ಕೋಟ: ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆ ಜಿಲ್ಲೆಯ ಹಲವಾರು ನೈಸರ್ಗಿಕ, ಧಾರ್ಮಿಕ ಪ್ರವಾಸಿ ತಾಣಗಳನ್ನು ಗುರುತಿಸಿ ಮೂಲ ಸೌಕರ್ಯ ಅಭಿವೃದ್ಧಿಪಡಿಸಲು ಮುಂದಾಗಿದ್ದು ಈ ನಿಟ್ಟಿನಲ್ಲಿ ಕೋಟದ ಪಡುಕರೆ ಕಡಲ ಕಿನಾರೆಯನ್ನು ಪಟ್ಟಿಗೆ ಸೇರ್ಪಡೆಗೊಳಿಸಿ ಅಭಿವೃದ್ಧಿಪಡಿಸಬೇಕು ಎಂದು ಕೋಟತಟ್ಟು ಗ್ರಾ.ಪಂ. ಮುಖ್ಯಸ್ಥರು ನ.6ರಂದು ಉಡುಪಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಕೋಟತಟ್ಟು ಗ್ರಾ.ಪಂ. ಅಧ್ಯಕ್ಷ ರಘು ತಿಂಗಳಾಯ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಹಾಗೂ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಸಮಾಲೋಚಕ ಅಮಿತ್ ಕುಮಾರ್ ಅವರನ್ನು ಭೇಟಿಯಾಗಿ ಈ ಕುರಿತು ಮನವಿ ಸಲ್ಲಿಸಲಾಯಿತು.
ಪಡುಕರೆ ಕಡಲ ತೀರ ರಾಷ್ಟ್ರೀಯ ಹೆದ್ದಾರಿಯಿಂದ ಕೇವಲ 2 ಕಿ.ಮೀ. ಅಂತರದಲ್ಲಿದೆ ಹಾಗೂ ಇಲ್ಲಿನ ಸಮುದ್ರ ಕಿನಾರೆ ವಿಸ್ತಾರ ಮತ್ತು ಶಾಂತವಾಗಿರುವುದರಿಂದ ಪ್ರವಾಸಿಗರು ಈಗಾಗಲೇ ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿಗೆ ಆಗಮಿಸುತ್ತಿದ್ದಾರೆ. ಆದ್ದರಿಂದ ಅಗತ್ಯ ಮೂಲಸೌಕರ್ಯ ಕಲ್ಪಿಸಿದರೆ ಉತ್ತಮ ಪ್ರವಾಸಿತಾಣವಾಗಿ ಬೆಳೆಯುವುದರ ಜತೆಗೆ ಪ್ರಾದೇಶಿಕ ಅಭಿವೃದ್ಧಿಗೂ ಸಹಕಾರಿಯಾಗಲಿದೆ ಎಂದು ತಿಳಿಸಲಾಯಿತು.
ಮನವಿ ಸ್ವೀಕರಿಸಿದ ಅಧಿಕಾರಿಗಳು ಈ ಕುರಿತು ಸೂಕ್ತ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು.
ನಿಯೋಗದಲ್ಲಿ ಗ್ರಾ.ಪಂ. ಉಪಾಧ್ಯಕ್ಷ ಲೋಕೇಶ್ ಶೆಟ್ಟಿ, ಸದಸ್ಯ ವಾಸು ಪೂಜಾರಿ, ಪ್ರಶಾಂತ ಮಟಪಾಡಿ, ಪಡುಕರೆ, ಅಭಿಜಿತ್ ಕಾಂಚನ್, ರಂಜಿತ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.