ಕೋಲ್ಕತ್ತಾ: ಸೋಮವಾರ ಬೆಳಗ್ಗೆ ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿಯಲ್ಲಿ ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್ ರೈಲೊಂದು ಹಿಂದಿನಿಂದ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅವಘಡದಲ್ಲಿ ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸೋಮವಾರ ಬಂಗಾಳದ ಸಿಲಿಗುರು ಎಂಬಲ್ಲಿ ಕಾಂಚನಜುಂಗಾ ಎಕ್ಸ್‌ಪ್ರೆಸ್ ರೈಲು ಅಪಘಾತಕ್ಕೀಡಾಗಿದೆ. ರೈಲು ಕೋಲ್ಕತ್ತಾದ ಸೀಲ್ದಾಹ್ ನಿಲ್ದಾಣಕ್ಕೆ ತೆರಳುತ್ತಿದ್ದ ವೇಳೆ ರೈಲು ಸಿಲಿಗುರಿಯ ರಂಗಪಾಣಿ ಪ್ರವೇಶಿಸುತ್ತಿದ್ದಂತೆ ಹಿಂದಿನಿಂದ ಗೂಡ್ಸ್ ರೈಲು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಅಪಘಾತದಲ್ಲಿ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳು ಹಳಿತಪ್ಪಿದ್ದು ಹಲವಾರು ಪ್ರಯಾಣಿಕರು ಗಾಯಗೊಂಡಿರುವ ಕುರಿತು ಅಧಿಕಾರಿಗಳು ಮಾಹಿತಿ ನೀಡಿದ್ದು ರಕ್ಷಣಾ ಕಾರ್ಯ ನಡೆಯುತ್ತಿದೆ.
ರಂಗಪಾಣಿ ಮತ್ತು ನಿಜಬರಿ ಬಳಿ ಸಂಭವಿಸಿದ ಅಪಘಾತದಲ್ಲಿ ಮೂರು ಬೋಗಿಗಳು ತೀವ್ರವಾಗಿ ಜಖಂಗೊಂಡಿವೆ ಎಂದು ಹೇಳಲಾಗುತ್ತಿದ್ದು. ರೈಲ್ವೆ ತಂಡ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಗಾಯಗೊಂಡ ಪ್ರಯಾಣಿಕರನ್ನು ಹೊರ ತೆಗೆಯುವ ಪ್ರಕ್ರಿಯೆನ್ನು ನಡೆಸುತ್ತಿದ್ದು ಈ ಮಾರ್ಗದ ರೈಲು ಸಂಚಾರ ಸ್ಥಗಿತಗೊಂಡಿದೆ.
ಅವಘಡ ಸಂಭವಿಸಿದ ಸ್ಥಳಕ್ಕೆ ವೈದ್ಯರು ಮತ್ತು ವಿಪತ್ತು ನಿರ್ವಹಣಾ ತಂಡಗಳನ್ನು ರವಾನಿಸಲಾಗಿದೆ ಎಂದು ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಅಪಘಾತದ ಕುರಿತು X ನಲ್ಲಿ ಪೋಸ್ಟ್ ಹಾಕಿದ್ದು ರೈಲು ಪಘಾತದ ಸುದ್ದಿ ತಿಳಿದು ಆಘಾತವಾಗಿದೆ ಕೂಡಲೇ ಅಧಿಕಾರಿಗಳಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮಾಹಿತಿ ನೀಡಿದ್ದೇನೆ ಎಂದು ಬರೆದುಕೊಂಡಿದ್ದಾರೆ.