Advertisement

ಸಕಾಲ ಬಾಕಿ ಕಡತ ವಿಲೇವಾರಿ ಮಾಡಿ

01:15 PM Jul 25, 2019 | Naveen |

ಕೊಪ್ಪಳ: ಸಕಾಲ ಸೇವೆಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ವಿಲೇವಾರಿಗೆ ಕ್ರಮ ಕೈಗೊಳ್ಳುವಂತೆ ಪ್ರಾದೇಶಿಕ ಆಯುಕ್ತ ಸುಬೋಧ್‌ ಯಾದವ್‌ ಅವರು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಾಗರಿಕರಿಗೆ ಗೊತ್ತು ಮಾಡಿದ ಕಾಲಮಿತಿಯೊಳಗೆ ಸೇವೆ ಒದಗಿಸಲು ಸಕಾಲ ತುಂಬಾ ಸಹಕಾರಿಯಾಗಿದ್ದು, ಸಕಾಲದಲ್ಲಿ ನಿಗದಿತ ಕಾಲದೊಳಗೆ ನಾಗರಿಕರಿಗೆ ಸೇವಾ ಖಾತರಿಯನ್ನು ಒದಗಿಸಬೇಕು. ನಾಗರಿಕರು ಸೇವೆಯನ್ನು ಕೋರಿ ಅರ್ಜಿ ಸಲ್ಲಿಸಿರುವಾಗ ನಿರ್ಧಿಷ್ಟ ಕಾಲ ಮಿತಿ ನೀಡಲಾಗುತ್ತದೆ. ಆ ಅವಧಿಯೊಳಗೆ ಅವರಿಗೆ ಸೌಲಭ್ಯ ಕಲ್ಪಿಸುವಂತಾಗಬೇಕು. ಸಕಾಲದಲ್ಲಿ ಅರ್ಜಿಯ ಸ್ಥಿತಿಗತಿ ಪರಿಶೀಲನೆ ನಂತರ ಹಾಗೂ ತಿರಸ್ಕೃತವಾದ ಅರ್ಜಿ ಅಥವಾ ಸೇವೆಯನ್ನು ನಿಗದಿತ ಕಾಲದೊಳಗೆ ಒದಗಿಸದಿದ್ದಲ್ಲಿ ಕುಂದು ಕೊರತೆಗಳ ಪರಿಹಾರಕ್ಕಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ಸಾರ್ವಜನಿಕರಿಂದ ಬರುವ ಮನವಿಗಳಿಗೆ ಮೊದಲು ಸ್ಪಂದಿಸಬೇಕು. ನಂತರ ಪರಿಶೀಲಿಸಿ ನಿರ್ದಿಷ್ಟ ಪಡಿಸಿದ ದಿನಗಳೊಳಗಾಗಿ ಸೇವೆ ನೀಡಬೇಕು ಎಂದರು.

ನರೇಗಾದಡಿ ಕೈಗೊಂಡ ಕೆರೆ ಹೂಳೆತ್ತುವ ಕಾಮಗಾರಿಗಳಲ್ಲಿ ಜಿಲ್ಲೆಯಲ್ಲಿ ಪೂರ್ಣಗೊಂಡ ಕಾಮಗಾರಿಗಳಲ್ಲಿ ನೀರು ಸಂಗ್ರಹವಾಗುತ್ತಿದೆಯೇ? ಎಂದು ಪ್ರಶ್ನಿಸಿದರಲ್ಲದೇ, ಗ್ರಾಮೀಣ ಪ್ರದೇಶದಲ್ಲಿ ನರೇಗಾ ಕಾಮಗಾರಿ ಕೈಗೊಳ್ಳಬೇಕು. ಉದ್ಯೋಗ ಖಾತ್ರಿಯಡಿ ಪ್ರಸಕ್ತ ಸಾಲಿನಲ್ಲಿ ಕೈಗೊಂಡ ಎಲ್ಲಾ ಕಾಮಗಾರಿಗಳ ಚಿತ್ರೀಕರಣ ಮಾಡಿ ವರದಿ ಸಲ್ಲಿಸಬೇಕು ಎಂದು ಜಿಪಂ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ನೀರನ್ನು ಒದಗಿಸಬೇಕು. ನಗರ ಸ್ಥಳೀಯ ಸಂಸ್ಥೆಗಳು ಮತ್ತು ಪಂಚಾಯತ್‌ಗಳು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದರು.

