ಮಡಿಕೇರಿ: ಕಾಫಿ, ಭತ್ತ, ಕರಿಮೆಣಸು ಮೊದಲಾದ ಬೆಳೆಗಳನ್ನು ಬೆಳೆಯುವ ಬೆಳೆಗಾರರನ್ನು ಸಂಪೂರ್ಣವಾಗಿ ಕಡೆಗಣಿಸಿರುವ ಕೇಂದ್ರ ಸರ್ಕಾರ, ಯಾವುದೇ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲವೆಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಿಸಾನ್ ಘಟಕ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.
ನಗರದ ಗಾಂಧಿ ಮಂಟಪದ ಬಳಿಯಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿವರೆಗೆ ತೆರಳಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಆರ್ಥಿಕ ಕ್ಷೇತ್ರದಲ್ಲಿ ವೈಫಲ್ಯವನ್ನೇ ಕಾಣುತ್ತಿರುವ ಕೇಂದ್ರ ಸರ್ಕಾರ ರೈತರು ಹಾಗೂ ಬೆಳೆಗಾರರ ಬೇಡಿಕೆಗಳನ್ನು ನಿರ್ಲಕ್ಷಿಸಿದೆ ಎಂದು ಕಾಂಗ್ರೆಸ್ ಪದಾಧಿಕಾರಿಗಳು ಆರೋಪಿಸಿದರು.
ಪಕ್ಷದ ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಮಾತನಾಡಿದರು ಹುಲಿ, ಕಾಡಾನೆ ಸೇರಿದಂತೆ ಇತರ ವನ್ಯಜೀವಿಗಳು ಕೂಡ ನಾಡಿಗೆ ಲಗ್ಗೆಯಿಟ್ಟು ಮಾನವ ಪ್ರಾಣ ಮತ್ತು ಬೆಳೆಹಾನಿ ಮಾಡುತ್ತಿವೆ. ಕಾಡುಪ್ರಾಣಿಗಳಿಂದ ನಿರಂತರ ಅನಾಹುತುಗಳು ಸಂಭವಿಸುತ್ತಿದ್ದರೂ ಇದನ್ನು ನಿಯಂತ್ರಿಸುವಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ ಎಂದು ಅವರು ಆರೋಪಿಸಿದರು.
ವಿಧಾನ ಪರಿಷತ್ ಸಮಸ್ಯೆ ವೀಣಾ ಅಚ್ಚಯ್ಯ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಬೇಕಲ್ ರಮಾನಾಥ್, ವಿ.ಪಿ.ಸುರೇಶ್, ಉಪಾಧ್ಯಕ್ಷ ಎಸ್.ಎಂ.ಚಂಗಪ್ಪ, ವಕ್ತಾರರಾದ ಟಿ.ಈ.ಸುರೇಶ್, ಟಾಟುಮೊಣ್ಣಪ್ಪ, ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ.ಉಸ್ಮಾನ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ರು ರವೀಂದ್ರ, ರಾಹುಲ್ ಗಾಂಧಿ ಬ್ರಿಗೇಡ್‌ನ ಅಧ್ಯಕ್ಷ ಚುಮ್ಮಿದೇವಯ್ಯ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಸಂಯೋಜಕ ತೆನ್ನಿರಾ ಮೈನಾ, ನಗರ ಕಾಂಗ್ರೆಸ್ ಅಧ್ಯಕ್ಷ ಕೆ.ಯು.ಅಬ್ದುಲ್ ರಜಾಕ್, ಪ್ರಧಾನ ಕಾರ್ಯದರ್ಶಿ ಆರ್.ಪಿ.