ಚಾಮರಾಜನಗರ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ ನಗರದ ಮಕ್ಕಳ ಸ್ನೇಹಿ ಹಾಗೂ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್‌ಸ್ ನ್ಯಾಯಾಲಯ ಪೋಕ್ಸೋ ಕಾಯ್ದೆಯಡಿ 2 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದೆ.
ಜಿಲ್ಲೆಯ ಹನೂರು ತಾಲೂಕಿನ ಮಂಗಲ ಗ್ರಾಮದ ರಮೇಶ (23) ಶಿಕ್ಷೆಗೊಳಗಾದ ಅಪರಾಧಿ. ಈತ 2020ರ ಸೆ.29 ರಂದು ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಲೈಂಗಿಕ ಕಿರುಕುಳ ಎಸಗಿದ್ದಾನೆ ಎಂದು ಹನೂರು ಠಾಣೆ ಎಸ್‌ಐ ನಾಗೇಶ್ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.
ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಎ.ಸಿ. ನಿಶಾರಾಣಿಯವರು ಅಪರಾಧಿಗೆ 2 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿದ್ದಾರೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಬಾಲಕಿಗೆ 20 ಸಾವಿರ ರೂ. ಪರಿಹಾರ ನೀಡಬೇಕೆಂದು ತೀರ್ಪು ನೀಡಿದ್ದಾರೆ. ವಿಶೇಷ ಸರ್ಕಾರಿ ಅಭಿಯೋಜಕ ಕೆ. ಯೋಗೇಶ್ ಪ್ರಾಸಿಕ್ಯೂಷನ್ ಪರ ವಾದ ಮಂಡಿಸಿದ್ದರು.