Advertisement

Rain ಅಬ್ಬರಕ್ಕೆ ಕೊಡಗು ತತ್ತರ: ಹಲವು ಕುಟುಂಬಗಳ ಸ್ಥಳಾಂತರ

11:46 PM Jul 18, 2024 | Team Udayavani |

ಮಡಿಕೇರಿ : ಎಡೆಬಿಡದೆ ಸುರಿಯುತ್ತಿರುವ ಮಳೆಯ ಆರ್ಭಟಕ್ಕೆ ಕೊಡಗು ತತ್ತರಗೊಂಡಿದೆ. ನದಿ, ತೊರೆಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಬರೆಗಳು ಜರಿಯುತ್ತಿದ್ದು, ರಸ್ತೆಗಳು ಜಲಾವೃತಗೊಳ್ಳುತ್ತಿವೆ. ಅನೇಕ ಮನೆಗಳು ಕುಸಿದು ಬಿದ್ದಿದ್ದು, ಅಪಾಯದಂಚಿನ ಹಲವು ಕುಟುಂಬಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ.

Advertisement

ವಿರಾಜಪೇಟೆ ತಾಲೂಕು ಅಮ್ಮತ್ತಿ ಹೋಬಳಿ ಕರಡಿಗೋಡು ಗ್ರಾಮದ ಹೊಳೆಕೆರೆಯಲ್ಲಿ ಭಾರಿ ಮಳೆಯಿಂದ ಕಾವೇರಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಈ ಹಿನ್ನೆಲೆ ಕರಡಿಗೋಡು ಹೊಳೆಕೆರೆ ಬದಿಯಲ್ಲಿ ವಾಸವಿರುವ 9 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ.

ಇನ್ನೂ ಹಲವೆಡೆ ಅಪಾಯದಲ್ಲಿರುವ ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ.

ಭಾಗಮಂಡಲ ಜಲಾವೃತ
ಕಾವೇರಿಯ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡಲದಲ್ಲಿ ಎಡೆಬಿಡದೆ ಧಾರಾಕಾರ ಮಳೆಯಾಗುತ್ತಿದೆ. ಭಾಗ ಮಂಡಲದ ತ್ರಿವೇಣಿ ಸಂಗಮ ಉಕ್ಕಿ ಹರಿಯುತ್ತಿದ್ದು, ಪ್ರವಾಹದ ನೀರು ಶ್ರೀಭಗಂಡೇಶ್ವರ ದೇವಾಲಯದ ಮೆಟ್ಟಿಲುಗಳನ್ನು ಆವರಿಸಿದೆ. ಅಕ್ಕಪಕ್ಕದ ಅಂಗಡಿಗಳು ಜಲಾವೃತಗೊಂಡಿವೆ.

ಕಳೆದ 24 ಗಂಟೆಗಳಲ್ಲಿ ತಲಕಾವೇರಿ ಮತ್ತು ಭಾಗಮಂಡಲದಲ್ಲಿ 6 ಇಂಚಿಗೂ ಅಧಿಕ ಮಳೆಯಾಗಿದೆ. ಮಳೆಯ ಪ್ರಮಾಣ ಹೆಚ್ಚಾಗಬಹುದು ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.

Advertisement

ರಸ್ತೆ ಕುಸಿಯುವ ಭೀತಿ ಹಿನ್ನೆಲೆಯಲ್ಲಿ ಫೀಲ್ಡ್‌ ಮಾರ್ಷಲ್‌ ಕೆ.ಎಂ.ಕಾರ್ಯಪ್ಪ ಕಾಲೇಜು ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ನೀರಿನ ಮಟ್ಟ ಏರಿಕೆ
ಬೇತ್ರಿಯಲ್ಲಿ ಕಾವೇರಿ ನದಿ ನೀರಿನ ಹರಿವು ಹೆಚ್ಚಾಗಿದ್ದು, ನೀರಿನ ಮಟ್ಟ ಏರಿಕೆಯಾಗುತ್ತಿದೆ. ಕುಟ್ಟ, ಹರಿಹರ, ಇರ್ಪು ಭಾಗದಲ್ಲಿ ವರುಣನ ಆರ್ಭಟ ಜೋರಾಗಿದ್ದು, ಲಕ್ಷ್ಮಣ ತೀರ್ಥ ನದಿ ಭರ್ತಿಯಾಗಿ ಬಾಳೆಲೆ ಸಮೀಪ ನಿಟ್ಟೂರು ಸೇತುವೆಯ ಪಕ್ಕದಲ್ಲಿ ನದಿಯ ಎರಡೂ ಬದಿಯ ಗದ್ದೆಗಳು ಮುಳುಗಡೆಯಾಗಿವೆ.

Advertisement

Udayavani is now on Telegram. Click here to join our channel and stay updated with the latest news.

Next