ಬೆಂಗಳೂರು : ಹಿಂದುಳಿದ ವರ್ಗಗಳ ಇಲಾಖೆಗೆ ಸೇರಿದ ರಾಜ್ಯದ ವಿದ್ಯಾರ್ಥಿನಿಲಯಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಒದಗಿಸುವ ಪ್ರಸ್ತಾವನೆಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅನುಮೋದನೆ ನೀಡಿದರು.
ವಿಕಾಸಸೌಧದಲ್ಲಿ ಮಂಗಳವಾರ ಹಿಂದುಳಿದ ವರ್ಗಗಳ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ, ಅವರು ಮಾತನಾಡಿದರು.
ಬಿಸಿಎಂ ಹಾಸ್ಟೆಲ್ ಗಳಲ್ಲಿ ಮಕ್ಕಳಿಗೆ ಹಾಸಿಗೆ, ಮಂಚ, ಚಪಾತಿ ತಯಾರಿಕೆ ಯಂತ್ರಗಳು, ಸೋಲಾರ್ ಮತ್ತು ಗೀಸರ್ ಗಳನ್ನು ಒದಗಿಸುವ ಪ್ರಸ್ತಾವನೆಗೆ ಸಚಿವರು ಒಪ್ಪಿಗೆ ಸೂಚಿಸಿ, ಖರೀದಿ ವೇಳೆ ಗುಣಮಟ್ಟ ಕಾಯ್ದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ರಾಜ್ಯದೆಲ್ಲೆಡೆ ಶಿಥಿಲವಾಗಿರುವ ಹಾಸ್ಟೆಲ್ ಕಟ್ಟಡಗಳನ್ನು 150 ಕೋಟಿ ರೂ. ವೆಚ್ಚದಲ್ಲಿ ದುರಸ್ತಿಗೆ ಸಚಿವರು ಒಪ್ಪಿಗೆ ಸೂಚಿಸಿದರು.
ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಸಮವಸ್ತ್ರ ಮತ್ತು ಕಲಿಕಾ ಸಾಮಗ್ರಿಗಳ ವಿತರಣೆ, ದೀನದಯಾಳ್ ಉಪಾಧ್ಯಾಯ ಮತ್ತು ಕನಕದಾಸ ಹಾಸ್ಟೆಲ್ ಕಟ್ಟಡಗಳ ನಿರ್ಮಾಣ ಪ್ರಗತಿ, ವಿದ್ಯಾರ್ಥಿಗಳಿಗೆ ವಿವಿಧ ಸ್ಕಾಲರ್ ಶಿಪ್ ಗಳ ವಿತರಣೆ ಹಾಗೂ ಸಮುದಾಯ ಭವನಗಳ ಮಂಜೂರಾತಿ ಮತ್ತು ಅನುದಾನ ಬಿಡುಗಡೆ ಕುರಿತು ಸಚಿವರು ಅಧಿಕಾರಿಗಳೊಂದಿಗೆ ಪ್ರಗತಿ ಪರಾಮರ್ಶೆ ನಡೆಸಿದರು.
ವಿವಿಧ ಕಾರ್ಯಕ್ರಮಗಳು ಮತ್ತು ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ತುಳಸಿ ಮದ್ದಿನೇನಿ, ಆಯುಕ್ತ ಕೆ.ಎ.ದಯಾನಂದ, ವಿವಿಧ ಅಭಿವೃದ್ಧಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಉಪಸ್ಥಿತರಿದ್ದರು.
ಇದನ್ನೂ ಓದಿ: ಕೊರಟಗೆರೆಯಲ್ಲಿ ಶಕ್ತಿ ಪ್ರದರ್ಶನಕ್ಕೆ ಸಜ್ಜಾದ ಬಿಜೆಪಿ: ಜನಸಂಕಲ್ಪ ಯಾತ್ರೆ, ಬೃಹತ್ ಸಮಾವೇಶ