Advertisement

ಡಿಸಿ ಪಿ.ಸುನೀಲ್ ಕುಮಾರ್‌ ಮಾತನಾಡಿ, ಕುಡಿಯುವ ನೀರಿನ ಸಮಸ್ಯೆ ಇರುವ ಕಡೆ ಟ್ಯಾಂಕರ್‌ ಮೂಲಕ ನೀರು ಪೂರೈಸಲಾಗುತ್ತಿದೆ. ಅಲ್ಲದೇ ಖಾಸಗಿ ಬೋರ್‌ವೆಲ್ಗಳ ಮೂಲಕವು ಸಹ ಕೆಲ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಪ್ರಾದೇಶಿಕ ಆಯುಕ್ತರು ಪ್ರತಿಕ್ರಿಯಿಸಿ, ಈಗಾಗಲೇ ಮುಂಗಾರು ಹಂಗಾಮಿನಲ್ಲಿ ಫಸಲ್ ಭಿಮಾ ಯೋಜನೆಯಡಿ ಬೆಳೆ ವಿಮೆ ಮಾಡಿಕೊಳ್ಳುವಂತೆ ರೈತರಿಗೆ ಅರಿವು ಮೂಡಿಸಬೇಕು. ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಆಹಾರ ಮತ್ತು ಆಹಾರೇತರ ಬೆಳೆಗಳ ಸರಾಸರಿ ಇಳುವರಿ ಭಿತ್ತನೆಗೆ ಬೆಳೆಗಳ ಆದ್ಯತೆ, ಬೆಳೆಗೆ ಬರುವ ಕೀಟ, ರೋಗ ಬಾಧೆಗಳು, ಬೆಳೆ ನಷ್ಟ ಮುಂತಾದವುಗಳನ್ನು ತಿಳಿಯಲು ಸರ್ಕಾರವು ಬೆಳೆ ಸಮೀಕ್ಷೆಯನ್ನು ಆರಂಭಿಸಿದೆ. ಇದಕ್ಕಾಗಿ ಕಾರ್ಯಕರ್ತರನ್ನು ನೇಮಿಸಬೇಕು. ಸಮೀಕ್ಷೆ ಕಾರ್ಯವು ರೈತರಿಗೆ ಬೆಳೆ ವಿಮೆ ಸೇರಿದಂತೆ ಸರ್ಕಾರದ ಇತರೆ ಯೋಜನೆಗಳಿಗೆ ಪೂರಕವಾಗಿರಬೇಕು ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೊಪ್ಪಳ ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕಿ ಶಬಾನ ಎಂ. ಶೇಖ್‌ ಮಾತನಾಡಿ, ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಬೆಳೆ ಸಮೀಕ್ಷೆ ಕೈಗೊಳ್ಳಲು ಮೂಲ ಕಾರ್ಯಕರ್ತರನ್ನು ಈಗಾಗಲೇ ನೇಮಕ ಮಾಡಲಾಗಿದೆ. ಅವರಿಗೆ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಸಭೆಯಲ್ಲಿ ಜಿಪಂ ಸಿಇಒ ರಘುನಂದನ್‌ ಮೂರ್ತಿ, ಪ್ರೊಬೇಷನರಿ ಐಎಎಸ್‌ ಅಧಿಕಾರಿ ನೇಹಾ ಜೈನ್‌, ಉಪ ಅರಣ್ಯ ಸಂರಕ್ಷಣಾಧಿಕಾರಿ ಯಶಪಾಲ್ ಕ್ಷಿರಸಾಗರ, ಎಡಿಸಿ ಸೈಯಿದಾ ಅಯಿಷಾ, ಎಸಿ ಸಿ.ಡಿ. ಗೀತಾ, ಜಿಪಂ ಉಪ ಕಾರ್ಯದರ್ಶಿ ಎನ್‌.ಕೆ ತೊರವಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next