ಚಂದ್ರಶೇಖರ್, ಸಾಮಾಜಿಕ ಜಾಲತಾಣದ ಅಧ್ಯಕ್ಷ ಹೊಸೂರು ಸೂರಜ್, ಕಿಸಾನ್ ಘಟಕದ ಸೋಮವಾರಪೇಟೆ ಬ್ಲಾಕ್ ಅಧ್ಯಕ್ಷ ಬಸವರಾಜ್, ಕುಶಾಲನಗರ ಬ್ಲಾಕ್ ಅಧ್ಯಕ್ಷ ಹರೀಶ್, ನಾಪೋಕ್ಲು ಬ್ಲಾಕ್ ಸಾಬು ತಿಮ್ಮಯ್ಯ, ಯುವ ಕಾಂಗ್ರೆಸ್‌ನ ದೇವ್ ಕುಶಾಲನಗರ, ಡಿಸಿಸಿ ಸದಸ್ಯೆ ಗೀತಾ, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಹೊಟ್ಟೆಯಂಡ ಪಾರ್ವತಿ ಫ್ಯಾನ್ಸಿ, ನಗರಸಭಾ ಮಾಜಿ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಮಾಜಿ ಸದಸ್ಯ ಪ್ರಕಾಶ್ ಆಚಾರ್ಯ, ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷ ನವೀನ್, ವಿರಾಜಪೇಟೆ ಬ್ಲಾಕ್ ಅಧ್ಯಕ್ಷ ರಂಜಿ ಪೂಣಚ್ಚ, ಸೋಮವಾರಪೇಟೆ ಬ್ಲಾಕ್ ಅಧ್ಯಕ್ಷ ಬಿ.ಬಿ.ಸತೀಶ್, ಕುಶಾಲಗರ ಬ್ಲಾಕ್ ಅಧ್ಯಕ್ಷ ಬಿ.ಎಸ್.ಅನಂತರಾಮ, ನಾಪೋಕ್ಲು ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್, ಸದಸ್ಯ ಕೆ.ಎಂ.ಲೋಕೇಶ್ ಪ್ರಮುಖರಾದ ಧರ್ಮಜ ಉತ್ತಪ್ಪ, ರಾಜ್ಯ ಕಾರ್ಮಿಕ ಘಟಕದ ಕಾರ್ಯದರ್ಶಿ ಅಜ್ಜಳ್ಳಿ ರವಿ ಸೇರಿದಂತೆ ಪಕ್ಷದ ಇತರ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಪರಿಹಾರ ಸೂಚಿಸಿಲ್ಲ
ಕೆಪಿಸಿಸಿ ಸದಸ್ಯ ಟಿ.ಪಿ.ರಮೇಶ್ ಮಾತನಾಡಿ, ಕೊಡಗಿನ ರೈತರು ಹಾಗೂ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾಳಜಿ ತೋರುತ್ತಿಲ್ಲ. ಪ್ರಮುಖ ವಾಣಿಜ್ಯ ಬೆಳೆಯಾದ ಕಾಫಿ ಮತ್ತು ಕರಿಮೆಣಸಿಗೆ ಸೂಕ್ತ ಬೆಲೆ ದೊರೆಯದೆ ಮತ್ತು ವನ್ಯಜೀವಿಗಳ ದಾಳಿಯಿಂದ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದರು.
ಜಿಲ್ಲಾ ಕಾಂಗ್ರೆಸ್ ಕಿಸಾನ್ ಘಟಕದ ಜಿಲ್ಲಾಧ್ಯಕ್ಷ ನೆರವಂಡ ಉಮೇಶ್ ಮಾತನಾಡಿ ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೇಶದ ಬೆನ್ನೆಲುಬಾಗಿರುವ ರೈತರ ಹಿತ ಕಾಪಾಡುವಲ್ಲಿ ವಿಫಲವಾಗಿವೆ ಎಂದು ಆರೋಪಿಸಿದರು. ಕೊಡಗಿನ ಬೆಳೆಗಾರರು ಹಾಗೂ ರೈತರು ತಾವು ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗದೆ ಸಂಕಷ್ಟದಲ್ಲಿದ್ದಾರೆ. ಆದರೆ ರಾಜ್ಯ ಮತ್ತು ಕೇಂದ್ರ ಸರ್ಕಾರ ಮಾತ್ರ ಬೆಳೆಗಾರರು ಹಾಗೂ ರೈತರ ಬಗ್ಗೆ ಯಾವುದೇ ಕಾಳಜಿ ತೋರುತ್ತಿಲ್ಲವೆಂದು ಟೀಕಿಸಿದರು.