ಮಡಿಕೇರಿ: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಹೆಚ್ಚಿನ ಮಾಹಿತಿ ದೊರೆಯುವಂತಾಗಬೇಕು ಎಂದು ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದರು.
ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಂದರ್ಭ ಅವರು ಈ ಸೂಚನೆ ನೀಡಿದರು. ಸಭೆಯಲ್ಲಿ ಹಲವು ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು. ಪ್ರವಾಸೋದ್ಯಮ ನಿಯಮಾನುಸಾರ ಅಗತ್ಯ ಕ್ರಮ ಕೈಗೊಳ್ಳಬೇಕು.
ಪ್ರವಾಸಿಗರಿಗೆ ಹೆಚ್ಚಿನ ಮಾಹಿತಿ ದೊರೆಯುವಂತಾಗಬೇಕು ಎಂದು ಸೂಚಿಸಿದರು. ಜಿಲ್ಲೆಯಲ್ಲಿ 4 ಸಾವಿರ ಹೋಂ ಸ್ಟೇಗಳಿದ್ದು, ಸುಮಾರು 1,900ರಷ್ಟು ಹೋಂ ಸ್ಟೇಗಳು ನೋಂದಣಿಯಾಗಿವೆ. ಉಳಿದ ಹೋಂ ಸ್ಟೇಗಳನ್ನು ನೋಂದಣಿ ಮಾಡಿಸಬೇಕು ಎಂದು ತಿಳಿಸಿದರು.
ಸಭೆಯ ಆರಂಭದಲ್ಲಿ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕಿ ಅನಿತಾ ಭಾಸ್ಕರ್ ಮಾಹಿತಿ ನೀಡಿ, ಹೋಂ ಸ್ಟೇ ಮಾಲಕರು ಹಾಗೂ ಟ್ಯಾಕ್ಸಿ ಮಾಜಿಕರಿಗೆ ತರಬೇತಿ ಕಾರ್ಯಾಗಾರ ಏರ್ಪಡಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯ ಪ್ರವಾಸಿ ಕೇಂದ್ರಗಳಲ್ಲಿ ಹೆದ್ದಾರಿ ಫಲಕ ಹಾಗೂ ಸೈನೇಜ್ ಬೋರ್ಡ್‌ಗಳನ್ನು ಅಳವಡಿಸಲು ಉದ್ದೇಶಿಸಲಾಗಿದ್ದು, ಆ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಲು ಮುಂದಾಗಲಾಗಿದೆ ಎಂದರು.