ಡಾಲಿ ಧನಂಜಯ್ ಅಭಿನಯದ “ಕೋಟಿ’ ಸಿನಿಮಾದ ಮೊದಲ ಹಾಡು “ಮಾತು ಸೋತು’ ಬಿಡುಗಡೆಯಾಗಿದೆ. ಈ ಹಾಡನ್ನು ವಾಸುಕಿ ವೈಭವ್ ಸಂಯೋಜಿಸಿದ್ದು, ಯೋಗರಾಜ್ ಭಟ್ ಸಾಹಿತ್ಯ ರಚಿಸಿ, ಅರ್ಮಾನ್ ಮಲಿಕ್ ಹಾಡಿದ್ದಾರೆ.
“ಇದು ನನ್ನ ಮತ್ತು ಅರ್ಮಾನ್ ಮಲಿಕ್ ಕಾಂಬಿನೇಶನ್ನ ಮೊದಲ ಹಾಡು. ಸಾಹಿತ್ಯ ಯೋಗರಾಜ್ ಭಟ್ ಅವರದ್ದು. ಅವರ ಜತೆ ಕೆಲಸ ಮಾಡುವುದು ಯಾವಾಗಲೂ ಖುಷಿ ಮತ್ತು ಕಲಿಕೆಯ ವಿಚಾರ. ಜನರಿಗೆ ಖಂಡಿತ ಈ ಹಾಡು ಇಷ್ಟವಾಗುತ್ತದೆ ಎಂಬ ನಂಬಿಕೆ ಇದೆ ಎನ್ನುವುದು ವಾಸುಕಿ ವೈಭವ್ ಮಾತು.
“ವಾಸುಕಿ ಹೊಸ ತಲೆಮಾರಿನ ಪ್ರತಿಭಾವಂತ ಸಂಗೀತ ನಿರ್ದೇಶಕ. ಯೋಗರಾಜ್ ಭಟ್ ಅವರ ಸಾಹಿತ್ಯದ ದೊಡ್ಡ ಅಭಿಮಾನಿ ನಾನು. ಈ ಇಬ್ಬರ ಕಾಂಬಿನೇಶನ್ನ ಈ ಹಾಡನ್ನು ಅರ್ಮಾನ್ ಮಲಿಕ್ ತುಂಬಾ ಚೆನ್ನಾಗಿ ಹಾಡಿದ್ದಾರೆ. ಈ ಹಾಡು ಕನ್ನಡದ ಕಿವಿ ಮತ್ತು ಮನಸುಗಳಿಗೆ ಇಷ್ಟವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ’ ಎನ್ನುತ್ತಾರೆ “ಕೋಟಿ’ ನಿರ್ದೇಶಕ ಪರಮ್.
ಕೋಟಿ ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ರಮೇಶ್ ಇಂದಿರಾ, ತಾರಾ, ಸರ್ದಾರ್ ಸತ್ಯ ಮುಂತಾದವರು ಅಭಿನಯಿಸಿದ್ದಾರೆ.
ಚಿತ್ರದಲ್ಲಿ ಐದು ಹಾಡುಗಳಿದ್ದು ವಾಸುಕಿ ವೈಭವ್ ರಾಗ ಸಂಯೋಜಿಸಿದ್ದಾರೆ. ಈ ಹಾಡುಗಳಿಗೆ ಯೋಗರಾಜ್ ಭಟ್ ಮತ್ತು ವಾಸುಕಿ ವೈಭವ್ ಸಾಹಿತ್ಯ ರಚಿಸಿದ್ದಾರೆ.