Advertisement
ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ ಜಲಾಶಯಕ್ಕೆ ಪ್ರಸ್ತುತ 45 ಸಾವಿರಕ್ಕೂ ಹೆಚ್ಚು ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ಜಲಾಶಯ ಶೀಘ್ರವೇ ಭರ್ತಿಯಾಗುವ ಸಾಧ್ಯತೆ ಇದೆ. ಹಾಸನದ ಗೊರೂರು ಹೇಮಾವತಿ ಜಲಾಶಯ ಭರ್ತಿಯಾಗುವ ಹಂತದಲ್ಲಿದ್ದು, ಡ್ಯಾಂನಿಂದ ನದಿಗೆ ನೀರು ಬಿಡಲಾಗುತ್ತಿದೆ. ಬೇಲೂರು ಸಮೀಪ ನಿರ್ಮಾಣವಾಗಿರುವ ಯಗಚಿ ಜಲಾಶಯವೂ ಬಹುಪಾಲು ಭರ್ತಿಯಾಗಿದೆ.
ಕೆಆರ್‌ಎಸ್ ಡ್ಯಾಂನ ನೀರಿನ ಮಟ್ಟ 120 ಅಡಿ ದಾಟುತ್ತಿದ್ದಂತೆ ಕಾವೇರಿ ನದಿಗೆ ನೀರು ಬಿಡಲಾಗುವುದು. ಆದ್ದರಿಂದ, ಮುಂಜಾಗ್ರತೆಗೆ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಡಿಸಿ ಡಾ| ಕುಮಾರ ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ಕಾವೇರಿ ನದಿ ಪಾತ್ರದ ಗ್ರಾಮಗಳನ್ನು ಗುರುತಿಸಲಾಗಿದೆ. ಒಟ್ಟು 92 ಗ್ರಾಮಗಳಲ್ಲಿ ಪ್ರವಾಹ ಉಂಟಾಗಿ ತೊಂದರೆಯಾಗಬಹುದೆಂದು ಅಂದಾಜಿಸಲಾಗಿದೆ. ಈ ಗ್ರಾಮಗಳಿಗೆ ಖುದ್ದು ಅಧಿಕಾರಿಗಳು ಭೇಟಿ ನೀಡಿ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪರಿಶೀಲಿಸಬೇಕೆಂದು ತಿಳಿಸಿದರು.