ಕುಡಿಯುವ ನೀರು ಹಾಗೂ ಒಳಚರಂಡಿ ಮಂಡಳಿಯ ಸಹಾಯಕ ಎಂಜಿನಿಯರ್, ಚುಡಾ ಸಹಾಯಕ ಎಂಜಿನಿಯರ್ ಪರಶಿವಮೂರ್ತಿ ಇತರರು ಸಭೆಯಲ್ಲಿ ಭಾಗವಹಿಸಿದ್ದರು.