ಬೆಂಗಳೂರು: ರಾಜ್ಯದ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಆಗಿದ್ದು ಪಕ್ಷಾತೀತವಾಗಿ ಅಭಿನಂದನೆಗಳನ್ನು ಸಲ್ಲಿಸಲಾಗಿದೆ.
ಮಾಜಿ ಪ್ರಧಾನಿ,ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದು, ”ನನ್ನ ಹಲವು ದಶಕಗಳ ಗೆಳೆಯ ಮತ್ತು ಸಹೋದ್ಯೋಗಿ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ಅವರು ಅಧ್ಯಕ್ಷರಾಗಿರುವುದು ಕಾಂಗ್ರೆಸ್ ಮತ್ತು ಕರ್ನಾಟಕಕ್ಕೆ ಹೆಮ್ಮೆಯ ಮತ್ತು ಐತಿಹಾಸಿಕ ಕ್ಷಣವಾಗಿದೆ. ಅವರು ಪಕ್ಷವನ್ನು ಭಾರತದಾದ್ಯಂತ ಹೊಸ ಎತ್ತರಕ್ಕೆ ಕೊಂಡೊಯ್ಯಲು ದೇವರು ಅವರಿಗೆ ಶಕ್ತಿಯನ್ನು ನೀಡಲಿ” ಎಂದು ಟ್ವೀಟ್ ಮಾಡಿದ್ದಾರೆ.
”ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಾರ್ದಿಕ ಅಭಿನಂದನೆಗಳು.ಪ್ರತಿಭೆ ಮತ್ತು ಅನುಭವವನ್ನು ಮೈಗೂಡಿಸಿಕೊಂಡ ಖರ್ಗೆಯವರಿಗೆ ಕಾಂಗ್ರೆಸ್ ಪಕ್ಷವನ್ನು ಯಶಸ್ಸಿನ ಹಾದಿಯಲ್ಲಿ ಮುನ್ನಡೆಸುವ ಶಕ್ತಿ ಇದೆ.ಖರ್ಗೆಯವರ ಆಯ್ಕೆ ಕನ್ನಡಿಗರಿಗೂ ಹೆಮ್ಮೆಯ ಸಂಗತಿ” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.
ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹೃದಯ ಪೂರ್ವಕ ಅಭಿನಂದನೆಗಳು. ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷ ಇನ್ನಷ್ಟು ಎತ್ತರಕ್ಕೇರಲಿದೆ ಎನ್ನುವ ವಿಶ್ವಾಸವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ 7,897 ಮತ ಪಡೆದು ಜಯಗಳಿಸಿದ್ದು, ಪ್ರತಿಸ್ಪರ್ಧಿ ಶಶಿ ತರೂರ್ ಕೇವಲ 1,072 ಮತ ಪಡೆದು ಪರಾಜಯಗೊಂಡಿದ್ದಾರೆ.