Advertisement
ತನಗೆ ರಾಜಕೀಯ ಬದುಕು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಗುಡ್‌ಬೈ ಹೇಳಿ, ಆ ಮೂಲಕ ತಮ್ಮ 5 ದಶಕಗಳಿಗೂ ಹೆಚ್ಚಿನ ಅವಧಿಯ ರಾಜಕಾರಣ ದಿಂದ ನಿವೃತ್ತಿ ಹೊಂದಲಿದ್ದಾರೆ. ಪಕ್ಷ ತಮ್ಮನ್ನು ನಿರ್ಲಕ್ಷಿಸಿರುವುದಕ್ಕೆ ಬೇಸರಗೊಂಡು ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ರವಿವಾರ ಅವರು ಪತ್ರಿಕಾಗೋಷ್ಠಿ ಕರೆದಿದ್ದು, ರಾಜಕೀಯ ನಿವೃತ್ತಿ ಬಗ್ಗೆ ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆ ಇದೆ.
Related Articles
Advertisement
ಇನ್ನು ಸಾಕು ರಾಜಕಾರಣಸುದೀರ್ಘ ರಾಜಕಾರಣದಲ್ಲಿ ಸಕ್ರಿಯರಾಗಿ ಕಾರ್ಯ ನಿರ್ವಹಿಸಿ, ಈಗ 84ರ ಇಳಿ ವಯಸ್ಸಿನಲ್ಲಿ ರಾಜಕೀಯದಿಂದ ದೂರ ಉಳಿದು, ನೆಮ್ಮದಿಯ ಜೀವನ ನಡೆಸಲು ಎಸ್.ಎಂ.ಕೃಷ್ಣ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ. ಅರವತ್ತರ ದಶಕದಿಂದಲೂ ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಗುರುತಿಸಿಕೊಂಡು ಬಂದಿರುವ ಕೃಷ್ಣ, ಶಾಸಕರಾಗಿ, ಸಂಸದರಾಗಿ, ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. 1968ರಿಂದ ನಾಲ್ಕು ಬಾರಿ ಮಂಡ್ಯದಿಂದ ಸಂಸದರಾಗಿ ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರ ಸಂಪುಟದಲ್ಲಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ. ನಂತರ ರಾಜ್ಯ ರಾಜಕಾರಣಕ್ಕೆ ಮರಳಿದ್ದ ಅವರು, ಮಂಡ್ಯ ಜಿಲ್ಲೆಯ ಮದ್ದೂರು ಕ್ಷೇತ್ರವನ್ನು ತಮ್ಮ ಕಾರ್ಯಕ್ಷೇತ್ರವನ್ನಾಗಿ ಮಾಡಿಕೊಂಡರು. 1999ರಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಕಾಂಗ್ರೆಸ್ಸನ್ನು ಸ್ವತಂತ್ರವಾಗಿ ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾದರು. 1999ರಿಂದ 2004ರವರೆಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ನಾಟಕ ನಂಬರ್ ಒನ್ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಆದರೆ, 2004ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಅವರು ವೈಯಕ್ತಿಕ ಸೋಲು ಕಾಣುವಂತಾಯಿತು. ರಾಜ್ಯದಲ್ಲಿ ಅಧಿಕಾರ ಕಳೆದುಕೊಂಡಿದ್ದರಿಂದ ಕೇಂದ್ರದ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರಕಾರ, ಕೃಷ್ಣ ಅವರನ್ನು ಮಹಾರಾಷ್ಟ್ರದ ರಾಜ್ಯಪಾಲರನ್ನಾಗಿ ನೇಮಿಸಿತು. ನಂತರ ರಾಜ್ಯಸಭಾ ಸದಸ್ಯರನ್ನಾಗಿ
ಮಾಡಿ, ಯುಪಿಎ-2ರಲ್ಲಿ ಕೇಂದ್ರ ಸಂಪುಟ ಸೇರಿಸಿಕೊಂಡು ಮಹತ್ವದ ವಿದೇಶಾಂಗ ಖಾತೆ ನೀಡಿತ್ತು. 2012ರಲ್ಲಿ ವಿದೇಶಾಂಗ ಸಚಿವ ಸ್ಥಾನದಿಂದ ನಿರ್ಗಮಿಸಿದ ಬಳಿಕ ಸಕ್ರಿಯ ರಾಜಕಾರಣದಿಂದ ಬಹುತೇಕ ದೂರ ಉಳಿದಿದ್ದ ಕೃಷ್ಣ, 2013ರ ವಿಧಾನಸಭಾ ಚುನಾವಣೆ ಹಾಗೂ 2014ರ ಲೋಕಸಭಾ ಚುನಾವಣೆ ವೇಳೆ ಕೆಲವು ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿ, ರಾಜಕೀಯದಲ್ಲಿ ತಮ್ಮ ಅಸ್ತಿತ್ವ ತೋರಿಸುವ ಪ್ರಯತ್ನ ನಡೆಸಿದ್ದರು.