ರಾಯಚೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಆರ್‌ಪಿಐ ಜಾತ್ಯತೀತ ಪಕ್ಷದಿಂದ 100 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಪಕ್ಷದ ರಾಜ್ಯಾಧ್ಯಕ್ಷ ಎಚ್. ಕೃಷ್ಣಪ್ಪ ಗುಣಸಾಗರ ತಿಳಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಷ್ಟ್ರ ಮಟ್ಟದಲ್ಲಿರುವ ಆರ್‌ಪಿಐ ಜಾತ್ಯತೀತ ಪಕ್ಷವನ್ನು ಕರ್ನಾಟಕದಲ್ಲಿ ಬಲವರ್ಧನೆಗೊಳಿಸಲು ಅನೇಕ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ರಾಜ್ಯದ ನಾಲ್ಕು ವಿಭಾಗಗಳಲ್ಲಿ ಪ್ರವಾಸ ಕೈಗೊಂಡು ಪಕ್ಷದ ಜಿಲ್ಲಾ, ನಗರ ಹಾಗೂ ಇತರೆ ಸಮಿತಿಗಳನ್ನು ರಚಿಸಲಾಗುತ್ತಿದೆ. ಹೋದಲ್ಲೆಲ್ಲ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದರು.
ರಾಯಚೂರು ನಗರ ಸಾಮಾನ್ಯ ಕ್ಷೇತ್ರಕ್ಕೆ ಆರ್‌ಪಿಐ ಜಾತ್ಯತೀತ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ರಾಮಣ್ಣ ಆರ್.ಎಚ್.ಜೆ. ಅವರಿಗೆ ಟಿಕೆಟ್ ನೀಡಲಾಗುವುದು. ಉಳಿದ ಕ್ಷೇತ್ರಗಳಿಗೆ ಶೀಘ್ರದಲ್ಲೇ ಅಭ್ಯರ್ಥಿಗಳ ಪಟ್ಟಿ ಬಹಿರಂಗ ಪಡಿಸಲಾಗುವುದು ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ಸರ್ಕಾರ ದೀನ ದಲಿತರು, ಆದಿವಾಸಿಗಳು, ಅಲ್ಪಸಂಖ್ಯಾತರ ಹಾಗೂ ಇತರೆ ವರ್ಗಗಳ ಅಭಿವೃದ್ಧಿ ಮಾಡುವಲ್ಲಿ ವಿಫಲವಾಗಿದೆ. ರಾಜ್ಯದಲ್ಲಿ ಅನೇಕ ಸಮಸ್ಯೆಗಳಿದ್ದರೂ ಸಿಎಂ ಸಿದ್ದರಾಮಯ್ಯ ಅವುಗಳನ್ನು ಪರಿಹರಿಸದೇ ಜನರಿಗೆ ಮೋಸ ಮಾಡಿದ್ದಾರೆ ಎಂದು ದೂರಿದರು. ಈ ವಿಧಾನಸಭೆ ಚುನಾವಣೆಯಲ್ಲಿ 100 ಕಡೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಮೂಲಕ ಪಕ್ಷದ ಪ್ರಚಾರ, ಸಂಘಟನೆಯನ್ನು ರಾಜ್ಯದ ಜನರಿಗೆ ಮನವರಿಕೆ ಮಾಡಿಕೊಡಲಿದ್ದು, ಮುಂದಿನ ಐದು ವರ್ಷದಲ್ಲಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಲಾಗುವುದು ಎಂದು ಹೇಳಿದರು.
ರಾಜ್ಯ ಕಾರ್ಯಾಧ್ಯಕ್ಷ ರಾಮಣ್ಣ ಆರ್.ಎಚ್. ಜೆ, ಮಹಿಳಾ ಸಮಿತಿ ರಾಜ್ಯಾಧ್ಯಕ್ಷೆ ವನಿತಾ ಎಂ., ಮುಖಂಡರಾದ ಎನ್.ರಾಜ, ಮಂಜುಳಾ, ಎಂ.ಶಿವರಾಜ, ತಾಯಪ್ಪ ಇದ್ದರು.