ಬೆಂಗಳೂರು: ಪ್ರತಿಯೊಬ್ಬ ಉಪಾಧ್ಯಕ್ಷರಿಗೆ ಎರಡು ಅಥವಾ ಎರಡಕ್ಕಿಂತ ಹೆಚ್ಚು ಲೋಕಸಭಾ ಕ್ಷೇತ್ರಗಳು ಮತ್ತು ಪ್ರಧಾನ ಕಾರ್ಯದರ್ಶಿಗೆ ಒಂದೊಂದು ವಿಧಾನಸಭಾ ಕ್ಷೇತ್ರದ ಉಸ್ತುವಾರಿ ವಹಿಸಲು ಕೆಪಿಸಿಸಿ ನಿರ್ಧರಿಸಿದ್ದು, ಒಂದೆರಡು ದಿನಗಳಲ್ಲಿ ಉಸ್ತುವಾರಿ ಪಟ್ಟಿ ಪ್ರಕಟಗೊಳ್ಳಲಿದೆ.
ಈ ಸಂಬಂಧ ಎಲ್ಲ ಐವರು ಕಾರ್ಯಾಧ್ಯಕ್ಷರು ಮತ್ತು ಚುನಾವಣ ಪ್ರಚಾರ ಸಮಿತಿ ಅಧ್ಯಕ್ಷರಿಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ.
ಕೆಪಿಸಿಸಿಗೆ ಈಚೆಗಷ್ಟೇ 44 ಉಪಾಧ್ಯಕ್ಷರು ಮತ್ತು 144 ಪ್ರಧಾನ ಕಾರ್ಯದರ್ಶಿಗಳ ನೇಮಕ ಮಾಡಲಾಗಿದೆ. ಆ ಪೈಕಿ ಉಪಾಧ್ಯಕ್ಷರಿಗೆ ಲೋಕಸಭಾ ಕ್ಷೇತ್ರಗಳ ಉಸ್ತುವಾರಿ ವಹಿಸಿದರೆ, ಪ್ರಧಾನ ಕಾರ್ಯದರ್ಶಿಗಳಿಗೆ ವಿಧಾನಸಭಾ ಕ್ಷೇತ್ರಗಳ ಜವಾಬ್ದಾರಿ ನೀಡಿ, ತಳಮಟ್ಟದಲ್ಲಿ ಕಾರ್ಯಕರ್ತರನ್ನು ಒಗ್ಗೂಡಿಸುವ ಮೂಲಕ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಲು ಸೂಚಿಸಲು ನಿರ್ಧರಿಸಲಾಗಿದೆ. ಒಂದೆರಡು ದಿನಗಳಲ್ಲೇ ಈ ಸಂಬಂಧದ ಪಟ್ಟಿ ಕೂಡ ಸಿದ್ಧಗೊಳ್ಳಬೇಕು ಎಂದೂ ನಿರ್ದೇಶನ ನೀಡಿರುವುದಾಗಿ ಮೂಲಗಳು ತಿಳಿಸಿವೆ.
ನಗರದ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಲೋಕಸಭಾ ಚುನಾವಣೆ ಪೂರ್ವಸಿದ್ಧತೆ ಹಿನ್ನೆಲೆಯಲ್ಲಿ ನೂತನವಾಗಿ ನೇಮಕಗೊಂಡ ಪದಾಧಿಕಾರಿಗಳೊಂದಿಗೆ ಡಿ.ಕೆ.ಶಿವಕುಮಾರ್ ಮೊದಲ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಎಲ್ಲ ಪದಾಧಿಕಾರಿಗಳಿಗೆ ತಮ್ಮ ಸಾಮರ್ಥ್ಯ ಪ್ರದರ್ಶನಕ್ಕೆ ಇದೊಂದು ಉತ್ತಮ ಅವಕಾಶವಾಗಿದೆ. ಎಲ್ಲರಿಗೂ ಲೋಕಸಭೆ ಮತ್ತು ವಿಧಾನಸಭೆ ಕ್ಷೇತ್ರಗಳ ಜವಾಬ್ದಾರಿಗಳನ್ನು ನೀಡಲಾಗುವುದು. ಪದಾಧಿಕಾರಿಗಳೆಲ್ಲರೂ ತಮ್ಮ ವೋಟಿಂಗ್ ಬೂತ್‌ಗಳಲ್ಲಿ ಮುನ್ನಡೆ ಬರುವಂತೆ ನೋಡಿಕೊಳ್ಳಬೇಕು. ಜತೆಗೆ ಉಸ್ತುವಾರಿ ನೀಡಲಾಗುವ ವ್ಯಾಪ್ತಿಯಲ್ಲೂ ಮುನ್ನಡೆ ಸಾಧಿಸಬೇಕು ಎಂದು ಹೇಳಿದರು.