Advertisement

ಮೀನುಗಾರರಿಗೆ ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಸೌಲಭ್ಯ; ಕಾರ್ಡ್‌ ವಿತರಿಸಲು ಸಿಎಂ ಸೂಚನೆ

10:33 PM Aug 24, 2022 | Team Udayavani |

ಬೆಂಗಳೂರು: ಕೇಂದ್ರ ಸರಕಾರವು ಮೀನುಗಾರಿಕೆ ಹಾಗೂ ಪಶು ಸಂಗೋಪನೆಯನ್ನು ಕೃಷಿಗೆ ಪೂರಕ ಚಟುವಟಿಕೆಗಳೆಂದು ಗುರುತಿಸಿ, ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಸೌಲಭ್ಯವನ್ನು ವಿಸ್ತರಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೀನುಗಾರರಿಗೆ ಆದ್ಯತೆ ಮೇರೆಗೆ ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಸೌಲಭ್ಯವನ್ನು ಒದಗಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದರು.

Advertisement

ಬುಧವಾರ ಗೃಹ ಕಚೇರಿ “ಕೃಷ್ಣಾ’ದಲ್ಲಿ ರಾಜ್ಯಮಟ್ಟದ ಬ್ಯಾಂಕರ್‌ಗಳ ಸಭೆ ನಡೆಸಿ ಈ ಕುರಿತು ಚರ್ಚಿಸಿದ ಅವರು, ಮೊದಲ ಹಂತದಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೀನುಗಾರರಿಗೆ ಕಾರ್ಡುಗಳನ್ನು ತ್ವರಿತವಾಗಿ ಒದಗಿಸುವಂತೆ ತಿಳಿಸಿದರು.

ಮೀನುಗಾರರ ಬಗ್ಗೆ ತಮ್ಮಲ್ಲಿರುವ ಮಾಹಿತಿಯನ್ನು ಮೀನುಗಾರಿಕೆ ಇಲಾಖೆಯು ಬ್ಯಾಂಕರ್‌ಗಳಿಗೆ ಒದಗಿಸಲು ಮುಖ್ಯಮಂತ್ರಿಗಳು ಸೂಚಿಸಿದರು.

ಮೀನುಗಾರರ ಆದಾಯ ಹೆಚ್ಚಿಸಲು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಮತ್ಸé ಸಂಪದ ಮತ್ತು ಇತರ ಯೋಜನೆಗಳಲ್ಲಿ ವಿವಿಧ ಸವಲತ್ತುಗಳನ್ನು ವಿತರಿಸಲಾಗುತ್ತಿದೆ. ಮೀನುಗಾರರ ಸಂಘ ಸ್ಥಾಪಿಸಿ ನೆರವು ನೀಡಲಾಗುತ್ತಿದೆ. ಮೀನುಗಾರ ಮಹಿಳೆಯರ ಸ್ವಸಹಾಯ ಗುಂಪುಗಳನ್ನು ರಚಿಸಿ, ಆದಾಯ ಉತ್ಪನ್ನ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ನೆರವು ನೀಡಲಾಗುವುದು.

ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಈ ಸೌಲಭ್ಯಗಳ ವಿತರಣೆ ಸಂದರ್ಭದಲ್ಲಿ ಮಹತ್ತರ ಪಾತ್ರ ವಹಿಸಲಿದೆ. ಮೀನುಗಾರರ ಸಹಕಾರ ಬ್ಯಾಂಕ್‌ಗಳ ಮೂಲಕವೂ ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ನೀಡುವಂತೆ ನಿರ್ದೇಶಿಸಿದರು.

Advertisement

ಆಳ ಸಮುದ್ರ ಮೀನುಗಾರಿಕೆ ಬೋಟ್‌ಗಳ ಖರೀದಿಗೆ ನೆರವು ನೀಡುವ ಯೋಜನೆಗೆ ಅತ್ಯುತ್ತಮ ಪ್ರತಿಕ್ರಿಯೆ ದೊರೆತಿದ್ದು, ಈಗಾಗಲೇ 185 ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಮೀನುಗಾರಿಕೆ ಮತ್ತು ಬಂದರು ಸಚಿವ ಎಸ್‌. ಅಂಗಾರ, ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್‌. ಮಂಜುನಾಥ್‌ ಪ್ರಸಾದ್‌, ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್‌, ಮೀನುಗಾರಿಕಾ ಇಲಾಖೆ ಕಾರ್ಯದರ್ಶಿ ಸಲ್ಮಾ ಫಾಹಿಮ್‌, ರಾಜ್ಯ ಮಟ್ಟದ ಬ್ಯಾಂಕರ್‌ಗಳ ಸಮಿತಿ ಸಂಚಾಲಕ ಮುರಳಿಕೃಷ್ಣ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next