ಬೆಂಗಳೂರು: ವಾಲ್ಮೀಕಿ ಹಗರಣದ ಬಗ್ಗೆ ಸದನದಲ್ಲಿ ನಡೆದ ಚರ್ಚೆಗೆ ಉತ್ತರ ನೀಡುವ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ವಿರುದ್ಧ ಮಾಡಿರುವ ಭ್ರಷ್ಟಾಚಾರ ಆರೋಪ ಖಂಡಿಸಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಎದುರು ಸೋಮವಾರ ಬಿಜೆಪಿ ನಾಯಕರ ಜತೆಗೆ ಪ್ರತಿಭಟನೆ ನಡೆಸಿದ್ದು, ಈ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.
ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ಮಾಜಿ ಸಚಿವ ಸುರೇಶ್ ಕುಮಾರ್, ವಿಧಾನ ಪರಿಷತ್ ಸದಸ್ಯರಾದ ಎನ್. ರವಿಕುಮಾರ್, ಪ್ರತಾಪ್ ಸಿಂಹ ನಾಯಕ್, ಶಾಂತಾರಾಮ ಸಿದ್ದಿ ಮೊದಲಾದವರ ಜತೆಗೆ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದ ಕೋಟ ಶ್ರೀನಿವಾಸ ಪೂಜಾರಿ, ಬೋವಿ ನಿಗಮದಲ್ಲಿ ನೂರಾರು ಕೋಟಿ ರೂ. ಅವ್ಯವಹಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಒಂದೋ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಇಲ್ಲವಾದರೆ ಸಿದ್ದರಾಮಯ್ಯ ಬೇಷರತ್ ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಿದರು.
ಸಿದ್ದರಾಮಯ್ಯ ಸದನದಲ್ಲಿ ಮಾತನಾಡುವಾಗ ನನ್ನ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಹಿಂದೆ ನಾನು ನಿರ್ವಹಿಸಿದ ಇಲಾಖೆಗಳಲ್ಲಿ ಒಂದು ರೂಪಾಯಿ ಭ್ರಷ್ಟಾಚಾರ ಮಾಡಿಲ್ಲ. ನನ್ನ ಮೇಲೆ ಅನುಮಾನ ಇದ್ದರೆ ಸಿಬಿಐ ತನಿಖೆ ಆದೇಶ ಮಾಡಿ ಎಂದು ಈಗಾಗಲೇ ಪತ್ರ ಬರೆದಿದ್ದೇನೆ. ನಿಮ್ಮ ಅಧಿಕಾರಿಗಳೇ ನನ್ನ ಭ್ರಷ್ಟಾಚಾರ ಸಾಬೀತು ಪಡಿಸಿದರೆ ನಾನು ಶಿಕ್ಷೆ ಅನುಭವಿಸುವುದಕ್ಕೆ ಸಿದ್ಧ ಎಂದಿದ್ದೇನೆ ಎಂದರು.