ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಅಪಾರ ಹಾನಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವಿಶೇಷ ಅನುದಾನ ಬಿಡುಗಡೆಗೆ ಪ್ರಯತ್ನಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಅವರು ಭರವಸೆ ನೀಡಿದ್ದಾರೆ.
ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಮಳೆಯಿಂದ ಹಾನಿಗೊಳ ಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಪ್ರವಾಹ ಸಂತ್ರಸ್ತರಿಗೆ ಅಗತ್ಯ ಪರಿಹಾರ ನೀಡುವುದರ ಜತೆಗೆ ಶಾಶ್ವತ ಸೂರು ಕಲ್ಪಿಸಲಾಗುವುದು. ರಸ್ತೆ, ವಿದ್ಯುತ್, ಬೆಳೆ, ಮನೆ ಹಾನಿ ಸಹಿತ ಎಲ್ಲ ನಷ್ಟದ ಕುರಿತು ಕಂದಾಯ ಸಚಿವರಿಗೂ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.
ಮಡಿಕೇರಿ -ಸಂಪಾಜೆ ಹೆದ್ದಾರಿಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ತ್ವರಿತ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಹಿರಿಯ ಎಂಜಿನಿಯರ್‌ಗಳ ಜತೆ ಚರ್ಚಿಸಲಾಗುವುದು ಎಂದರು.
ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಜತೆಗಿದ್ದರು. ಸಚಿವರು ಹಾಗೂ ಶಾಸಕರು ಮಡಿಕೇರಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿಯ ಕರ್ತೋಜಿ ಸಹಿತ ವಿವಿಧೆಡೆ ಭೇಟಿ ನೀಡಿ ಪರಿಶೀಲಿಸಿದರು.